ಸಿಎಂ ಬದಲಾವಣೆ ಬಗ್ಗೆ ಕೇವಲ ಮಾಧ್ಯಮಗಳಲ್ಲಿ ಮಾತ್ರ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್
ಡಿಸಿಎಂ ಡಿ.ಕೆ. ಶಿವಕುಮಾರ್ (Photo:X/@DKShivakumar)
ಹೊಸದಿಲ್ಲಿ: “ಅಧಿಕಾರ, ಹುದ್ದೆಗಿಂತ ಪಕ್ಷದ ಕಾರ್ಯಕರ್ತನಾಗಿರಲು ನಾನು ಬಯಸುತ್ತೇನೆ. ನನಗೆ ಅದೇ ಶಾಶ್ವತ. 1980ರಿಂದ ನಾನು ಪಕ್ಷದ ಕಾರ್ಯಕರ್ತನಾಗಿದ್ದು, 45 ವರ್ಷಗಳಿಂದ ಇಲ್ಲಿಯವರೆಗೂ ಪಕ್ಷಕ್ಕಾಗಿ ದುಡಿಯುತ್ತಿರುವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ದಿಲ್ಲಿಯ ಕರ್ನಾಟಕ ಭವನದಲ್ಲಿ ಬುಧವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಪತ್ರಕರ್ತರೊಬ್ಬರು ನೀವು ಐದು ವರ್ಷಗಳ ಕಾಲ ಉಪಮುಖ್ಯಮಂತ್ರಿಯಾಗಿರಲು ಬಯಸುತ್ತೀರಾ ಎಂದು ಕೇಳಿದಾಗ ಶಿವಕುಮಾರ್ ಅವರು ಈ ರೀತಿ ಪ್ರತಿಕ್ರಿಯಿಸಿದರು.
ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆಯ ಒಪ್ಪಂದ ನಡೆದಿತ್ತೇ ಎಂದು ಕೇಳಿದಾಗ, “ನಮ್ಮ ನಡುವೆ ಏನೆಲ್ಲಾ ಚರ್ಚೆಯಾಗಿತ್ತು ಎಂದು ನಾನು ಬಹಿರಂಗಪಡಿಸಲು ಸಾಧ್ಯವಿಲ್ಲ. ನಾವು ಒಟ್ಟಾಗಿ ಸೇರಿ ಕೆಲಸ ಮಾಡಿ, ಸರ್ಕಾರವನ್ನು ರಚಿಸಿದ್ದೇವೆ. ಪ್ರತಿ ಕಾರ್ಯಕರ್ತರು ಪಕ್ಷಕ್ಕಾಗಿ ತಮ್ಮ ಬೆವರು ಹರಿಸಿ ದುಡಿದಿದ್ದಾರೆ. ನಮಗೆ ಸ್ಪಷ್ಟ ಬಹುಮತ ನೀಡಿದ ರಾಜ್ಯದ ಜನರಿಗೆ ನಾವು ಚಿರಋಣಿಯಾಗಿರುತ್ತೇವೆ. ಅವರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಿದ್ದು, ಇದನ್ನು ಮುಂದುವರಿಸುತ್ತೇವೆ. ಹೈಕಮಾಂಡ್ ಕೂಡ ನಮಗೆ ಸ್ವಾತಂತ್ರ್ಯ ನೀಡಿದ್ದು, ನಮ್ಮ ಸರ್ಕಾರ ಒಂದು ತಂಡವಾಗಿ ಕೆಲಸ ಮಾಡುತ್ತಿದೆ. ಇಲ್ಲಿ ಕೇವಲ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಮಾತ್ರವಲ್ಲ. ಎಲ್ಲಾ ಶಾಸಕರು, ಕಾರ್ಯಕರ್ತರು ಅನೇಕ ತ್ಯಾಗ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ” ಎಂದು ತಿಳಿಸಿದರು.
ಸಂಕ್ರಾಂತಿ ವೇಳೆಗೆ ರಾಜ್ಯ ಸರ್ಕಾರದಲ್ಲಿ ಬದಲಾವಣೆಯಾಗಲಿದೆ ಎಂಬ ಚರ್ಚೆ ನಡೆಯುತ್ತಿದೆ ಎಂದು ಕೇಳಿದಾಗ, “ಕೇವಲ ಮಾಧ್ಯಮಗಳಲ್ಲಿ ಮಾತ್ರ ಈ ಚರ್ಚೆ ಇದೆ. ಅದರ ಹೊರತಾಗಿ ಪಕ್ಷ ಅಥವಾ ಸರ್ಕಾರದಲ್ಲಿ ಯಾವುದೇ ಚರ್ಚೆ ಇಲ್ಲ” ಎಂದು ತಿಳಿಸಿದರು.
ಉಪಹಾರಕೂಟದ ಬಗ್ಗೆ ಕೇಳಿದಾಗ, “ನಾವು, ಸಿಎಂ, ಸಚಿವರು, ಜನ, ಉದ್ಯಮಿಗಳು, ಅಧಿಕಾರಿಗಳು ಆಗಾಗ್ಗೆ ಭೇಟಿ ಮಾಡುತ್ತಲೇ ಇರುತ್ತೇವೆ. ಇದರಲ್ಲಿ ಯಾವುದೇ ವಿಶೇಷತೆಗಳಿಲ್ಲ” ಎಂದರು.
ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, “ಈ ಬಾರಿಯ ಪ್ರಯಾಣದಲ್ಲಿ ನಾನು ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತಿಲ್ಲ. ರಾಹುಲ್ ಗಾಂಧಿ ಅವರು ನಿನ್ನೆಯಷ್ಟೇ ಮರಳಿದ್ದಾರೆ. ಅವರಿಗೆ ತೊಂದರೆ ಕೊಡಲು ಬಯಸುವುದಿಲ್ಲ” ಎಂದು ತಿಳಿಸಿದರು.
ಮೈಸೂರಿನಲ್ಲಿ ಅಹಿಂದ ಸಮಾವೇಶ ಮಾಡಲು ಸಿದ್ಧತೆ ನಡೆಸಲಾಗುತ್ತಿದ್ದು, ಶಕ್ತಿ ಪ್ರದರ್ಶನ ಮಾಡಲಾಗುತ್ತಿದೆ ಎಂದು ಕೇಳಿದಾಗ, “ನಾನು ಅವರಿಗೆ ಶುಭ ಕೋರುತ್ತೇನೆ” ಎಂದು ತಿಳಿಸಿದರು.
ಪ್ರಿಯಾಂಕಾ ಗಾಂಧಿ ಅವರು ಪ್ರಧಾನಮಂತ್ರಿಯಾಗಬೇಕು ಎಂಬ ಚರ್ಚೆ ಬಗ್ಗೆ ಕೇಳಿದಾಗ, “ನನಗೆ ಈ ವಿಚಾರಗಳ ಬಗ್ಗೆ ಮಾಹಿತಿ ಇಲ್ಲ. ನಮ್ಮ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಸೋನಿಯಾ ಗಾಂಧಿ ಅವರ ಮಾರ್ಗದರ್ಶನದಲ್ಲಿ ನಮ್ಮ ಪಕ್ಷವನ್ನು ಮುನ್ನಡೆಸುತ್ತಿದ್ದು, ಅವರು ತೆಗೆದುಕೊಳ್ಳುವ ತೀರ್ಮಾನವನ್ನು ಎಲ್ಲರೂ ಪಾಲಿಸುತ್ತೇವೆ. ಪಕ್ಷದಲ್ಲಿ ಇಂತಹ ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದು. ಪಕ್ಷದಲ್ಲಿ ಶಿಸ್ತು ಮುಖ್ಯವಾಗಿರಬೇಕು. ರಾಹುಲ್ ಗಾಂಧಿ ಅವರು ಭಾರತ ಜೋಡೋ ಯಾತ್ರೆ ಮಾಡಿ ಇಡೀ ದೇಶಕ್ಕೆ ಶಕ್ತಿ ತುಂಬಿದ್ದಾರೆ. ಪಕ್ಷ ಸಂಕಷ್ಟದ ಪರಿಸ್ಥಿತಿಯಲ್ಲಿ ನಾಯಕತ್ವ ವಹಿಸಿದ್ದಾರೆ. ರಾಹುಲ್ ಗಾಂಧಿ ಅವರನ್ನು ಪ್ರಧಾನಮಂತ್ರಿ ಮಾಡಬೇಕು ಎಂಬುದು ಪ್ರಿಯಾಂಕಾ ಗಾಂಧಿ ಅವರ ಗುರಿಯಾಗಿದೆ. ಅದಕ್ಕೆ ಅವರು ಶ್ರಮಿಸುತ್ತಿದ್ದಾರೆ” ಎಂದು ತಿಳಿಸಿದರು.
ಸಚಿವ ಸಂಪುಟ ವಿಸ್ತರಣೆಯಾಗಲಿದೆಯೇ ಎಂದು ಕೇಳಿದಾಗ, “ಈ ಬಗ್ಗೆ ನಮ್ಮ ಮುಖ್ಯಮಂತ್ರಿಗಳನ್ನು ಕೇಳಿ. ಇದಕ್ಕೆ ಉತ್ತರಿಸಲು ಅವರೇ ಸೂಕ್ತ ವ್ಯಕ್ತಿ” ಎಂದು ತಿಳಿಸಿದರು.
ರಾಜಣ್ಣ ಅವರು ರಾಹುಲ್ ಗಾಂಧಿ ಅವರಿಗೆ ಸರಣಿ ಪತ್ರ ಬರೆದು ಬಿಎಲ್ಓಗಳ ಆಯ್ಕೆಯಿಂದ 12-13 ಕ್ಷೇತ್ರಗಳಲ್ಲಿ ಹಿನ್ನಡೆಯಾಗಿದೆ ಎಂದು ಹೇಳಿರುವ ಬಗ್ಗೆ ಕೇಳಿದಾಗ, “ನನಗೆ ಅನುಭವ ಕಡಿಮೆ ಇದೆ. ತರಬೇತಿ ತೆಗೆದುಕೊಂಡು ಬರುತ್ತೇನೆ” ಎಂದು ತಿರುಗೇಟು ನೀಡಿದರು.
ನನ್ನನ್ನು ಅಪೇಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ಮಾಡಿದ್ದು ಎಸ್.ಎಂ ಕೃಷ್ಣ ಎಂಬ ರಾಜಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಬಹಳ ಸಂತೋಷ, ಕೃಷ್ಣ ಅವರು ಈಗ ನಮ್ಮೊಂದಿಗಿಲ್ಲ. ದೇವರ ಬಳಿ ಕೇಳಿಕೊಳ್ಳಬೇಕಷ್ಟೆ” ಎಂದು ತಿಳಿಸಿದರು.
ಮಹಿಳೆ ಮೇಲಿನ ಹಲ್ಲೆ ಪ್ರಕರಣವನ್ನು ಮುಂದಿಟ್ಟುಕೊಂಡು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಇಂತಹ ಪ್ರಕರಣಗಳ ಪಟ್ಟಿ ನೀಡಲೇ? ಕರ್ನಾಟಕ ದೇಶದಲ್ಲೇ ಅತ್ಯಂತ ಸುರಕ್ಷಿತ ರಾಜ್ಯ. ಈ ರಾಜ್ಯದಲ್ಲಿ ದಕ್ಷ ಆಡಳಿತ ಹಾಗೂ ಕಾನೂನು ಸುವ್ಯವಸ್ಥೆ ಇದೆ” ಎಂದು ತಿಳಿಸಿದರು.