ಕನ್ನಡ ಅನುಷ್ಠಾನಕ್ಕೆ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ಮೇಲೆ ಶಿಸ್ತುಕ್ರಮ : ಡಾ.ಪುರುಷೋತ್ತಮ ಬಿಳಿಮಲೆ

Update: 2026-07-23 20:22 IST

ಬೆಂಗಳೂರು : ಸರಕಾರಿ ಕಚೇರಿಗಳಲ್ಲಿ ಕನ್ನಡ ಭಾಷೆಯನ್ನು ಆಡಳಿತದ ಎಲ್ಲ ಹಂತಗಳಲ್ಲಿ ಸಮರ್ಪಕವಾಗಿ ಅಳವಡಿಸಿಕೊಳ್ಳದೇ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ 2022ರ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮದ ಅವಕಾಶಗಳಡಿ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ.

ಗುರುವಾರ ನಗರದ ಮಹಾರಾಣಿ ಕ್ಲಸ್ಟರ್ ವಿವಿಯಲ್ಲಿ ನಡೆದ ‘ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನೆ ಸಭೆ’ಯ ಬಳಿಕ ಮಾತನಾಡಿದ ಅವರು, ಸರಕಾರವು ಆಡಳಿತದಲ್ಲಿ ಕನ್ನಡವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ನಿರಂತರ ನಿರ್ದೇಶನಗಳನ್ನು ನೀಡುತ್ತಿದ್ದರೂ, ಕೆಲವು ಸರಕಾರಿ ಅಧಿಕಾರಿಗಳು ತೋರುತ್ತಿರುವ ಉದಾಸೀನತೆ ಮತ್ತು ನಿರಾಸಕ್ತಿಯ ಮನೋಭಾವ ಸರಕಾರದ ಆಶಯವನ್ನು ದುರ್ಬಲಗೊಳಿಸುತ್ತಿದೆ ಎಂದರು.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆಯ ಮುಂದಿನ ರಾಜ್ಯಸಮಿತಿ ಸಭೆಯಲ್ಲಿ ಚರ್ಚಿಸಿ ಕನ್ನಡ ವಿರೋಧಿ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ. ಆಡಳಿತ ಭಾಷೆಯಾಗಿ ಕನ್ನಡವನ್ನು ಅಳವಡಿಸಿಕೊಳ್ಳುವುದು ಕೇವಲ ಕಾನೂನುಬದ್ಧ ಕರ್ತವ್ಯವಲ್ಲ. ಅದು ಜನಸಾಮಾನ್ಯರೊಂದಿಗೆ ಸರಕಾರದ ಸಂಪರ್ಕವನ್ನು ಬಲಪಡಿಸುವ ಹೊಣೆಗಾರಿಕೆಯೂ ಆಗಿದೆ ಎಂದರು.

ಇಂದಿನ ಪರಿಸ್ಥಿತಿಯಲ್ಲಿ ಕನ್ನಡವನ್ನು ಸಾಮಾಜಿಕವಾಗಿ ಕಾಡಿಬೇಡಿ ಉಳಿಸಬೇಕಾದ ಸ್ಥಿತಿ ನಿರ್ಮಾಣವಾಗಿರುವುದು ದುಃಖದ ಸಂಗತಿ. ವಿಶೇಷವಾಗಿ ಶಿಕ್ಷಣ ಕ್ಷೇತ್ರದಲ್ಲಿಯೂ ಇದೇ ರೀತಿಯ ನಿರ್ಲಕ್ಷ್ಯ ಕಂಡು ಬರುತ್ತಿರುವುದು ಕನ್ನಡದ ಭವಿಷ್ಯದ ದೃಷ್ಟಿಯಿಂದ ಗಂಭೀರ ಆತಂಕಕ್ಕೆ ಕಾರಣವಾಗಿದೆ. ಜ್ಞಾನ, ವಾಣಿಜ್ಯ ಹಾಗೂ ವೃತ್ತಿಪರ ಶಿಕ್ಷಣದಂತಹ ಪ್ರಮುಖ ಕ್ಷೇತ್ರಗಳಲ್ಲಿ ಕನ್ನಡ ಬೋಧನೆ ಕ್ರಮೇಣ ಮರೆಯಾಗುತ್ತಿರುವುದು ಅಪಾಯಕಾರಿ ಬೆಳವಣಿಗೆ ಎಂದು ಅಭಿಪ್ರಾಯಪಟ್ಟರು.

ಆಡಳಿತ ವ್ಯವಸ್ಥೆಯಲ್ಲಿಯೇ ಕನ್ನಡಕ್ಕೆ ಅಗತ್ಯ ಗೌರವ ಮತ್ತು ಆದ್ಯತೆ ದೊರೆಯದಿದ್ದರೆ ಸರಕಾರದ ಕನ್ನಡಪರ ನೀತಿಗಳು ಸಂಪೂರ್ಣವಾಗಿ ಸಾಕಾರಗೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಎಲ್ಲಾ ಇಲಾಖೆಗಳು ಕನ್ನಡ ಅನುಷ್ಠಾನವನ್ನು ಕಡ್ಡಾಯವಾಗಿ ಪಾಲಿಸಬೇಕು. ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಆಡಳಿತ ವ್ಯವಸ್ಥೆಯಲ್ಲಿ ಕನ್ನಡಕ್ಕೆ ಗೌರವ ನೀಡದೇ ಆಂಗ್ಲ ಭಾಷೆಯಲ್ಲಿಯೇ ವ್ಯವಹರಿಸುತ್ತಿರುವ ಅಧಿಕಾರಿಗಳ ಮೇಲೆ ನಿಯಮಾನುಸಾರ ಕ್ರಮವಹಿಸಲು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆಯ ರಾಜ್ಯಸಮಿತಿಯ ಮುಂದೆ ಪ್ರಸ್ತಾವ ಮಂಡಿಸಲಿದೆ ಎಂದರು.

ಕನ್ನಡವು ಕೇವಲ ಭಾವನಾತ್ಮಕ ಗುರುತಿನ ಭಾಷೆಯಲ್ಲ. ಅದು ಆಡಳಿತ ಶಿಕ್ಷಣ ಮತ್ತು ಸಾರ್ವಜನಿಕ ಬದುಕಿನ ಎಲ್ಲಾ ಕ್ಷೇತ್ರಗಳಲ್ಲಿಯೂ ಸಮರ್ಥವಾಗಿ ಬಳಕೆಯಾಗಬೇಕಾದ ಜ್ಞಾನದ ಭಾಷೆಯಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಸರಕಾರಿ ಅಧಿಕಾರಿ ತಮ್ಮ ಭಾಷಾ ಹೊಣೆಗಾರಿಕೆಯನ್ನು ಅರಿತು ಕೆಲಸ ಮಾಡಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಮಹಾರಾಣಿ ಕ್ಲಸ್ಟರ್ ವಿವಿ ಕುಲಪತಿ ಡಾ.ಕೆ.ವೈ.ನಾರಾಯಣಸ್ವಾಮಿ, ಕುಲಸಚಿವೆ (ಆಡಳಿತ) ಸೀಮಾ ನಾಯಕ್, ಕುಲಸಚಿವ (ಮೌಲ್ಯಮಾಪನ) ಪ್ರೊ.ವೈ.ರಮೇಶ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ವಿ.ಪಿ.ನಿರಂಜನಾರಾಧ್ಯ, ಕಾರ್ಯದರ್ಶಿ ಡಾ.ಸಂತೋಷ ಹಾನಗಲ್ಲ, ಆಪ್ತ ಕಾರ್ಯದರ್ಶಿ ಟಿ.ಎಸ್. ಫಣಿಕುಮಾರ್ ಮತ್ತಿತರರು ಹಾಜರಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News