ಬೆಂಗಳೂರು : ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಉತ್ಪಾದನೆ ಹೆಚ್ಚಳ, ಕಚ್ಚಾ ತೈಲ ಸಂಗ್ರಹ ಸಾಮರ್ಥ್ಯ ವಿಸ್ತರಣೆ, ಸೌರ, ಜಲ ಮತ್ತು ಪವನ ವಿದ್ಯುತ್ ಉತ್ಪಾದನೆಗೆ ಉತ್ತೇಜನ ಹಾಗೂ ರೈಲ್ವೆ ವಿದ್ಯುದೀಕರಣದಂತಹ ಕ್ರಮಗಳು ದೇಶದ ಇಂಧನ ಭದ್ರತೆಗೆ ಆದ್ಯತೆ ನೀಡಿವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಶುಕ್ರವಾರ ನಗರದ ಐಐಎಂ ಬೆಂಗಳೂರು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಇರಾನ್ ಮತ್ತು ಗಲ್ಫ್ ಪ್ರದೇಶದ ಸುತ್ತಮುತ್ತ ನಡೆಯುತ್ತಿರುವ ಯುದ್ಧದ ಪರಿಸ್ಥಿತಿಯು ಇಂಧನ ಭದ್ರತೆಯ ಮಹತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಕಳೆದ ಒಂದು ದಶಕದಲ್ಲಿ ಭಾರತ ಕೈಗೊಂಡ ದೂರದೃಷ್ಟಿಯ ಕ್ರಮಗಳಿಂದ ಇಂತಹ ಸವಾಲಿನ ಸಂದರ್ಭಗಳನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗಿದೆ ಎಂದು ಮೋದಿ ಹೇಳಿದರು.

ಬೆಂಗಳೂರಿನ ಸಂಕುಚಿತ ಜೈವಿಕ ಅನಿಲ (ಸಿಬಿಜಿ) ಘಟಕವು ಪ್ರತಿದಿನ 13 ಟನ್ ಜೈವಿಕ ಅನಿಲ ಉತ್ಪಾದಿಸಲಿದೆ. ಇದರಿಂದ ತ್ಯಾಜ್ಯ ನಿರ್ವಹಣೆ ಸುಧಾರಿಸುವುದರ ಜೊತೆಗೆ ನೈಸರ್ಗಿಕ ಅನಿಲ ಆಮದಿಗೆ ವ್ಯಯಿಸುವ ಹಣವೂ ಉಳಿತಾಯವಾಗಲಿದೆ ಎಂದು ನರೇಂದ್ರ ಮೋದಿ ಹೇಳಿದರು.

ನವ ಮಧ್ಯಮ ವರ್ಗದ ಆಕಾಂಕ್ಷೆಗಳಿಗೆ ಆದ್ಯತೆ :

2014ರ ನಂತರದ ಸರಕಾರದ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಸಂಕಲ್ಪದಡಿ ಅಭಿವೃದ್ಧಿ ಯೋಜನೆಗಳ ಅನುಷ್ಠಾನ, ಜನರ ಸಹಭಾಗಿತ್ವ ಮತ್ತು ತೆರಿಗೆ ಹಣದ ಸಮರ್ಪಕ ಬಳಕೆಗೆ ಆದ್ಯತೆ ನೀಡಲಾಗಿದೆ. ಇದರ ಪರಿಣಾಮವಾಗಿ ಮಧ್ಯಮ ವರ್ಗ ವಿಸ್ತರಿಸಿದ್ದು, ಹೊಸ ಆಕಾಂಕ್ಷೆಯ ವರ್ಗವೊಂದು ರೂಪುಗೊಂಡಿದೆ ಎಂದು ಪ್ರಧಾನಿ ಹೇಳಿದರು.

ಈ ವರ್ಗವು ಗೃಹೋಪಯೋಗಿ ವಸ್ತುಗಳು, ದ್ವಿಚಕ್ರ ವಾಹನಗಳು, ಗುಣಮಟ್ಟದ ಶಿಕ್ಷಣ, ಪೌಷ್ಟಿಕ ಆಹಾರ, ಆರೋಗ್ಯ ಸೇವೆ ಮತ್ತು ಪ್ರವಾಸೋದ್ಯಮದಂತಹ ಕ್ಷೇತ್ರಗಳಲ್ಲಿ ಹೆಚ್ಚಿನ ನಿರೀಕ್ಷೆಗಳನ್ನು ಹೊಂದಿದೆ. ಇದರಿಂದ ವಾಹನೋದ್ಯಮ, ಇಲೆಕ್ಟ್ರಾನಿಕ್ಸ್, ಪ್ರವಾಸೋದ್ಯಮ ಮತ್ತು ಸೇವಾ ವಲಯಗಳಲ್ಲಿ ಕೈಗಾರಿಕಾ ಬೆಳವಣಿಗೆ ಹಾಗೂ ಉದ್ಯೋಗ ಸೃಷ್ಟಿಗೆ ಉತ್ತೇಜನ ದೊರೆಯುತ್ತಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಡಾ.ಸುಧಾ ಯಾದವ್, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ, ಸಂಸದ ತೇಜಸ್ವಿಸೂರ್ಯ ಉಪಸ್ಥಿತರಿದ್ದರು.

ಕರ್ನಾಟಕದಲ್ಲಿ ಮೂರು ಪ್ರಮುಖ ಇಂಧನ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಮಂಗಳೂರು ಎಲ್‌ಪಿಜಿ ಯೋಜನೆಯಿಂದ 80 ಸಾವಿರ ಮೆಟ್ರಿಕ್ ಟನ್ ಹೆಚ್ಚುವರಿ ಸಂಗ್ರಹ ಸಾಮರ್ಥ್ಯ ಲಭ್ಯವಾಗಲಿದೆ. ದೇವನಗೊಂದಿ ಮಾರ್ಕೆಟಿಂಗ್ ಟರ್ಮಿನಲ್ ಮೂಲಕ ಪೆಟ್ರೋಲ್, ಡೀಸೆಲ್ ಮತ್ತು ವಿಮಾನ ಇಂಧನ ಪೂರೈಕೆ ವ್ಯವಸ್ಥೆ ಸುಧಾರಿಸಲಿದೆ.

-ನರೇಂದ್ರ ಮೋದಿ, ಪ್ರಧಾನಿ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor