ರಾಜ್ಯದಲ್ಲಿ ಜನೌಷಧಿ ಕೇಂದ್ರ ಮುಚ್ಚಿಸಿಲ್ಲ, ಸರಕಾರಿ ಆಸ್ಪತ್ರೆಗಳ ಆವರಣದಲ್ಲಿ ನಿರ್ಬಂಧ : ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್
ಬೆಂಗಳೂರು : ರಾಜ್ಯದಲ್ಲಿ ಎಲ್ಲಿಯೂ ಜನೌಷಧಿ ಕೇಂದ್ರಗಳನ್ನು ಮುಚ್ಚಿಸಿಲ್ಲ. ಬದಲಾಗಿ, ಸರಕಾರಿ ಆಸ್ಪತ್ರೆ ಆವರಣಗಳಲ್ಲಿ ಮಾತ್ರ ನಿರ್ಬಂಧಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪುನರುಚ್ಚಿರಿಸಿದ್ದಾರೆ.
ಬುಧವಾರ ಈ ಕುರಿತು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರಿಗೆ ಪತ್ರದ ಮುಖೇನ ಸ್ಪಷ್ಟನೆ ನೀಡಿರುವ ಅವರು, ಸರಕಾರಿ ಆಸ್ಪತ್ರೆಗಳಲ್ಲಿ ಜನಸಾಮಾನ್ಯರಿಗೆ ಉಚಿತ ಔಷಧಿಗಳನ್ನು ನಿರಾಕರಿಸಬಾರದೆಂದು ಈ ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೆ, ದೇಶದಲ್ಲಿಯೇ ಜನೌಷಧಿ ಕೇಂದ್ರಗಳನ್ನು ಹೊಂದಿರುವ ರಾಜ್ಯಗಳ ಪೈಕಿ ಕರ್ನಾಟಕ ಅಗ್ರಸ್ಥಾನದಲ್ಲಿದೆ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ 1,417ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ರಾಜ್ಯದಲ್ಲಿ ಸರಕಾರಿ ಆಸ್ಪತ್ರೆಗಳ ಆವರಣದಲ್ಲಿ ಮಾತ್ರ ಜನೌಷಧಿ ಕೇಂದ್ರಗಳನ್ನು ನಿರ್ಬಂಧಿಸಲು ನಿರ್ಧರಿಸಲಾಗಿದೆ. ರಾಜ್ಯ ಸರಕಾರ ಎಲ್ಲ ಸರಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಅಗತ್ಯ ಔಷಧಗಳ ಪಟ್ಟಿಯ ಪ್ರಕಾರ, ಔಷಧಿಗಳನ್ನು ಉಚಿತವಾಗಿ ಪೂರೈಸುತ್ತಿದೆ ಎಂದು ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಔಷಧಾಲಯಗಳಿಂದ ಔಷಧಿಗಳನ್ನು ಖರೀದಿಸಲು ರೋಗಿಗಳು ಭರಿಸುವ ವೆಚ್ಚವನ್ನು ಕಡಿಮೆ ಮಾಡುವುದು ರಾಜ್ಯ ಸರಕಾರದ ನಿರ್ಧಾರವಾಗಿದೆ. ಇದು ಸರಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳನ್ನು ಪಡೆಯುವ ಬಡ ಮತ್ತು ಹಿಂದುಳಿದ ರೋಗಿಗಳಿಗೆ ಅನುಕೂಲಕರವಾಗುತ್ತದೆ ಎಂದು ದಿನೇಶ್ ಗುಂಡೂರಾವ್ ಅವರು ಜೆ.ಪಿ ನಡ್ಡಾ ಅವರಿಗೆ ಬರೆದ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.