×
Ad

ಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

Update: 2026-06-05 10:05 IST

ಬೆಂಗಳೂರು, ಜೂ. 5: ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಖಾತೆ ಹಂಚಿಕೆಯಾದ ಬೆನ್ನಲ್ಲೇ ಅಸಮಾಧಾನ ವ್ಯಕ್ತಪಡಿಸಿರುವ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಮಲಿಂಗಾ ರೆಡ್ಡಿ ಅವರು, ನನಗೆ ಬೆಂಗಳೂರು ಅಭಿವೃದ್ಧಿ ಖಾತೆ ನೀಡುವುದಾಗಿ ಸ್ವತಃ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದರು. ಆದರೆ, ಅವರು ಕೊಟ್ಟ ಮಾತು ಉಖಿಸಿಕೊಳ್ಳಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಆತ್ಮಸಾಕ್ಷಿಗೆ ವಿರುದ್ದವಾಗಿ ಕಾರ್ಯನಿರ್ವಹಿಸಲು ನನ್ನಿಂದ ಸಾಧ್ಯವಿಲ್ಲ. ಆ ಕಾರಣದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರಕ್ಕೆ ಬಂದಿದ್ದೇನೆ. ಶಾಸಕ ಹಾಗೂ ಪಕ್ಷದ ಕಾರ್ಯಕರ್ತನಾಗಿ ಮುಂದುವರಿಯುತ್ತೇನೆ ಎಂದು ಹೇಳಿದರು.

ನನಗೆ ಯಾರ ಮೇಲೂ ಬೇಸರವಿಲ್ಲ. ಯಾರು ಕರೆದು ಮಾತನಾಡಿದರೂ ಹಾಗೂ ನನ್ನ ಇಚ್ಛೆಯ ಖಾತೆ ನೀಡಿದರೂ ರಾಜೀನಾಮೆ ನಿರ್ಧಾರದಿಂದ ಹಿಂದಕ್ಕೆ ಸರಿಯಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಮಾಜಿ ಮೇಯರ್ ಮಂಜುನಾಥ್ ಅವರು ನನ್ನ ರಾಜೀನಾಮೆ ಪತ್ರವನ್ನು ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರಿಗೆ ಸಲ್ಲಿಸುತ್ತಾರೆ. ನಾನು ಕಾಂಗ್ರೆಸ್ ಪಕ್ಷ ತೊರೆಯುವುದಿಲ್ಲ. ಆದರೆ, ಸಚಿವನಾಗಿ ಇರಲ್ಲ. ಸಂಪುಟದಲ್ಲಿ ಸ್ಥಾನ ನೀಡಿದ್ದಕ್ಕಾಗಿ ಧನ್ಯವಾದಗಳು ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಮಲಿಂಗಾರೆಡ್ಡಿ ಅವರಿಗೆ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಿದ್ದರು. ಬೆಂಗಳೂರು ಅಭಿವೃದ್ಧಿ ಇಲಾಖೆಯನ್ನು ಕೃಷ್ಣ ಬೈರೇಗೌಡ ಅವರಿಗೆ ವಹಿಸಿದ್ದರು. ಜಲಸಂಪನ್ಮೂಲ ಖಾತೆ ವಹಿಸಿಕೊಳ್ಳಲು ಆಸಕ್ತಿ ತೋರದ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News