ಕುತೂಹಲ ಮೂಡಿಸಿದ ಡಿಸಿಎಂ ಡಿಕೆ.ಶಿವಕುಮಾರ್ ದಿಲ್ಲಿ ಭೇಟಿ
ಬೆಂಗಳೂರು : ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 17ನೆ ಬಜೆಟ್ ಮಂಡನೆ ಮಾಡಿದ್ದು, ‘ಹೈಕಮಾಂಡ್ ಅವಕಾಶ ಕೊಟ್ಟರೆ ಮುಂದಿನ ಎರಡು ವರ್ಷವೂ ನಾನೇ ಆಯವ್ಯಯ ಮಂಡಿಸುತ್ತೇನೆ’ ಎಂಬ ಹೇಳಿಕೆಯ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೊಸದಿಲ್ಲಿ ಪ್ರಯಾಣ ಬೆಳೆಸಿರುವುದು ಕುತೂಲಹಕ್ಕೆ ಕಾರಣವಾಗಿದೆ.
ರವಿವಾರ ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರ್ರದಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅಲ್ಲಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ವಿಮಾನದಲ್ಲಿ ದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಖಾಸಗಿ ಕಾರ್ಯಕ್ರಮದ ನಿಮಿತ್ತ ದಿಲ್ಲಿಗೆ ತೆರಳುತ್ತಿರುವುದಾಗಿ ಡಿ.ಕೆ.ಶಿವಕುಮಾರ್ ಕಚೇರಿ ಮಾಹಿತಿ ನೀಡಿದೆ. ಆದರೆ, ವಿಧಾನ ಮಂಡಲ ಬಜೆಟ್ ಅಧಿವೇಶನದ ಸಂದರ್ಭದಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ, ಸಂಪುಟ ಪುನರ್ ರಚನೆ ಸಂಬಂಧ ಚರ್ಚೆಗಳು ಬಿರುಸುಗೊಂಡಿವೆ. ಈ ಮಧ್ಯೆ ಡಿ.ಕೆ.ಶಿವಕುಮಾರ್ ದಿಲ್ಲಿ ಭೇಟಿ ರಾಜಕೀಯ ಚರ್ಚೆಗಳನ್ನು ಹುಟ್ಟು ಹಾಕಿದೆ.
ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪಚುನಾವಣೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) 5 ಮಹಾನಗರ ಪಾಲಿಕೆಗಳು, ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳು ನಡೆಯಬೇಕಿದೆ. ಈ ಸಂದರ್ಭದಲ್ಲಿ ಪಕ್ಷವನ್ನು ಗೆಲ್ಲಿಸಿಕೊಂಡು ಬರಬೇಕಾದರೆ ‘ಸಮರ್ಥ ನಾಯಕತ್ವ ಬೇಕು’ ಎಂಬ ಬೇಡಿಕೆಯನ್ನು ಡಿ.ಕೆ.ಶಿವಕುಮಾರ್ ಮುಂದಿಟ್ಟಿದ್ದಾರೆ ಎನ್ನಲಾಗಿದೆ.
ಈಗಾಗಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಹಲವರನ್ನು ನಾಯಕರನ್ನು ಭೇಟಿ ಮಾಡಿ ಡಿ.ಕೆ.ಶಿವಕುಮಾರ್ ಒತ್ತಡ ಹೇರುವ ಪ್ರಯತ್ನ ಮಾಡಿದರು. ಆದರೆ ಯಾವುದೇ ಪ್ರಯೋಜನವಾಗಿಲ್ಲ ಎನ್ನಲಾಗಿದೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮೇಲೆ ಎಲ್ಲವೂ ಅವಲಂಬಿತವಾಗಿದೆ.