×
Ad

ʼವಿಬಿ-ಜಿ ರಾಮ್ ಜಿʼ ಕಾಯ್ದೆ ವಿರುದ್ಧ ನ್ಯಾಯಾಲಯ, ಬೀದಿ-ಬೀದಿಯಲ್ಲಿ ಹೋರಾಟ : ಡಿ.ಕೆ.ಶಿವಕುಮಾರ್

Update: 2026-01-08 21:21 IST

ಬೆಂಗಳೂರು : ಕೇಂದ್ರ ಸರಕಾರದ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ಕಾಂಗ್ರೆಸ್ ಪಕ್ಷ ನ್ಯಾಯಾಲಯದಲ್ಲಿ ಕಾನೂನು ಹಾಗೂ ಬೀದಿಗಿಳಿದು ಹೋರಾಟ ಮಾಡಿ ಜನರಲ್ಲಿ ಅರಿವು ಮೂಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರದ ವಿಬಿ ಜಿ ರಾಮ್ ಜಿ ಕಾಯ್ದೆಯ ಜಾರಿ ಕಷ್ಟ. ಮನರೇಗಾ ಯೋಜನೆಯಲ್ಲಿ ಕಾಮಗಾರಿ ಆಯ್ಕೆ ಮಾಡುವ ಅಧಿಕಾರ ಪಂಚಾಯಿತಿಗಳ ಬಳಿ ಇತ್ತು. ಈಗ ದಿಲ್ಲಿಯಿಂದ ತೀರ್ಮಾನ ಆಗುತ್ತದೆ ಎಂದರು.

ಶೇ.40ರಷ್ಟು ಅನುದಾನ ಭರಿಸಲು ಯಾವುದೇ ರಾಜ್ಯಗಳಿಂದ ಸಾಧ್ಯವಿಲ್ಲ. ಈ ವಿಚಾರವಾಗಿ ಕೇಂದ್ರ ಸರಕಾರ ತೀರ್ಮಾನ ಮಾಡುವ ಮುನ್ನ ರಾಜ್ಯಗಳ ಅಭಿಪ್ರಾಯ ಪಡೆಯಬೇಕಿತ್ತು. ರಾಜ್ಯಗಳ ಅಭಿಪ್ರಾಯ ಪಡೆಯದೇ ಈ ತೀರ್ಮಾನ ಮಾಡಿದ್ದಾರೆ. ಇದರ ವಿರುದ್ಧ ನಾವು ನ್ಯಾಯಾಲಯದ ಮೆಟ್ಟಿಲೇರುತ್ತೇವೆ. ಬೀದಿಗಿಳಿದು ಹೋರಾಟ ಮಾಡುತ್ತೇವೆ. ಪ್ರತಿ ಪಂಚಾಯತಿಯಲ್ಲಿ ಸಭೆ ನಡೆಸುತ್ತೇವೆ. ಪ್ರತಿ ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಜನರಲ್ಲಿ ಅರಿವು ಮೂಡಿಸುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಇದು ಉದ್ಯೋಗ ಹಕ್ಕಿನ ವಿಚಾರ. ಜೀವನೋಪಾಯದ ಅಧಿಕಾರ ಮೊಟಕು ಸಹಿಸಲು ಸಾಧ್ಯವಿಲ್ಲ. ಇಡೀ ದೇಶದಲ್ಲಿ ಯಾವುದೇ ಪಂಚಾಯಿತಿಯಾದರೂ ಇದನ್ನು ಅರಗಿಸಿಕೊಳ್ಳಲು ಆಗದು. ಎಲ್ಲಾ ಪಂಚಾಯಿತಿಯಲ್ಲಿ ಈ ಕಾಯ್ದೆ ವಿರುದ್ಧ ನಿರ್ಣಯ ಕೈಗೊಳ್ಳಬೇಕು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಜೋಶಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ‘ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸವೇ ಗೊತ್ತಿಲ್ಲ. ಇದು ದೇಶದ ಸ್ವಾತಂತ್ರ್ಯ ಹೋರಾಟದ ವೇಳೆ ಆರಂಭವಾದ ಪತ್ರಿಕೆ. ಇದು ದೇಶದ ಇತಿಹಾಸದ ಭಾಗವಾಗಿದೆ. ಪ್ರಹ್ಲಾದ್ ಜೋಶಿ ಅವರಾಗಲಿ, ಅವರ ಪಕ್ಷವಾಗಲಿ ಯಾವುದೇ ಸಂದರ್ಭದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಂಬಿಕೆ ಇಟ್ಟಿಲ್ಲ. ಅವರು, ಅವರ ಪಕ್ಷದವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿಲ್ಲ. ಹೀಗಾಗಿ ಅವರಿಗೆ ಅರಿವಿಲ್ಲ. ಈ ದೇಶದ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದ್ದು ಕಾಂಗ್ರೆಸ್ ಪಕ್ಷ’

-ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News