ಫೈನಾನ್ಸ್ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡರೆ ಪರಿಹಾರ ಕಲ್ಪಿಸಲು ಚರ್ಚೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡವರ ಅವಲಂಬಿತರಿಗೆ 5 ಲಕ್ಷ ರೂ. ಪರಿಹಾರ ನೀಡುವ ನಿಟ್ಟಿನಲ್ಲಿ ಚರ್ಚೆ ಮಾಡಿ ಕ್ರಮ ವಹಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗುರುವಾರ ಪರಿಷತ್ತಿನ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಸಿ.ಎನ್.ಮಂಜೇಗೌಡ ಪ್ರಶ್ನೆಗೆ ಉತ್ತರಿಸಿದ ಅವರು, ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಸಾವನ್ನಪ್ಪಿದ ಪ್ರಕರಣದಲ್ಲಿ ನಾವು ಪರಿಹಾರ ನೀಡುತ್ತಿಲ್ಲ. ಆದರೆ ಪರಿಹಾರ ನೀಡುವ ಬಗ್ಗೆ ಆರ್ಥಿಕ ಇಲಾಖೆ ಮತ್ತು ಮುಖ್ಯ ಕಾರ್ಯದರ್ಶಿಗಳ ಜತೆಗೂ ಚರ್ಚೆ ಮಾಡಲಾಗುವುದು ಎಂದರು.
ಸಾಲದಿಂದ ರೈತರು ಆತ್ಮಹತ್ಯೆ ಮಾಡಿಕೊಂಡರೆ ಯಾವ ರೀತಿ 5 ಲಕ್ಷ ರೂ.ಗಳ ಪರಿಹಾರ ದೊರೆಯುತಿತ್ತೋ, ಅದೇ ರೀತಿ ಇನ್ನು ಮುಂದೆ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡವರಿಗೆ 5 ಲಕ್ಷ ರೂ.ಗಳ ಪರಿಹಾರವನ್ನು ನೀಡಲು ಚರ್ಚೆ ಮಾಡಲಾಗುತ್ತದೆ ಎಂದು ಅವರು ವಿವರಿಸಿದರು.
ನಮ್ಮ ಸರಕಾರ ಕರ್ನಾಟಕ ಕಿರುಸಾಲ ಮತ್ತು ಸಣ್ಣಸಾಲ ಬಲವಂತದ ಕ್ರಮಗಳ ಪ್ರತಿಬಂಧಕ ಕಾಯ್ದೆ -2025 ಕಾನೂನು ಮಾಡಿದೆ. ಅನುಷ್ಠಾನದಲ್ಲಿ ಸಣ್ಣಪುಟ್ಟ ದೋಷವಿರಬಹುದು, ಆದರೆ ಕಾನೂನನ್ನೇ ಸರಿಯಿಲ್ಲ ಎಂಬುದು ಸೂಕ್ತವಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಸಂಬಂಧಿಸಿ 2023ರಲ್ಲಿ 6 ಪ್ರಕರಣಗಳು ದಾಖಲಾಗಿದ್ದು, 8 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದರು. 2024ರಲ್ಲಿ 27 ಪ್ರಕರಣ ದಾಖಲು 6 ಮಂದಿ ಸಾವು, 2025ರಲ್ಲಿ 105 ಪ್ರಕರಣ ದಾಖಲಾಗಿದ್ದು, 24 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದರು.