×
Ad

ಇ-ಸ್ವತ್ತು 2.0 | 11 ಎ ಖಾತೆ ಹಾಗೂ ಬಹುಮಹಡಿ ಕಟ್ಟಡ ಅರ್ಜಿ ಸಲ್ಲಿಕೆಗೆ ಶೀಘ್ರದಲ್ಲೇ ಅವಕಾಶ : ಪ್ರಿಯಾಂಕ್ ಖರ್ಗೆ

Update: 2026-01-05 19:11 IST

ಪ್ರಿಯಾಂಕ್ ಖರ್ಗೆ

ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ನಮೂನೆ-11ಬಿ ಖಾತೆಗಳನ್ನು ಎರಡು ವಾರಗಳ ಕಾಲವಾಧಿಯಲ್ಲಿ ನಮೂನೆ-11ಎ ಖಾತೆಗಳನ್ನಾಗಿ ಪರಿವರ್ತನೆ ಮಾಡಿಕೊಳ್ಳಲು ಮತ್ತು ಹೊಸ ಬಡಾವಣೆ ಮತ್ತು ಬಹುಮಹಡಿ (ಅಪಾರ್ಟ್‍ಮೆಂಟ್) ಕಟ್ಟಡಗಳಿಗೆ ಅರ್ಜಿಗಳನ್ನು ಸಲ್ಲಿಸಲು ಮುಂದಿನ ಒಂದು ತಿಂಗಳ ಅವಧಿಯಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಸೋಮವಾರ ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಇ-ಸ್ವತ್ತು ಪ್ರಕ್ರಿಯೆ ಹಾಗೂ ತಂತ್ರಾಂಶವನ್ನು ಹೆಚ್ಚು ನಾಗರಿಕ ಸ್ನೇಹಿಯಾಗಿ ಅನುಷ್ಠಾನಗೊಳಿಸಲು ಇಲಾಖೆ ಬದ್ದವಾಗಿದ್ದು, ಅದರನ್ವಯ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ. ಈವರೆಗೆ ಆನ್‍ಲೈನ್ ಮೂಲಕ 21,429 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಅನುಮೋದನೆಗಾಗಿ ವಿವಿಧ ಹಂತದಲ್ಲಿ ಬಾಕಿಯಿದೆ. ಕೆಲವೊಂದು ಅರ್ಜಿಗಳನ್ನು ಸಲ್ಲಿಸುವಾಗ ತಾಂತ್ರಿಕ ಸಮಸ್ಯೆಗಳು ಉಂಟಾಗುತ್ತಿರುವುದು ಸರಕಾರದ ಗಮನಕ್ಕೆ ಬಂದಿದೆ. ಅವುಗಳನ್ನು ಸರಿಪಡಿಸುವಲ್ಲಿ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಸಾರ್ವಜನಿಕರಿಗೆ ಅನುಕೂಲವಾಗುವಂತೆ ಇ-ಸ್ವತ್ತು ತಂತ್ರಾಂಶದಲ್ಲಿರುವ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ, ಮತ್ತಷ್ಟು ಸರಳೀಕರಿಸಲು ಕ್ರಮ ವಹಿಸಲಾಗುತ್ತಿದೆ. ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆ ಇಲ್ಲ. ಸಾರ್ವಜನಿಕರಿಂದ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಅನುಮೋದನೆ ಮಾಡುವ ಪ್ರಕ್ರಿಯೆಯು ಪ್ರಸಕ್ತ ಸಾಲಿನ ಜ.1ರಿಂದ ಆರಂಭಗೊಂಡಿದ್ದು, ಸಾರ್ವಜನಿಕರು ಇ-ಸ್ವತ್ತು 2.0 ತಂತ್ರಾಂಶದ ಆನ್-ಲೈನ್ ಪೋರ್ಟಲ್ ನ ಮೂಲಕ ತೆರಿಗೆ ಮತ್ತು ಪ್ರಿಟಿಂಗ್ ಶುಲ್ಕವನ್ನು ಪಾವತಿಸಿ, ಇ-ಖಾತಾವನ್ನು ಡೌನ್-ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಇ-ಸ್ವತ್ತು ಅರ್ಜಿ ಸಲ್ಲಿಸಲು ಯಾವುದೇ ಕಾಲಾವಧಿಯನ್ನು ನಿಗದಿಪಡಿಸಲಾಗಿಲ್ಲ. ಸಾರ್ವಜನಿಕರು ಗ್ರಾಮ ಪಂಚಾಯಿತಿಗೆ ಭೇಟಿ ನೀಡದೆಯೆ ತಾವಿರುವಲ್ಲಿಯೇ ತಮ್ಮ ಆಸ್ತಿಗೆ ಸಂಬಂಧಿಸಿದಂತೆ ನಮೂನೆಗಳನ್ನು ಇ-ಸ್ವತ್ತು ತಂತ್ರಾಂಶದ ಮೂಲಕ ಪಡೆಯಲು ಅವಕಾಶ ಕಲ್ಪಿಸಲಾಗಿದೆ, ಸಮಸ್ಯೆ, ಸಂದೇಹಗಳನ್ನು ಬಗೆಹರಿಸಲು ಸರಕಾರ ಬದ್ದವಾಗಿದ್ದು, ಈ ಬಗ್ಗೆ ಸಾರ್ವಜನಿಕರು ಸಹಕರಿಸಬೇಕೆಂದು ಅವರು ಕೋರಿದ್ದಾರೆ.

ಇ-ಸ್ವತ್ತು 2.0 ರಡಿ ಅರ್ಜಿ ಸಲ್ಲಿಸಲು, ಸಂಬಂಧಿತ ದಾಖಲಾತಿ, ಪ್ರಕ್ರಿಯೆಯಲ್ಲಿ, ತಂತ್ರಾಂಶದ ಬಳಕೆಯ ಕುರಿತು ಸಂದೇಹಗಳಿದ್ದಲ್ಲಿ ತಮ್ಮ ಜಿಲ್ಲಾ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ. ಜಿಲ್ಲಾ ಸಹಾಯವಾಣಿಗಳ ಸಂಖ್ಯೆಯನ್ನು ‘ಸಂಪರ್ಕಿಸಿ’ ಶೀರ್ಷಿಕೆಯಡಿ ಮುಂದಿನ ಕೊಂಡಿ ಮೂಲಕ https://eswathu.karnataka.gov.in/Login.aspx  ಪಡೆಯಬಹುದಾಗಿದೆ. ಹಾಗೂ https://panchatantra.karnataka.gov.in  ರಲ್ಲಿಯೂ ಪ್ರಕಟಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News