ಹೊಸ ಕಟ್ಟಡಗಳಿಗೆ ವಿದ್ಯುತ್, ನೀರು ಸಂಪರ್ಕ; ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ: ಡಿ.ಕೆ.ಶಿವಕುಮಾರ್
ಬೆಂಗಳೂರು, ಅ.8: ಸ್ವಾಧೀನ ಪ್ರಮಾಣಪತ್ರ(ಒಸಿ) ಹೊಂದಿರದ ಕಟ್ಟಡಗಳಿಗೆ ವಿದ್ಯುತ್, ನೀರು ಹಾಗೂ ಒಳ ಚರಂಡಿ ಸಂಪರ್ಕ ಕಲ್ಪಿಸಿಕೊಡದಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಇದರಿಂದಾಗಿ, ಈಗಾಗಲೆ ಮನೆಗಳನ್ನು ಕಟ್ಟಿರುವವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ಯಾವ ರೀತಿ ನೆರವು ನೀಡಬಹುದು ಎಂಬುದರ ಕುರಿತು ಗುರುವಾರ(ಅ.9) ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿ ಹಾಗೂ ರಾಜ್ಯದ ಇತರೆ ಕಡೆಗಳಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ ಕಲ್ಪಿಸುವ ಕುರಿತು ಬುಧವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್, ಇಂಧನ, ಕಾನೂನು, ಪೌರಾಡಳಿತ ಇಲಾಖೆಯ ಸಚಿವರು, ಸರಕಾರದ ಮುಖ್ಯ ಕಾರ್ಯದರ್ಶಿ, ಅಡ್ವೊಕೇಟ್ ಜನರಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಈ ಸಂಬಂಧ ಚರ್ಚೆ ಮಾಡಿದ್ದಾರೆ. ಅನೇಕ ಅಭಿಪ್ರಾಯಗಳು ಬಂದಿವೆ ಎಂದು ಶಿವಕುಮಾರ್ ಹೇಳಿದರು.
30/40 ಚ.ಅ. ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ಕಟ್ಟಿರುವ ಮನೆಗಳಿಗೆ ವಿದ್ಯುತ್, ನೀರು ಹಾಗೂ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿದ್ದೇವೆ. ಇನ್ನೂ ಹೆಚ್ಚಿನ ವಿಸ್ತೀರ್ಣದ ಮನೆಗಳಿಗೆ ಹೇಗೆ ಈ ಸಂಪರ್ಕ ಕಲ್ಪಿಸಬಹುದು ಎಂಬುದರ ಕುರಿತು ಚರ್ಚೆ ಮಾಡಿದ್ದೇವೆ ಎಂದು ಅವರು ತಿಳಿಸಿದರು.
ಸುಪ್ರೀಂಕೋರ್ಟ್ ಆದೇಶ ಪಾಲನೆಯಾಗದ ಹಿನ್ನೆಲೆಯಲ್ಲಿ ಕೆಲವು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ನ್ಯಾಯಾಂಗ ನಿಂದನೆ ನೋಟಿಸ್‍ಗಳು ಜಾರಿಯಾಗಿವೆ. ಆದುದರಿಂದ, ಸುಪ್ರೀಂಕೋರ್ಟ್ ಆದೇಶ ಉಲ್ಲಂಘನೆ ಆಗದೆ ಹೇಗೆ ಜನರಿಗೆ ಅನುಕೂಲ ಮಾಡಿಕೊಡಬಹುದು ಎಂಬುದರ ಕುರಿತು ಸಲಹೆ ನೀಡುವಂತೆ ಕಾನೂನು ಇಲಾಖೆಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಕಾನೂನು ಇಲಾಖೆ ನೀಡುವ ಸಲಹೆ ಆಧರಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಿವಕುಮಾರ್ ಹೇಳಿದರು.
ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರವನ್ನು ಕೂಲಂಕಷವಾಗಿ ಚರ್ಚೆ ಮಾಡುತ್ತೇವೆ. ಈಗಾಗಲೆ ಮನೆಗಳನ್ನು ಕಟ್ಟಿರುವವರಿಗೆ ಹೇಗೆ ರಕ್ಷಣೆ ಮಾಡಬಹುದು ಎಂಬುದರ ಕುರಿತು ಕಾನೂನು ಚೌಕಟ್ಟಿನಲ್ಲಿ ಮಾರ್ಗಗಳನ್ನು ಹುಡುಕುತ್ತಿದ್ದೇವೆ. ತಮಿಳುನಾಡು ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಈ ಸಂಬಂಧ ಯಾವ ರೀತಿ ಕ್ರಮಗಳನ್ನು ಕೈಗೊಂಡಿದ್ದಾರೆ ಎಂಬ ಮಾಹಿತಿಗಳನ್ನು ತರಿಸಿಕೊಳ್ಳುತ್ತಿದ್ದೇವೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.
ಸಭೆಯಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಪೌರಾಡಳಿತ ಸಚಿವ ರಹೀಂ ಖಾನ್, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.