ಇಂದಿರಾ ಕ್ಯಾಂಟೀನ್‌ನಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆ: ಬೈರತಿ ಸುರೇಶ್
ಬೆಂಗಳೂರು : ಇಂದಿರಾ ಕ್ಯಾಂಟೀನ್ ಗಳಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಜಾರಿಗೆ ತರಲು ಕ್ರಮ ವಹಿಸಲಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.
ವಿಧಾನಪರಿಷತ್ತಿನಲ್ಲಿ ಸದಸ್ಯ ಜಗದೇವ್ ಗುತ್ತೇದಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಂದಿರಾ ಕ್ಯಾಂಟೀನ್ ಗಳಲ್ಲಿ ಕಾಲಕಾಲಕ್ಕೆ ಆಯಾ ಪ್ರದೇಶಗಳಿಗೆ ಅನುಗುಣವಾಗಿ ಆಹಾರವನ್ನು ಪೂರೈಕೆ ಮಾಡಲಾಗುತ್ತಿದೆ. ಎಲ್ಲಿಯಾದರೂ ವ್ಯತ್ಯಯ ಉಂಟಾದಲ್ಲಿ ಕೂಡಲೇ ಸರಿಪಡಿಸುವಂತೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುತ್ತದೆ ಎಂದು ತಿಳಿಸಿದರು.
ಇಂದಿರಾ ಕ್ಯಾಂಟೀನ್ ಗಳಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಜಾರಿಗೆ ತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು ಎಂದು ಸಚಿವ ಬೈರತಿ ಸುರೇಶ್ ಅವರು ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದರು.
ಕಲಬುರಗಿಯಲ್ಲಿ 2027ರ ವೇಳೆಗೆ ನಿರಂತರ ನೀರು
ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿರಂತರ ನೀರಿನ ಸರಬರಾಜು ಕಾಮಗಾರಿ ಪ್ರಗತಿಯಲ್ಲಿದೆ. ಕೋವಿಡ್, ರೈಲ್ವೆಯಿಂದ ಜಾಗ ಹಸ್ತಾಂತರ ಸೇರಿದಂತೆ ಇನ್ನಿತರ ಕಾರಣಗಳಿಂದ ಕಾಮಗಾರಿ ವಿಳಂಬವಾಗಿದೆ. ವಿಳಂಬಕ್ಕಾಗಿ ಗುತ್ತಿಗೆದಾರ ಸಂಸ್ಥೆಗೆ ಸುಮಾರು 60 ಕೋಟಿ ರೂಪಾಯಿ ದಂಡವನ್ನೂ ವಿಧಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.
ವಿಧಾನಪರಿಷತ್ತಿನಲ್ಲಿ ಮಂಗಳವಾರ ಪ್ರಶ್ನೋತ್ತರ ಕಲಾಪದಲ್ಲಿ ಸುನೀಲ್ ವಲ್ಯಾಪುರೆ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 837 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರಂತರ ಕುಡಿಯುವ ನೀರು ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. 2027 ರ ವೇಳೆಗೆ ಕಾಮಗಾರಿಯನ್ನು ಪೂರ್ಣಗೊಳಿಸಲಾಗುತ್ತದೆ ಎಂದು ತಿಳಿಸಿದರು.
ಕಲಬುರಗಿ ನಗರದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಅಭಿವೃದ್ಧಿ ಮಂಡಳಿಯ ಪ್ರಾದೇಶಿಕ ನಿಧಿಯಡಿ ಸೇಡಂ ರಿಂಗ್ ರಸ್ತೆಯಲ್ಲಿ ಫ್ಳೈಓವರ್ ನಿರ್ಮಾಣಕ್ಕೆ ಜಾಗದ ಬಗ್ಗೆ ಕೆಲವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಇದನ್ನು ತೆರವುಗೊಳಿಸಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ತಡೆಯಾಜ್ಞೆ ತೆರವಾದ ತಕ್ಷಣ ಕಾಮಗಾರಿಯನ್ನು ಆರಂಭಿಸಲಾಗುತ್ತದೆ ಎಂದು ಹೇಳಿದರು.