ಬೆಂಗಳೂರು, ಅ. 17: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರಕಾರದಲ್ಲಿ ಮಹಿಳಾ ಸಚಿವರಿಲ್ಲದ ಕಾರಣಕ್ಕೆ ಅಸಮಾಧಾನಗೊಂಡು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸ್ಥಾನಕ್ಕೆ ಮಾಜಿ ಶಾಸಕಿ ಸೌಮ್ಯ ರೆಡ್ಡಿ ರಾಜೀನಾಮೆ ನೀಡಿದ್ದಾರೆ.

ಶನಿವಾರ ಸೌಮ್ಯರೆಡ್ಡಿ ತಮ್ಮ ರಾಜೀನಾಮೆ ಪತ್ರವನ್ನು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಂಬಾ ಅವರಿಗೆ ರವಾನಿಸಿದ್ದಾರೆ. ‘ತಾವು ಎರಡು ವರ್ಷಗಳ ಅವಧಿಗೆ ಮಹಿಳಾ ಘಟಕದ ಜವಾಬ್ದಾರಿ ವಹಿಸಿಕೊಂಡಿದ್ದು, ರಾಜ್ಯಾದ್ಯಂತ ಪ್ರವಾಸ ಮಾಡಿ ಮಹಿಳೆಯರ ಆರೋಗ್ಯ, ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಕೆಲಸ ಮಾಡಲು ಹಾಗೂ ಮಹಿಳೆಯರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಲು ಅವಕಾಶ ಸಿಕ್ಕಿರುವುದು ತಮ್ಮ ಭಾಗ್ಯ’ ಎಂದು ಉಲ್ಲೇಖಿಸಿದ್ದಾರೆ.

ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳು ಮಹಿಳಾ ಕ್ರಾಂತಿಯನ್ನೇ ಸೃಷ್ಟಿಸಿವೆ. ಕರ್ನಾಟಕ ಸರಕಾರದಲ್ಲಿ ಮಹಿಳಾ ಸಚಿವರಿಲ್ಲದಿರುವ ವಿಚಾರವನ್ನು ಪಕ್ಷದ ಹೈಕಮಾಂಡ್ ಗಮನಕ್ಕೆ ತರುವಂತೆ ಮನವಿ ಮಾಡಿದ್ದಾರೆ. ಪಕ್ಷದ ಹೈಕಮಾಂಡ್, ಎಐಸಿಸಿ, ಕೆಪಿಸಿಸಿ ಅಧ್ಯಕ್ಷರು, ಸಿಎಂ, ಮಾಜಿ ಸಿಎಂ, ಸಚಿವರು ಹಾಗೂ ಶಾಸಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತೆಯಾಗಿ ಮುಂದುವರಿಯುತ್ತೇನೆ.

2028ರ ವಿಧಾನಸಭೆ ಮತ್ತು 2029ರ ಲೋಕಸಭೆ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ. ಕೆಪಿಸಿಸಿ ಮಹಿಳಾ ಘಟಕಕ್ಕೆ ಹೊಸ ಅಧ್ಯಕ್ಷರ ಆಯ್ಕೆಯಾಗುವವರೆಗೆ ತಾವು ಹುದ್ದೆಯಲ್ಲಿ ಮುಂದುವರಿಯುತ್ತೇನೆ ಎಂದು ಸೌಮ್ಯ ರೆಡ್ಡಿ. ತಮ್ಮ ರಾಜೀನಾಮೆ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor