ಧರ್ಮಸ್ಥಳ ಪ್ರಕರಣ; ಸಂಚುಕೋರರ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಮೆಟ್ಟಿಲೇರಿದ ಚಿನ್ನಯ್ಯ
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಸಂಸ್ಕಾರ ಪ್ರಕರಣಗಳ ಕುರಿತ ತನಿಖೆಯನ್ನು ಶೀಘ್ರ ಪೂರ್ಣಗೊಳಿಸಲು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತವರ ಕುಟುಂಬದ ವಿರುದ್ಧ ವ್ಯವಸ್ಥಿತ ಪಿತೂರಿ ನಡೆಸಿರುವವರ ವಿರುದ್ಧ ಕ್ರಮ ಕೈಗೊಂಡು, ತನಿಖೆಯನ್ನು ಶೀಘ್ರ ಪೂರ್ಣಗೊಳಿಸಿ ಅಂತಿಮ ವರದಿ ಸಲ್ಲಿಸಲು ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ನಿರ್ದೇಶಿಸುವಂತೆ ಕೋರಿ ಆರೋಪಿ ಸಿ.ಎನ್.ಚಿನ್ನಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಪ್ರಕರಣದಲ್ಲಿ ತನ್ನೊಬ್ಬನನ್ನೇ ಬಲಿಪಶು ಮಾಡಲಾಗಿದ್ದು, ಪಿತೂರಿ ನಡೆಸಿದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಆದ್ದರಿಂದ, ಈ ನಿಟ್ಟಿನಲ್ಲಿ ಶೀಘ್ರ ಕ್ರಮ ಕೈಗೊಳ್ಳಲು ಎಸ್ಐಟಿಗೆ ನಿರ್ದೇಶಿಸಬೇಕು ಎಂದು ಕೋರಿ ಮಂಡ್ಯ ಮೂಲದ, ಪ್ರಸ್ತುತ ಧರ್ಮಸ್ಥಳ ವಾಸ್ತವ್ಯ ಹೊಂದಿರುವ ಸಿ.ಎನ್. ಚಿನ್ನ (50) ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಎಸ್‌ಐಟಿ ಮುಖ್ಯಸ್ಥರು ಹಾಗೂ ಧರ್ಮಸ್ಥಳ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಜೂನ್ 29ಕ್ಕೆ ಮುಂದೂಡಿತು.