×
Ad

‘ಎತ್ತಿನಹೊಳೆ ಯೋಜನೆ’ ಎರಡು ವರ್ಷಗಳಲ್ಲಿ ಕುಡಿಯುವ ನೀರು ಪೂರೈಕೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2025-07-02 19:57 IST

ಚಿಕ್ಕಬಳ್ಳಾಪುರ(ನಂದಿ ಗಿರಿಧಾಮ) : ಎತ್ತಿನಹೊಳೆ ಯೋಜನೆಗೆ ಒಟ್ಟು 23,251 ಕೋಟಿ ರೂ. ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇಲ್ಲಿಯವರೆಗೂ 17,147ಕೋಟಿ ರೂ.ಖರ್ಚಾಗಿದೆ. ಎರಡು ವರ್ಷಗಳಲ್ಲಿ ಉದ್ದೇಶಿತ ಜಿಲ್ಲೆ ಹಾಗೂ ತಾಲೂಕುಗಳಿಗೆ ಕುಡಿಯುವ ನೀರು ಪೂರೈಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬುಧವಾರ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗಿರಿಧಾಮದಲ್ಲಿನ ಮಯೂರ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಬೆಂಗಳೂರು ಕಂದಾಯ ವಿಭಾಗದ ವಿಶೇಷ ಸಚಿವ ಸಂಪುಟ ಸಭೆಯ ಬಳಿಕ ಅವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ಮೂಲತಃ ಕುಡಿಯುವ ನೀರಿನ ಯೋಜನೆ ಇದಾಗಿದೆ. ಕೆರೆಗಳಿಗೆ ನೀರು ತುಂಬಿಸುವುದು ನಂತರದ ಆದ್ಯತೆ. 24.1 ಟಿಎಂಸಿ ನೀರಿನಲ್ಲಿ ಕುಡಿಯುವ ನೀರಿಗೆ 14 ಟಿಎಂಸಿ ಬೇಕಾಗಿದೆ. ಆದುದರಿಂದ, ಮೊದಲು ಕುಡಿಯುವ ನೀರನ್ನು ಕೊಡುವ ಯೋಜನೆ ಮುಗಿಸಲು ಸಂಪುಟ ಸಭೆ ತೀರ್ಮಾನಿಸಿದೆ. ಎರಡು ವರ್ಷಗಳಲ್ಲಿ ಉದ್ದೇಶಿತ ಜಿಲ್ಲೆ, ತಾಲ್ಲೂಕುಗಳಿಗೆ ನೀರು ಕೊಡುತ್ತೇವೆ ಎಂದು ಅವರು ಹೇಳಿದರು.

9807 ಕೋಟಿ ರೂ. ಮೊತ್ತದಲ್ಲಿ ಗ್ರಾವಿಟಿ ಮುಖ್ಯ ಕೆನಲ್‍ನ ಕೆಲಸ ಶೇ. 85ರಷ್ಟು ಮಗಿದಿದೆ. ಹೆಚ್ಚುವರಿಯಾಗಿ ಇದಕ್ಕೆ 8 ಸಾವಿರ ಕೋಟಿ ರೂ. ಬೇಕಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಉತ್ತರ, ತುಮಕೂರು, ಹಾಸನ ಸೇರಿದಂತೆ ಒಟ್ಟು 9 ಜಿಲ್ಲೆಗಳ 75 ಲಕ್ಷ ಜನರಿಗೆ ಕುಡಿಯುವ ನೀರು ಕೊಡುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದರು.

ಈ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆಯಾಗಿದೆ. ಮುಂದಿನ ಸಂಪುಟ ಸಭೆಯಲ್ಲಿ ನಿರ್ಣಯಿಸಲು ತೀರ್ಮಾನಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಶೇ.90 ರಷ್ಟು ಬೆಂಗಳೂರು ವಿಭಾಗದ ವಿಷಯಗಳನ್ನೇ ಈ ವಿಶೇಷ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಂಡಿದ್ದೇವೆ. ಒಟ್ಟು 3400 ಕೋಟಿ ರೂ. ಮೊತ್ತದ ಯೋಜನೆಗಳನ್ನು ಮಂಜೂರು ಮಾಡಿದ್ದೇವೆ. ಇದರಲ್ಲಿ, 2050 ಕೋಟಿ ರೂ. ಬೆಂಗಳೂರು ವಿಭಾಗದ ಜಿಲ್ಲೆಗಳಿಗೆ ಕೊಟ್ಟಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಪ್ರತೀ ಜಿಲ್ಲೆಯಲ್ಲಿ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ನಿರ್ಮಿಸಲು ತೀರ್ಮಾನಿಸಲಾಗಿದ್ದು ಇದಕ್ಕೆ 1125.25 ಕೋಟಿ ರೂ. ಮಂಜೂರು ಮಾಡಲಾಗಿದೆ. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ನೀರಾವರಿ ಯೋಜನೆ, ಕೆರೆ ತುಂಬಿಸುವ ಯೋಜನೆಗಳನ್ನೇ ಪ್ರಮುಖವಾಗಿ ಚರ್ಚಿಸಲಾಗಿದೆ ಎಂದು ಅವರು ಹೇಳಿದರು.

ಹಿಂದುಳಿದ ವರ್ಗದ ಅಭ್ಯರ್ಥಿಗಳು ಐಎಎಸ್, ಐಆರ್‌ಎಸ್, ಐಪಿಎಸ್ ಸೇರಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ನೀಡಲು 10 ಕೋಟಿ ರೂ. ವೆಚ್ಚದಲ್ಲಿ ಎರಡು ವಸತಿ ಶಾಲೆ ಬೆಂಗಳೂರಿನಲ್ಲಿ ನಿರ್ಮಿಸಲಾಗುವುದು. ಶಿಕ್ಷಣಕ್ಕೆ- 1627.25 ಕೋಟಿ ರೂ ನೀಡಿದ್ದೇವೆ. ಇದರಲ್ಲಿ ಕಾಲೇಜು, ವಿಶ್ವವಿದ್ಯಾಲಯಗಳ ಮೂಲಭೂತ ಸೌಕರ್ಯ ಒದಗಿಸುತ್ತಿದ್ದೇವೆ ಎಂದು ಅವರು ಹೇಳಿದರು.

ಪ್ರಾಥಮಿಕ ಆರೋಗ್ಯ ಕೇಂದ್ರಗಳು ಇಲ್ಲದ ಹೊಸ ತಾಲ್ಲೂಕುಗಳಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳನ್ನು ಆರಂಭಿಸಲು ತೀರ್ಮಾನ ಮಾಡಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.

ನಾವು ಆಡಳಿತವನ್ನು ಬೆಂಗಳೂರು ಕೇಂದ್ರಿತ ಎಂಬುದನ್ನು ತಪ್ಪಿಸಿ ವಿಕೇಂದ್ರೀಕರಣ ಮಾಡುವುದಕ್ಕಾಗಿಯೆ ಆಯಾ ಭಾಗದ ಸಮಸ್ಯೆಗಳ ಮೇಲೆ ಗಮನ ಹರಿಸಿ ಅವುಗಳಿಗೆ ಚಿಕಿತ್ಸಕ ಪರಿಹಾರ ನೀಡುವ ಉದ್ದೇಶದಿಂದ ಸಚಿವ ಸಂಪುಟ ಸಭೆಗಳನ್ನು ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆಸುತ್ತಿದ್ದೇವೆ ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ್, ಕೆ.ಎಚ್. ಮುನಿಯಪ್ಪ, ಡಾ.ಜಿ.ಪರಮೇಶ್ವರ್, ಡಾ.ಎಂ.ಸಿ.ಸುಧಾಕರ್, ಬಿ.ಎಸ್.ಸುರೇಶ್, ಶಾಸಕ ಪ್ರದೀಪ್ ಈಶ್ವರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮರು ನಾಮಕರಣ: ಬೆಂಗಳೂರು ನಗರ ವಿವಿಗೆ ‘ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿವಿ’ ಎಂದು ಮರು ನಾಮಕರಣ ಮಾಡಲು ತೀರ್ಮಾನಿಸಲಾಗಿದೆ. ಅದೇ ರೀತಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಹಾಗೂ ಬಾಗೇಪಲ್ಲಿ ಪಟ್ಟಣವನ್ನು ಭಾಗ್ಯ ನಗರ ಎಂದು ಮರು ನಾಮಕರಣ ಮಾಡಲು ತೀರ್ಮಾನಿಸಲಾಗಿದೆ.

-ಸಿದ್ದರಾಮಯ್ಯ, ಮುಖ್ಯಮಂತ್ರಿ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - -ಅಮ್ಜದ್ ಖಾನ್ ಎಂ.

contributor

Similar News