ಪಿಫಾ ವಿಶ್ವ ಕಪ್ ಫೈನಲ್‌ ಪಂದ್ಯ: ಫುಟ್ಬಾಲ್ ಅಭಿಮಾನಿಗಳು ತಾಳ್ಮೆಯಿಂದ ವರ್ತಿಸಲು ಸಿಎಂ ಡಿ.ಕೆ.ಶಿವಕುಮಾರ್ ಮನವಿ

Update: 2026-07-19 13:02 IST

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು: ಫಿಫಾ ವಿಶ್ವಕಪ್ ಫೈನಲ್‌ ಪಂದ್ಯ ವೀಕ್ಷಣೆಗೆ ಯುವಕರ ಮನವಿ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿಯ ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳಿಗೆ ಬೆಳಗಿನ ಜಾವ 3.30ರವರೆಗೆ ಕಾರ್ಯನಿರ್ವಹಿಸಲು ವಿಶೇಷ ಅನುಮತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ರವಿವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಫುಟ್ಬಾಲ್ ಅಭಿಮಾನಿಗಳು ಶಾಂತಿಯುತವಾಗಿ ಪಂದ್ಯ ವೀಕ್ಷಿಸಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ತಾಳ್ಮೆಯಿಂದ ವರ್ತಿಸಬೇಕು ಎಂದು ಮನವಿ ಮಾಡಿದರು.

ನಗರದ ಪ್ರಮುಖ ಪ್ರದೇಶಗಳಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಎಲ್ಲೆಡೆ ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿಗಾವಹಿಸಲಾಗಿದೆ. ಯಾವ ತಂಡ ಗೆದ್ದರೂ ಅಭಿಮಾನಿಗಳು ಸಂಯಮ ಕಾಪಾಡಬೇಕು ಎಂದು ಮುಖ್ಯಮಂತ್ರಿ ಹೇಳಿದರು.

ಬರ ಪರಿಸ್ಥಿತಿ ಎದುರಿಸಲು ಸಿದ್ಧತೆ :

ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವೀಡಿಯೊ ಸಂವಾದ ನಡೆಸಲಾಗುತ್ತಿದೆ. ಜನರ ಸಮಸ್ಯೆಗಳ ಪರಿಹಾರಕ್ಕೆ ರಜೆ ಎಂಬುದಿಲ್ಲ. ಅಧಿಕಾರಿಗಳು 24 ಗಂಟೆಯೂ ಕಾರ್ಯನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.

ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ರಾಜ್ಯದ ಪ್ರತಿ ತಾಲ್ಲೂಕಿಗೆ ಕುಡಿಯುವ ನೀರಿನ ವ್ಯವಸ್ಥೆಗಾಗಿ 1 ಕೋಟಿ ರೂ. ಅನುದಾನ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News