ಗ್ರೇಟರ್ ಬೆಂಗಳೂರು ಪ್ರಾಧಿಕಾರ | ಪಾಲಿಕೆಗಳ ಗಡಿ ಭಾಗಗಳಲ್ಲಿ ಗೋಪುರಗಳ ನಿರ್ಮಾಣ : ಡಿ.ಕೆ.ಶಿವಕುಮಾರ್
ಬೆಂಗಳೂರು, ಸೆ.3 : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳ ನೂತನ ಕಚೇರಿಗೆ ಭೂಮಿಪೂಜೆಯನ್ನು ನ.1ರಂದು ನೆರವೇರಿಸಲಾಗುವುದು. ಹಾಗೆಯೇ ಎಲ್ಲ ಪಾಲಿಕೆಗಳ ಗಡಿ ಭಾಗಗಳಲ್ಲಿ ಗಡಿ ಗೋಪುರಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬುಧವಾರ ನಗರದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಚೇರಿಯ ನಾಮಫಲಕ ಅನಾವರಣಗೊಳಿಸಿ ಸುದ್ದಿಗಾರರೊಂದಿಗೆ ಮಾತನಡಿದ ಅವರು, ರಸ್ತೆಗಳ ಸುಧಾರಣೆ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ಪ್ರತಿ ಪಾಲಿಕೆ ವ್ಯಾಪ್ತಿಯಲ್ಲಿ 500 ಮಂದಿ ಎಂಜಿನಿಯರ್ ಹುದ್ದೆಗಳಿಗೆ ಅನುಮೋದನೆ ನೀಡಲಾಗಿದೆ. 198 ವಾರ್ಡ್‍ಗಳನ್ನು 500 ವಾರ್ಡ್‍ಗಳಾಗಿ ಮಾಡಲು ಸರಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದರು.
ನಾಗರಿಕರು, ವಾಸ್ತುಶಿಲ್ಪಿಗಳು ಪಾಲಿಕೆ ಕಚೇರಿಗಳ ವಿನ್ಯಾಸ ಹೇಗಿರಬೇಕು ಎಂದು ಸಲಹೆ ನೀಡಬಹುದು. ಜೊತೆಗೆ ವಿನ್ಯಾಸಗಳನ್ನು ಸಹ ನೀಡಬಹುದು. ಇದರಲ್ಲಿ ಅತ್ಯುತ್ತಮ ಮೂರು ಅಥವಾ ಐದು ವಿನ್ಯಾಸಗಳನ್ನು ಆಯ್ಕೆ ಮಾಡಲಾಗುವುದು. ಇದಕ್ಕೆ 5 ಲಕ್ಷ ರೂ. ಬಹುಮಾನ ನೀಡಲಾಗುವುದು. ಇನ್ನು ಪಾಲಿಕೆಗಳ ಆಡಳಿತಾತ್ಮಕ ವೆಚ್ಚ, ಸಂಬಳ ಹಾಗೂ ನಿವೃತ್ತಿ ವೇತನಕ್ಕೆ ಸುಮಾರು 300 ಕೋಟಿ ರೂ. ಹಣ ಬಿಡುಗಡೆಗೆ ಮಾಡಲಾಗುವುದು ಎಂದು ಅವರು ತಿಳಿಸಿದರು.
ಪ್ರತಿ ಪಾಲಿಕೆಗಳಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳು, ಒಬ್ಬರು ಕೆಎಎಸ್, ಇಬ್ಬರು ಮುಖ್ಯ ಎಂಜಿನಿಯರ್ ಗಳು ಹಾಗೂ ಅಗತ್ಯ ಕಚೇರಿ ಸಿಬ್ಬಂದಿ ಕೆಲಸ ಮಾಡಲಿದ್ದಾರೆ. ನಗರಕ್ಕೆ ಉತ್ತಮವಾದ ಆಡಳಿತ ಹಾಗೂ ಜನರ ಬಾಗಿಲಿಗೆ ಸರಕಾರವನ್ನು ತೆಗೆದುಕೊಂಡು ಹೋಗಬೇಕು ಎಂದು ನಿರ್ಣಯಗಳನ್ನು ತೆಗೆದುಕೊಂಡು ಪಾಲಿಕೆಗಳು ಕೆಲಸ ಮಾಡಲಿವೆ. ಪಾಲಿಕೆಗಳ ವ್ಯಾಪ್ತಿಗೆ ಬರುವ ರಸ್ತೆ, ಚರಂಡಿ ಸೇರಿದಂತೆ ಇತರೇ ಸಂಗತಿಗಳನ್ನು ಗುರುತಿಸುವ ಕೆಲಸವಾಗಲಿದೆ ಎಂದು ಅವರು ಹೇಳಿದರು.
ನಗರಕ್ಕೆ ಹೊಂದಿಕೊಂಡಿರುವ ಸ್ಥಳೀಯ ಸಂಸ್ಥೆಗಳನ್ನು ಜಿಬಿಎ ವ್ಯಾಪ್ತಿಗೆ ಈಗಲೇ ಸೇರಿಸಿದರೆ ಪ್ರಸ್ತುತ ಪ್ರತಿನಿಧಿಗಳಾಗಿರುವವನ್ನೂ ಪಾಲಿಕೆ ಸದಸ್ಯರು ಎಂದು ಪರಿಗಣಿಸಬೇಕಾಗುತ್ತದೆ. ಮೊದಲು ಈಗ ರಚನೆಯಾಗಿರುವ ಪಾಲಿಕೆಗಳಿಗೆ ಚುನಾವಣೆ ನಡೆದ ನಂತರ ಇತರೇ ಪ್ರದೇಶಗಳ ವಿಲೀನದ ಬಗ್ಗೆ ಭವಿಷ್ಯದಲ್ಲಿ ಯೋಚಿಸಲಾಗವುದು ಎಂದು ಅವರು ಸ್ಪಷ್ಟಪಡಿಸಿದರು.
ನೂತನ ಆಯುಕ್ತರು ಜನರ ನಡುವೆಯಿದ್ದು, ಕೆಲಸ ಮಾಡಬೇಕು. ಜಿಬಿಎ ಆಯುಕ್ತರು ಫುಟ್ ಪಾತ್, ನೀರು, ರಸ್ತೆ ಸೇರಿದಂತೆ ಇತರೇ ಕೆಲಸಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ದಿನಕ್ಕೆ 17- 18 ಗಂಟೆ ಕೆಲಸ ಮಾಡಬೇಕಾಗುತ್ತದೆ. ಹೀಗಾಗಿ ಹಿರಿಯ ಅಧಿಕಾರಿಗಳ ಜೊತೆ ಯುವ ಅಧಿಕಾರಿಗಳನ್ನೂ ನಿಯೋಜನೆ ಮಾಡಲಾಗಿದೆ ಎಂದು ಅವರು ವಿವರಿಸಿದರು.
ಈ ವೇಳೆ ಬಿಡಿಎ ಅಧ್ಯಕ್ಷ ಎನ್.ಎ ಹಾರೀಸ್, ಶಾಸಕರಾದ ರವಿ ಸುಬ್ರಮಣ್ಯ, ಉದಯ್ ಗರುಡಾಚಾರ್, ಎಸ್.ಟಿ.ಸೋಮಶೇಖರ್, ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ.ಕೆ.ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಪ್ರೀತಿ ಗೆಹ್ಲೋಟ್, ನಗರ ಪಾಲಿಕೆಗಳ ಆಯುಕ್ತರುಗಳಾದ ರಮೇಶ್ ಡಿ.ಎಸ್, ಕೆ.ಎನ್ ರಮೇಶ್, ಪೊಮ್ಮಲ ಸುನೀಲ್ ಕುಮಾರ್, ರಾಜೇಂದ್ರ ಕೆ.ವಿ, ಲತಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.