ಡಿ.ಕೆ.ಶಿವಕುಮಾರ್ ಸಿಎಂ ಆಗುವ ಭರವಸೆ, ನಂಬಿಕೆ ಈಗಲೂ ಇದೆ: ಡಿ.ಕೆ.ಸುರೇಶ್
ಡಿ.ಕೆ.ಸುರೇಶ್
ಬೆಂಗಳೂರು : ಶಿವಕುಮಾರ್ ಸಿಎಂ ಆಗಬೇಕೆಂಬ ಭರವಸೆ ಇದೆ. ನಂಬಿಕೆ ಎಂಬುದು ನಮ್ಮ ಜೀವನಕ್ಕೆ ಪ್ರೇರಣೆ. ನಂಬಿಕೆ ಇಲ್ಲದಿದ್ದರೆ ಜೀವನ ಮಾಡುವುದೇ ಕಷ್ಟ. ನನಗೆ ಈಗಲೂ ಆಸೆ ಇದೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದ್ದಾರೆ.
ಗುರುವಾರ ಸದಾಶಿವನಗರ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಶಿವಕುಮಾರ್ ಅವರು ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡಿದ್ದಾರೆ. ಕೆಲವು ಭಾಗದ ಜನರು ವಿಶ್ವಾಸವಿಟ್ಟು ಶಿವಕುಮಾರ್‌ಗೆ ಒಂದು ಬಾರಿ ಅವಕಾಶ ಸಿಗಲಿ ಎಂದು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ. ಆದರೆ ಈಗ ಸಿಎಂ ಸೀಟು ಖಾಲಿ ಇಲ್ಲ ಎಂದು ತಿಳಿಸಿದರು.
ಶಿವಕುಮಾರ್ ಶ್ರಮಕ್ಕೆ ಖಂಡಿತವಾಗಿ ಯಾವುದಾದರೂ ಒಂದು ದಿನ ಪ್ರತಿಫಲ ಸಿಗಬೇಕು, ಸಿಗುತ್ತದೆ. ಅವರು ಸಿಎಂ ಆಗುತ್ತಾರೋ ಇಲ್ಲವೋ ಎಂಬ ವಿಚಾರ ತೀರ್ಮಾನ ಮಾಡಲು ನಾನು ಸಣ್ಣವನು. ಈ ವಿಚಾರವನ್ನು ವರಿಷ್ಠರು ತೀರ್ಮಾನ ಮಾಡಬೇಕು. ಸದ್ಯಕ್ಕೆ ಕ್ಕೆ ಸಿದ್ದರಾಮಯ್ಯ ನಮ್ಮ ಸಿಎಂ ಆಗಿದ್ದಾರೆ. ಈ ವಿಚಾರದಲ್ಲಿ ಎರಡು ಮಾತಿಲ್ಲ ಎಂದು ತಿಳಿಸಿದರು.
ಸಿದ್ದರಾಮಯ್ಯನವರು ಹೇಳಿರುವುದರಲ್ಲಿ ತಪ್ಪೇನಿದೆ? :
‘ಮುಖ್ಯಮಂತ್ರಿ ಸ್ಥಾನ ಸದ್ಯಕ್ಕೆ ಖಾಲಿ ಇಲ್ಲ. ಹೀಗಾಗಿ ‘ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ’ ಎಂದು ಸಿದ್ದರಾಮಯ್ಯನವರು ಹೇಳಿರುವುದರಲ್ಲಿ ತಪ್ಪೇನಿದೆ?. ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ.ಕೆ.ಶಿವಕುಮಾರ್ ಹೈಕಮಾಂಡ್ ಮಾತಿಗೆ ಬದ್ಧರಾಗಿದ್ದಾರೆ’ ಎಂದು ತಿಳಿಸಿದರು.
ಸಿಎಂ ಆಗಿ ಮುಂದುವರಿಯುತ್ತೇನೆ ಎಂದು ಸಿದ್ದರಾಮಯ್ಯನವರು ಹೇಳಿದರೆ ತಪ್ಪೇನಿದೆ? ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷ ಹಾಗೂ ಹೈಕಮಾಂಡ್ ತೀರ್ಮಾನ ಮಾಡಿ ಅವರನ್ನು ಸಿಎಂ ಮಾಡಿದೆ. ಅವರು ಸರಕಾರ ನಡೆಸುತ್ತಿದ್ದಾರೆ. ಈ ಹಂತದಲ್ಲಿ ಚರ್ಚೆ ಏನು? ಎಂದು ಪ್ರಶ್ನಿಸಿದರು.
‘ಡಿ.ಕೆ.ಶಿವಕುಮಾರ್ ಮೊದಲಿನಿಂದಲೂ ಸಿಎಂ ಬೆನ್ನಿಗಿದ್ದೇನೆ ಎಂದು ಹೇಳುತ್ತಿದ್ದಾರೆ, ಈಗಲೂ ಅದನ್ನೇ ಹೇಳಿದ್ದಾರೆ. ಪಕ್ಷದ ಶಿಸ್ತಿನ ಸಿಪಾಯಿಯಾಗಿ, ಪಕ್ಷದ ತೀರ್ಮಾನಕ್ಕೆ ಬದ್ಧ ಎಂದು ಹಿಂದೆಯೂ ಹೇಳಿದ್ದರು, ಮುಂದೆಯೂ ಹೇಳುತ್ತಾರೆ. ಪಕ್ಷದ ಅಧ್ಯಕ್ಷರಾಗಿ ಹೈಕಮಾಂಡ್ ತೀರ್ಮಾನವನ್ನು ಪಾಲಿಸಿ ಶಿಸ್ತು ಕಾಪಾಡುವುದು ಅವರ ಕರ್ತವ್ಯ. ಹಾಗಾಗಿ ಅವರು ಕೆಲವು ವಿಚಾರವನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ’ ಎಂದು ಅವರು ತಿಳಿಸಿದರು.
‘ಬಿಜೆಪಿ ಸರಿ ಇಲ್ಲ ಎಂದು ಜನತೆ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದಾರೆ. ಕಾಂಗ್ರೆಸ್ ಶಾಸಕರು, ಮಂತ್ರಿಗಳು, ಮುಖ್ಯಮಂತ್ರಿ, ನಾಯಕರು ಎಲ್ಲರೂ ರಾಜ್ಯದ ಜನರ ಹಿತವನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು. ಪಕ್ಷ, ಕಾರ್ಯಕರ್ತರು, ಜನರ ಹಿತದೃಷ್ಟಿಯಿಂದ ನಮ್ಮ ಆಸೆ, ಆಕಾಂಕ್ಷೆ ನೋವುಗಳೇನೇ ಇದ್ದರೂ ನಾವು ಒಗ್ಗಟ್ಟಾಗಿ ಹೋಗಬೇಕು’
-ಡಿ.ಕೆ.ಸುರೇಶ್ ಮಾಜಿ ಸಂಸದ