×
Ad

ಯಾರು ಏನೇ ಮಾಡಿದರೂ ‘ಬೆಂಗಳೂರು ದಕ್ಷಿಣ ಜಿಲ್ಲೆ’ ನಿಶ್ಚಿತ : ಡಿ.ಕೆ.ಶಿವಕುಮಾರ್

Update: 2025-02-15 20:45 IST

ಡಿ.ಕೆ. ಶಿವಕುಮಾರ್

ಬೆಂಗಳೂರು: ಕನಕಪುರ, ರಾಮನಗರದ ಈ ಪ್ರದೇಶವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಕೇಂದ್ರ ಸರಕಾರದ ಬಳಿ ಸಚಿವ ಎಚ್.ಡಿ.ಕುಮಾರಸ್ವಾಮಿ ತಕರಾರು ಸಲ್ಲಿಸಿದ್ದಾರೆ. ಯಾರು ಏನೇ ಮಾಡಿದರೂ ಇದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.

ಶನಿವಾರ ಕನಕಪುರ ಕ್ಷೇತ್ರದ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಹಾಗೂ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ನಾನು ಹಾಗೂ ಇಲ್ಲಿರುವ ಕೆಲವರು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದೆವು. ಇದು ಕನಕಪುರ ಲೋಕಸಭಾ ಕ್ಷೇತ್ರ ಇತ್ತು. ನಮ್ಮ ಅಸ್ಥಿತ್ವವನ್ನು ಉಳಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಇದನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರ ಎಂದು ಮಾಡಿದೆವು.

ಈಗ ಈ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮರುನಾಮಕರಣ ಮಾಡಲು ಮುಂದಾಗಿದ್ದು, ಇದನ್ನು ಮಾಡಬಾರದು ಎಂದು ಕೇಂದ್ರ ಸರಕಾರದ ಬಳಿ ಕುಮಾರಸ್ವಾಮಿ ಅರ್ಜಿ ಹಾಕಿದ್ದಾರೆ. ಅವರು ಏನಾದರೂ ಮಾಡಲಿ, ಈ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿಯೇ ಮಾಡುತ್ತೇವೆ. ಅದಕ್ಕೆ ಏನು ಮಾಡಬೇಕೋ ಅದನ್ನು ನಾನು ಮಾಡುತ್ತೇನೆ ಎಂದು ತಿಳಿಸಿದರು.

ಜನ ಸ್ಮರಿಸುವಂತೆ ಕೆಲಸ ಮಾಡಬೇಕು: ಇಲ್ಲಿ ಶಾಸಕರಾದ ಬಾಲಕೃಷ್ಣ, ಯೋಗೇಶ್ವರ್, ಇಕ್ಬಾಲ್ ಹುಸೇನ್ ಇದ್ದಾರೆ. ಪ್ರತಿ ಕ್ಷೇತ್ರದಲ್ಲಿ ಕನಿಷ್ಠ 100 ಎಕರೆ ಪ್ರದೇಶದಲ್ಲಿ ಬಡವರಿಗೆ ನಿವೇಶನ ಹಂಚುವ ಕೆಲಸ ಮಾಡಬೇಕೆಂದು ಈ ಮೂವರು ಶಾಸಕರಿಗೆ ಹೇಳುತ್ತೇನೆ. ಸರಕಾರಿ ಜಮೀನಿನಲ್ಲಿ ಅಥವಾ ಖಾಸಗಿ ಜಮೀನು ಖರೀದಿ ಮಾಡಿ ಆ ಕೆಲಸ ಮಾಡಲೇಬೇಕು. ನಮ್ಮ ಕಾಲ ಇಂತಹ ಕೆಲಸ ಆಯಿತು ಎಂದು ನಾವು ಕುಮಾರಸ್ವಾಮಿಗೆ ಹೇಳಬೇಕು ಎಂದರು.

ನಮ್ಮ ಜನ ಬೆಂಗಳೂರಿಗೆ ವಲಸೆ ಹೋಗುವುದನ್ನು ತಪ್ಪಿಸಬೇಕು ಎಂದು ಅನೇಕ ಕಾರ್ಯಕ್ರಮ ರೂಪಿಸಲಾಗಿದೆ. ಇಂದು ಬೆಳಗ್ಗೆ ಎರಡು ಕಡೆಗಳಲ್ಲಿ ಪ್ರೆಸ್ಟೀಜ್ ಹಾಗೂ ಟೊಯೋಟಾ ಸಂಸ್ಥೆಗಳಿಂದ ಶಾಲಾ ಕಟ್ಟಡ ನಿರ್ಮಿಸುತ್ತಿದ್ದೇವೆ. ನಮ್ಮ ಜಿಲ್ಲೆಯಲ್ಲಿ ರಾಜ್ಯಕ್ಕೆ ಮಾದರಿಯಾಗುವಂತೆ ಈ ತೀರ್ಮಾನ ಮಾಡಿದ್ದೇವೆ. ರಾಜ್ಯದಲ್ಲಿ ಈ ರೀತಿ 2 ಸಾವಿರ ಶಾಲೆ ನಿರ್ಮಿಸುವ ಘೋಷಣೆ ಮಾಡಿದ್ದು, ಅದಕ್ಕೆ ಹೊಸ ರೂಪ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಶೀಘ್ರದಲ್ಲಿ ಸಭೆ: ಚನ್ನಪಟ್ಟಣ, ಮಾಗಡಿ, ಕನಕಪುರ, ಹಾರೋಹಳ್ಳಿ, ರಾಮನಗರಕ್ಕೆ ಯಾವ ನೀರಾವರಿ ಯೋಜನೆ ಮಾಡಬೇಕು ಎಂದು ಗೊತ್ತಿದೆ. ಎಷ್ಟೇ ಕಷ್ಟ ಆದರೂ ನಮ್ಮ ಅವಧಿಯಲ್ಲಿ ಜಿಲ್ಲೆಯ ಕೆರೆಗಳನ್ನು ತುಂಬಿಸಿ ನಮ್ಮ ಜನ ಇಲ್ಲೇ ಬದುಕು ಕಟ್ಟಿಕೊಳ್ಳಲು ಕಾರ್ಯಕ್ರಮ ರೂಪಿಸಿದ್ದೇವೆ. ಅತ್ಯಾಧುನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ನೀವು ವ್ಯವಸಾಯ ಮಾಡಿ ಬದುಕು ಕಟ್ಟಿಕೊಳ್ಳಬಹುದು ಎಂದರು.

ನೀನೇನು ಮಾಡಿದ್ದೆ ಹೇಳಪ್ಪಾ: ‘ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸತ್ತುಹೋಗಿದೆ’ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ‘ನಿನಗೆ ಅಧಿಕಾರ ಇದ್ದಾಗ ನೀನು ಏನು ಮಾಡಿದೆ ಹೇಳಪ್ಪಾ?. ಮಂಡ್ಯದಲ್ಲಿ ಗೆದ್ದು ಕೇಂದ್ರದಲ್ಲಿ ದೊಡ್ಡ ಮಂತ್ರಿಯಾಗಿದ್ದೀಯಲ್ಲಾ ಈಗ ನೀನು ಏನು ಮಾಡುತ್ತೀಯಾ? ಎಂದು ಮೊದಲ ಹೇಳು. ನೀವು ಏನು ಮಾಡುತ್ತೀರೋ ಮಾಡಿ, ಅದಕ್ಕೆ ಅಗತ್ಯ ಸಹಕಾರ ನಾವು ನೀಡುತ್ತೇವೆ. ನೀವು ಬರೀ ದ್ವೇಷ ರಾಜಕಾರಣ ಮಾಡುತ್ತಿದ್ದೀರಿ. ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಬಾರದು ಎಂದು ಆಕ್ಷೇಪ ಮಾಡಿದ್ದೀರಿ. ನಿಮ್ಮಂತೆ ನಾವು ದ್ವೇಷ ರಾಜಕಾರಣ ಮಾಡುವುದಿಲ್ಲ. ನಿಮಗೆ ಎಲ್ಲ ರೀತಿಯ ಸಹಕಾರ ನೀಡುತ್ತೇವೆ. ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ರಾಜ್ಯಕ್ಕೆ ಬಂದು ಏನು ಹೇಳಿದ್ದಾರೆ ಎಂಬುದನ್ನು ತಲೆಯಲ್ಲಿ ಇಟ್ಟುಕೊಳ್ಳಿ’ ಎಂದು ಎಚ್‍ಡಿಕೆಗೆ ತಿರುಗೇಟು ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News