‘ಮತಗಳ್ಳತನ ವಿರುದ್ಧದ ಸಹಿಸಂಗ್ರಹ ಅಭಿಯಾನ’ ಸಕ್ರಿಯರಾಗದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಡಿ.ಕೆ.ಶಿವಕುಮಾರ್
"ಹುದ್ದೆಯಿಂದ ಕಿತ್ತೊಗೆಯಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸೂಚನೆ"
ಹೊಸದಿಲ್ಲಿ : ‘ಮತಗಳ್ಳತನ ವಿರುದ್ಧ ಕರ್ನಾಟಕ ರಾಜ್ಯದಲ್ಲಿ ಸಹಿಸಂಗ್ರಹ ಅಭಿಯಾನದಲ್ಲಿ ಸಕ್ರಿಯರಾಗದ ಪಕ್ಷದ ಮುಖಂಡರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ.
ಗುರುವಾರ ದಿಲ್ಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಹರ್ಯಾಣ ರಾಜ್ಯದಲ್ಲಿ ನಡೆದಿರುವ ಮತಗಳ್ಳತನದ ವಿರುದ್ಧ ಪ್ರತಿಭಟನೆ ಮಾಡುತ್ತೇವೆ. ಈಗಾಗಲೇ ಲಕ್ಷಾಂತರ ಸಹಿ ಸಂಗ್ರಹ ಮಾಡಿದ್ದೇವೆ. ಅದನ್ನು ನ.9ರಂದು ಹೊಸದಿಲ್ಲಿಗೆ ತೆಗೆದುಕೊಂಡು ಬರುತ್ತೇವೆ. ಬ್ಲಾಕ್ ಅಧ್ಯಕ್ಷರ ಜೊತೆ ಚರ್ಚೆ ಮಾಡಲಿದ್ದೇನೆ ಎಂದರು.
‘ಮತಗಳ್ಳತನ ವಿರುದ್ಧದ ಅಭಿಯಾನದಲ್ಲಿ ಯಾರು ಕೆಲಸ ಮಾಡಿಲ್ಲವೋ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಸಹಿ ಸಂಗ್ರಹ ಅಭಿಯಾನದಲ್ಲಿ ಸರಿಯಾಗಿ ಜವಾಬ್ದಾರಿ ನಿಭಾಯಿಸದವರನ್ನು ಅವರ ಹುದ್ದೆಯಿಂದ ಕಿತ್ತೊಗೆಯಿರಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸೂಚಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಮತಗಳ್ಳತನ ವಿಚಾರವಾಗಿ ಮುಖ್ಯಮಂತ್ರಿ ಜೊತೆಗೂ ಚರ್ಚೆ ಹಾಗೂ ಶಾಸಕರಿಗೂ ತಿಳಿಸುವೆ. ಮತಗಳ್ಳತನ ರಾಷ್ಟ್ರಮಟ್ಟದ ಗಂಭೀರ ವಿಚಾರವಾಗಿದ್ದು, ರಾಜ್ಯದಲ್ಲಿ ಈಗಾಗಲೇ 70-80ಲಕ್ಷ ಸಹಿ ಸಂಗ್ರಹ ಮಾಡಲಾಗಿದೆ. ಕೆಲವು ಶಾಸಕರು ಹಾಗೂ ಬ್ಲಾಕ್ ಕಾಂಗ್ರೆಸ್‍ನವರು ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ, ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ ಎಂದರು.
ಕರ್ನಾಟಕ, ಮಹಾರಾಷ್ಟ್ರ ನಂತರ ಇದೀಗ ಹರ್ಯಾಣದಲ್ಲಿ ಮತಗಳ್ಳತನ ಆರೋಪ ಬಂದಿದ್ದು, ಚುನಾವಣಾ ಆಯೋಗ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ದೇವರು. ನಾವು ಈ ವಿಚಾರವನ್ನು ಜನರಿಗೆ ತಿಳಿಸುತ್ತಿದ್ದು, ಅವರು ಸೂಕ್ತ ಸಂದರ್ಭದಲ್ಲಿ ತೀರ್ಮಾನ ಮಾಡಲಿದ್ದಾರೆ ಎಂದರು.
ದೇಶದಲ್ಲಿ ಏನಾಗುತ್ತಿದೆ ಎಂದು ಜನರಿಗೆ ಮನದಟ್ಟು ಮಾಡುತ್ತಿದ್ದೇವೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಏನಾಗಿದೆ ಎಂದು ನಮಗೆ ಗೊತ್ತಿದೆ. ನಾವು ಅಲ್ಲಿ ಸೋತಾಗಿದೆ. ಈಗ ನನ್ನ ಕ್ಷೇತ್ರದ ಬಗ್ಗೆ ಚರ್ಚೆ ಬೇಡ. ಈಗ ಬೇರೆ ಕ್ಷೇತ್ರಗಳಲ್ಲಿನ ಅಕ್ರಮದ ಬಗ್ಗೆ ರಾಹುಲ್ ಗಾಂಧಿಯವರೇ ಸಾಕ್ಷಿ ಸಮೇತ ಜನರ ಮುಂದೆ ಇಡುತ್ತಿದ್ದಾರೆ ಎಂದು ತಿಳಿಸಿದರು.
ಅನುಮತಿ ಪಡೆಯಬೇಕು: ಆರೆಸ್ಸೆಸ್ ಚಟುವಟಿಕೆಗಳನ್ನು ನಾವು ನಿಯಂತ್ರಿಸುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಪಡೆಯಬೇಕೆಂದು ಹೇಳಿದ್ದೇವೆ. ಇದು ಎಲ್ಲರಿಗೂ ಅನ್ವಯವಾಗಲಿದ್ದು, ನಾವು ಆರೆಸ್ಸೆಸ್ ಸುದ್ದಿ ಎಲ್ಲಿ ಪ್ರಸ್ತಾಪಿಸಿದ್ದೇವೆ? ಈ ವಿಚಾರ ಸಾರ್ವಜನಿಕ ಚರ್ಚೆಯಲ್ಲಿತ್ತು ಎಂದರು.