×
Ad

ಪ್ರತಿ ಮತವೂ ಪ್ರಜಾಪ್ರಭುತ್ವದ ಅಡಿಪಾಯವನ್ನು ಬಲಪಡಿಸುತ್ತದೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Update: 2026-01-26 00:36 IST

ಬೆಂಗಳೂರು: ಪ್ರತಿ ಮತವೂ ಪ್ರಜಾಪ್ರಭುತ್ವದ ಅಡಿಪಾಯವನ್ನು ಬಲಪಡಿಸುತ್ತದೆ. ಹೀಗಾಗಿ ಮತದಾರರು ತಮ್ಮ ಮತದಾನದ ಹಕ್ಕನ್ನು ಮುಕ್ತವಾಗಿ ಮತ್ತು ನ್ಯಾಯಯುತವಾಗಿ, ಯಾವುದೇ ಭಯ, ಒತ್ತಡ ಅಥವಾ ಪ್ರಚೋದನೆಯಿಲ್ಲದೆ ಚಲಾಯಿಸಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರೆ ನೀಡಿದ್ದಾರೆ.

ರವಿವಾರ ಇಲ್ಲಿನ ಪುರಭವನದಲ್ಲಿ ಭಾರತ ಚುನಾವಣಾ ಆಯೋಗವು ಆಯೋಜಿಸಿದ್ದ ‘ರಾಷ್ಟ್ರೀಯ ಮತದಾರರ ದಿನಾಚರಣೆ-2026’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದ ಪ್ರಜಾಪ್ರಭುತ್ವವು ಸಂವಿಧಾನದ ಆದರ್ಶಗಳು ಮತ್ತು ಚುನಾವಣೆಯಲ್ಲಿ ಪ್ರತಿಯೊಬ್ಬರು ಸಕ್ರಿಯ ಭಾಗವಹಿಸುವಿಕೆಯನ್ನು ಆಧರಿಸಿದೆ. ‘ಒಂದು ಮತ-ಒಂದು ಧ್ವನಿ-ಒಂದು ಜವಾಬ್ದಾರಿ’ ಇದು ಪ್ರಜಾಪ್ರಭುತ್ವದ ಆತ್ಮ ಎಂದರು.

ಪ್ರತಿಯೊಬ್ಬ ಅರ್ಹ ನಾಗರಿಕನಿಗೆ ಮತದಾನದ ಹಕ್ಕನ್ನು ನೀಡುವ ಮೂಲಕ, ಭಾರತೀಯ ಸಂವಿಧಾನವು ಆಡಳಿತದ ಸರ್ವೋಚ್ಚ ಅಧಿಕಾರವು ಜನರೊಂದಿಗೆ ಇರುತ್ತದೆ ಎಂದು ಖಚಿತಪಡಿಸಿದೆ.

ಮತದಾನವು ಕಾನೂನುಬದ್ಧ ಹಕ್ಕು ಮಾತ್ರವಲ್ಲದೆ ಪ್ರಜಾಪ್ರಭುತ್ವದ ಕಡೆಗೆ ನಾಗರಿಕರ ಸಾಂವಿಧಾನಿಕ ಜವಾಬ್ದಾರಿಯೂ ಆಗಿದೆ. ಭಾರತದ ಪ್ರಜಾಪ್ರಭುತ್ವವು ಅದರ ಸಮಗ್ರತೆ ಮತ್ತು ಎಲ್ಲರನ್ನೂ ಒಳಗೊಳ್ಳುವಿಕೆಯಿಂದಾಗಿ ಜಗತ್ತಿನಲ್ಲಿ ವಿಶಿಷ್ಟ ಸ್ಥಾನವನ್ನು ಹೊಂದಿದೆ. ಈ ಪ್ರಜಾಪ್ರಭುತ್ವದ ಅಡಿಪಾಯವು ನ್ಯಾಯಯುತ, ಮುಕ್ತ ಮತ್ತು ಪಾರದರ್ಶಕ ಚುನಾವಣಾ ಪ್ರಕ್ರಿಯೆಯಲ್ಲಿದೆ. ಇದಕ್ಕಾಗಿ ಪ್ರತಿಯೊಬ್ಬ ಮತದಾರರ ಸಕ್ರಿಯ ಭಾಗವಹಿಸುವಿಕೆ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟರು.

ರಾಷ್ಟ್ರೀಯ ಮತದಾರರ ದಿನವು ನಾವೆಲ್ಲರೂ ಪ್ರತಿಜ್ಞೆ ಮಾಡಲು ಪ್ರೇರೇಪಿಸುತ್ತದೆ. ಸಂವಿಧಾನದಲ್ಲಿ ಪ್ರತಿಪಾದಿಸಲಾದ ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿಹಿಡಿಯಬೇಕು. ನಾವು ಮತ ಚಲಾಯಿಸಿ ಮತ್ತು ಇತರರು ಅದೇ ರೀತಿ ಮಾಡಲು ಪ್ರೋತ್ಸಾಹಿಸಬೇಕು. ರಾಷ್ಟ್ರದ ಕಡೆಗೆ ನಮ್ಮ ನಾಗರಿಕ ಜವಾಬ್ದಾರಿಗಳನ್ನು ನಿಷ್ಟೆಯಿಂದ ನಿರ್ವಹಿಸುವ ಪ್ರತಿಜ್ಞೆ ಮಾಡಬೇಕು ಎಂದು ಅವರು ಹೇಳಿದರು.

ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಮಾತನಾಡಿ, ಇಂದು ರಾಜ್ಯಾದ್ಯಂತ 16ನೇ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತಿದೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಮತದಾರರು ಬಹುಮುಖ್ಯ ಪಾತ್ರ ವಹಿಸುತ್ತಾರೆ ಎಂದು ತಿಳಿಸಿದರು.

ಭಾರತ ಚುನಾವಣಾ ಆಯೋಗವು ಸುಗಮ ಮತದಾನಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿದೆ. ಪ್ರತಿ ವರ್ಷ ಜನವರಿ 1, ಎಪ್ರಿಲ್ 1, ಜುಲೈ 1 ಹಾಗೂ ಅಕ್ಟೋಬರ್ 1 ಯುವ ಮತದಾರರು, ಮಹಿಳೆಯರು, ವಿಶೇಷ ಚೇತನರು ಇತರೆ ಅವಕಾಶ ವಂಚಿತರಿಗೆ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಹೇಳಿದರು.

ಇದೇ ವೇಳೆ ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಇನ್ನಿತರೆ ಚುನಾವಣೆ ವಿಷಯಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದವರಿಗೆ ಪ್ರಶಸ್ತಿಗಳನ್ನು ವಿತರಿಸಲಾಯಿತು. ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಆರ್. ರಾಮಚಂದ್ರನ್ ಸೇರಿದಂತೆ ಮತ್ತಿತರರು ಇದ್ದರು.

ಮತದಾನ ಪ್ರತಿಜ್ಞಾ ವಿಧಿ ಸ್ವೀಕಾರ:

‘ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಸಭಾಂಗಣದಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳು/ ಸಿಬ್ಬಂದಿಗಳು, ವಿದ್ಯಾರ್ಥಿಗಳು ಸೇರಿದಂತೆ 1,000ಕ್ಕೂ ಹೆಚ್ಚು ಜನ ಮತದಾನ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News