ದಿಲ್ಲಿಯತ್ತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್; ಸೋಮವಾರ ನೂತನ ಸಚಿವರಿಗೆ ಖಾತೆ ಹಂಚಿಕೆ ಸಾಧ್ಯತೆ
ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೊಸದಿಲ್ಲಿ ತಲುಪಿದ್ದು, ನಾಳೆ(ಆ.10ರ ಸೋಮವಾರ) ಸಂಜೆಯ ವೇಳೆಗೆ ನೂತನ ಸಚಿವರ ಖಾತೆ ಹಂಚಿಕೆ ಪ್ರಕ್ರಿಯೆ ಅಂತಿಮಗೊಳ್ಳಲಿದೆ ಎಂದು ಗೊತ್ತಾಗಿದೆ.
ರವಿವಾರ ಸಂಜೆ 5 ಗಂಟೆ ಸುಮಾರಿಗೆ ಇಲ್ಲಿನ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾತ್ರಿ 8ರ ಸುಮಾರಿಗೆ ಹೊಸದಿಲ್ಲಿ ತಲುಪಿದ್ದಾರೆ. ಸೋಮವಾರ ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿದ ಬಳಿಕ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
ಹೊಸದಿಲ್ಲಿ ತೆರಳುವ ಮುನ್ನ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಡಿ.ಕೆ.ಶಿವಕುಮಾರ್ ಚರ್ಚೆ ನಡೆಸಿದ್ದಾರೆ. ಜತೆಗೆ, ಕೆಲ ಸಚಿವರ ಬದಲಾವಣೆಗೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಒಪ್ಪಿಗೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಪ್ರಮುಖವಾಗಿ ಎರಡು ಮೂರು ಸಚಿವರ ಬದಲಾವಣೆ ಮಾಡಿ ಆ ಸ್ಥಾನಗಳಿಗೆ ಸಚಿವ ಸ್ಥಾನಕ್ಕಾಗಿ ಪಟ್ಟು ಹಿಡಿದಿರುವ ಅತೃಪ್ತ ಶಾಸಕರಿಗೆ ಅವಕಾಶ ನೀಡುವ ಚಿಂತನೆ ಇದೆ. ಇದಕ್ಕೆ ಹೈಕಮಾಂಡ್ ಒಪ್ಪಿಗೆ ಸೂಚಿಸಿದರೆ, ಸೋಮವಾರ ಸಂಜೆಯೇ ಬದಲಾವಣೆ ಜೊತೆಗೆ ಖಾತೆ ಹಂಚಿಕೆಯೂ ಆಗಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಇತ್ತ ಆ.13ರಿಂದ ಆರಂಭಗೊಳ್ಳಲಿರುವ ವಿಧಾನ ಮಂಡಲದ ಮುಂಗಾರು ಅಧಿವೇಶನಕ್ಕೆ ಮೂರು ದಿನಗಳು ಬಾಕಿ ಇದ್ದರೂ ನೂತನ ಸಚಿವರಿಗೆ ಖಾತೆ ಹಂಚಿಕೆಯಾಗದಿರುವುದು ರಾಜ್ಯ ರಾಜಕೀಯದಲ್ಲಿ ಹಲವು ರೀತಿಯ ಚರ್ಚೆಗಳಿಗೆ ಕಾರಣವಾಗಿದೆ. ಸಂಪುಟ ವಿಸ್ತರಣೆ ನಡೆದು ಒಂದು ವಾರ ಕಳೆದರೂ ಖಾತೆ ಹಂಚಿಕೆಯಾಗಿಲ್ಲ.
ಇನ್ನೊಂದೆಡೆ, ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‍ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸಚಿವ ಸ್ಥಾನ ಕೈತಪ್ಪಿದ ಕಾರಣ ಹಲವು ಶಾಸಕರು, ಬಹಿರಂಗವಾಗಿ ತಮ್ಮ ಆಕ್ರೋಶ ಹೊರಹಾಕುತ್ತಿದ್ದರೆ, ಜತೆಗೆ ಅವರ ಬೆಂಬಲಿಗರು ಪ್ರತಿಭಟನೆ ಮೂಲಕ ಬೀದಿಗಿಳಿದಿದ್ದಾರೆ. ಸುಮಾರು ಎರಡು ತಿಂಗಳ ವಿಳಂಬದ ಬಳಿಕ ಸಂಪುಟ ವಿಸ್ತರಣೆ ಮಾಡಲಾಗಿತ್ತು. ಇದೀಗ ಖಾತೆ ಹಂಚಿಕೆಯೂ ವಿಳಂಬವಾಗಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.