ಬೆಂಗಳೂರು : ರೈತರಿಗೆ ಬರ ಪರಿಹಾರ ಸಂಬಂಧ ಸತತ ಮೂರು ಬಾರಿ ಮನವಿ ಪತ್ರಗಳನ್ನು ಸಲ್ಲಿಕೆ ಮಾಡಿದರೂ, ಕೇಂದ್ರ ಸರಕಾರದಿಂದ ಇದುವರೆಗೂ ಯಾವುದೇ ಸ್ಪಂದನೆ ಇಲ್ಲ ಎಂದು ಕಂದಾಯ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬುಧವಾರ ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರದಿಂದ ಪರಿಹಾರ ಪಡೆಯುವ ಸಂಬಂಧ ಈಗಾಗಲೇ ಮೂರು ಬಾರಿ ಮನವಿ ಸಲ್ಲಿಸಲಾಗಿದೆ. ಆದರೆ, ಈವರೆಗೂ ಯಾರಿಂದಲೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಕಳೆದ ಬಾರಿಯೂ ಕೇಂದ್ರ ಸರಕಾರ ರಾಜ್ಯಕ್ಕೆ ಪರಿಹಾರ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ನಾವು ಪ್ರತಿಭಟನೆ ನಡೆಸಿ, ಸುಪ್ರೀಂ ಕೋರ್ಟ್ ಮೊರೆ ಹೋದ ಬಳಿಕ ನ್ಯಾಯಾಲಯದ ನಿರ್ದೇಶನದ ಮೇರೆಗೆ ಪರಿಹಾರ ನೀಡಲಾಯಿತು. ಆದರೆ, ಈ ಬಾರಿಯೂ ಅದೇ ಪರಿಸ್ಥಿತಿ ಮರುಕಳಿಸುವುದಿಲ್ಲ ಎಂಬ ವಿಶ್ವಾಸವಿದೆ ಎಂದರು.

ಇದು ಕಾಂಗ್ರೆಸ್ ಪಕ್ಷದ ಸರಕಾರ ಎಂಬ ಕಾರಣಕ್ಕೆ ಕೇಂದ್ರ ಸರಕಾರ ಬೇರೆ ರೀತಿಯಲ್ಲಿ ಯೋಚಿಸಬಾರದು. ಜನರು ಸಂಕಷ್ಟದಲ್ಲಿದ್ದಾರೆ, ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಎಲ್ಲ ರಾಜಕೀಯ ಪಕ್ಷಗಳಲ್ಲೂ ರೈತರಿದ್ದಾರೆ. ಹೀಗಾಗಿ ರೈತರ ಸಂಕಷ್ಟದ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದ ಅವರು, ಕೇಂದ್ರ ಸರಕಾರದಿಂದ ಪರಿಹಾರ ಪಡೆಯುವ ಸಂಬಂಧ ಸರ್ವಪಕ್ಷ ಸಭೆ ಕರೆದು, ಎಲ್ಲ ಪಕ್ಷಗಳ ನಾಯಕರನ್ನು ಒಳಗೊಂಡ ನಿಯೋಗವನ್ನು ಹೊಸದಿಲ್ಲಿಗೆ ಕರೆದೊಯ್ಯಬೇಕು ಎಂದು ಮುಖ್ಯಮಂತ್ರಿಗಳು ಈಗಾಗಲೇ ಹೇಳಿದ್ದಾರೆ. ಪರಿಹಾರ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಮೊರೆ ಹೋಗುವ ಕುರಿತು ಸದ್ಯಕ್ಕೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರ ಯಾವ ರೀತಿ ನಡೆದುಕೊಳ್ಳುತ್ತದೆ ಎಂಬುದನ್ನು ಗಮನಿಸಿ ತೀರ್ಮಾನಿಸಲಾಗುವುದು ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಪರಿಹಾರದ ವಿಚಾರದಲ್ಲಿ ರಾಜ್ಯ ಸರಕಾರ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸುತ್ತಿರುವ ಕುರಿತು ಪ್ರತಿಕ್ರಿಯಿಸಿ, ಅವರೂ ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದವರು. ರಾಜ್ಯ ಸರಕಾರ ತನ್ನ ಪಾಲಿನ ಪರಿಹಾರವನ್ನು ನೀಡುತ್ತಿದೆ. ಎರಡು ಹಂತಗಳಲ್ಲಿ ತಲಾ 1,250 ಕೋಟಿ ಪರಿಹಾರ ನೀಡುವ ಕ್ರಮ ಕೈಗೊಳ್ಳಲಾಗಿದೆ. ಕೇಂದ್ರ ಸರಕಾರದಿಂದ ನೆರವು ದೊರೆಯಬಹುದೆಂಬ ನಿರೀಕ್ಷೆಯೊಂದಿಗೆ ರಾಜ್ಯ ತನ್ನ ಪಾಲಿನ ಜವಾಬ್ದಾರಿಯನ್ನು ನಿರ್ವಹಿಸುತ್ತಿದೆ ಎಂದು ಅವರು ತಿಳಿಸಿದರು.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಮೀರ್ ದಳಸನೂರು-ವಾರ್ತಾಭಾರತಿ

ಬೆಂಗಳೂರು ವರದಿಗಾರರು

ಸಮೀರ್ ದಳಸನೂರು ಇವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂಎಸ್ಸಿ ಪದವಿ ಪಡೆದಿದ್ದು, ದೂರದರ್ಶನದ ಚಂದನ ವಾಹಿನಿಯಲ್ಲಿ ಅರೆಕಾಲಿಕ ಸಹಾಯಕ ಸುದ್ದಿ ಸಂಪಾದಕರಾಗಿ, ಆಕಾಶವಾಣಿಯಲ್ಲೂ ಅರೆಕಾಲಿಕ ಸುದ್ದಿ ವಿಭಾಗದಲ್ಲಿ ಕಾರ್ಯ ನಿರ್ವಹಿಸಿರುವ ಅನುಭವ ಇದೆ. ಪ್ರಸ್ತುತ ಹಲವು ವರ್ಷಗಳಿಂದ ವಾರ್ತಾಭಾರತಿ ಕನ್ನಡ ದೈನಿಕ ಬೆಂಗಳೂರು ಆವೃತ್ತಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವಾಸಿ ಅನುಭವದ ವಿಶೇಷ ಲೇಖನಗಳನ್ನು ಬರೆಯುವುದು, ಪುಸ್ತಕ ಓದುವುದು, ಸಾಮಾಜಿಕ ಸೇವಾ ಕಾರ್ಯಗಳು ಇವರ ಹವ್ಯಾಸವಾಗಿವೆ.