ಉನ್ನತ ಶಿಕ್ಷಣ ಇಲಾಖೆಯಲ್ಲಿ ಬ್ಯಾಕ್‍ಲಾಗ್ ಹುದ್ದೆಗಳನ್ನು ಮೊದಲಿಗೆ ಭರ್ತಿ ಮಾಡಿ: ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು, ಅ.21: ಶಿಕ್ಷಣ ಕ್ಷೇತ್ರದ ಗುಣಮಟ್ಟ ಕಾಯ್ದುಕೊಳ್ಳಲು ಬೋಧಕ ಸಿಬ್ಬಂದಿ ನೇಮಕ ಅಗತ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಮತ್ತು ಬ್ಯಾಕ್‍ಲಾಗ್ ಹುದ್ದೆಗಳನ್ನು ಮೊದಲಿಗೆ ಭರ್ತಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಶನಿವಾರ ಸಿಎಂ ಗೃಹ ಕಚೇರಿಯಲ್ಲಿ ನಡೆದ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಬ್ಯಾಕ್‍ಲಾಗ್ ಹುದ್ದೆಗಳನ್ನು ತುಂಬಿದ ನಂತರ ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುತ್ತದೆ. ಹಾಗೆಯೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಎಲ್‍ಎಂಎಸ್ ವ್ಯವಸ್ಥೆ ಜಾರಿಗೆ ಮಾಡಲಾಗುತ್ತಿದೆ ಎಂದರು.
ಮಹಾರಾಣಿ ಆಟ್ರ್ಸ್ ಕಾಲೇಜು ಹಾಸ್ಟೆಲ್ ಆವರಣದಲ್ಲಿ 99 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಆಟ್ರ್ಸ್ ಮತ್ತು ವಿಜ್ಞಾನ ಕಾಲೇಜಿನ ತಲಾ ಸಾವಿರ ವಿದ್ಯಾರ್ಥಿನಿಯರಿಗೆ ಅವಕಾಶ ಕಲ್ಪಿಸುವ ಹಾಸ್ಟೆಲ್ ನಿರ್ಮಾಣಕ್ಕೆ ಕೂಡಲೇ ಕ್ರಮ ಕೈಗೊಳ್ಳಲು ಸೂಚಿಸಿದರು.
ಇದಲ್ಲದೆ ಶಿಥಿಲಾವಸ್ಥೆಯಲ್ಲಿರುವ ಮಹಾರಾಣಿ ವಿಜ್ಞಾನ ಕಾಲೇಜಿನ ನವೀಕರಣ/ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು. ದಸರಾ ಸಂದರ್ಭದಲ್ಲಿ ತಾವು ಸ್ವತಃ ಮಹಾರಾಣಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲಿಸುವುದಾಗಿ ತಿಳಿಸಿದರು.
ಈಗಾಗಲೇ ಇಲಾಖೆಯ ಬಳಿ 47 ಕೋಟಿ ರೂ. ಲಭ್ಯವಿದ್ದು ಮುಂದಿನ ವರ್ಷದ ಆಯವ್ಯಯದಲ್ಲಿ ಹೆಚ್ಚುವರಿ ಅನುದಾನ ಒದಗಿಸುವಂತೆ ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಉನ್ನತ ಶಿಕ್ಷಣ ಇಲಾಖೆಯಡಿ ನಿರ್ಮಿಸಿರುವ 13,169 ವಿದ್ಯಾರ್ಥಿಗಳ ಸಾಮಥ್ರ್ಯದ 224 ವಸತಿ ನಿಲಯಗಳನ್ನು ಹಸ್ತಾಂತರಿಸಿಕೊಳ್ಳಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಿದ್ಧವಿದ್ದು, ಇದನ್ನು ಸಚಿವ ಸಂಪುಟದ ಮುಂದೆ ತರಬೇಕು. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಹಣಕಾಸು ಶಿಸ್ತು, ನೇಮಕಾತಿಯಲ್ಲಿ ಪಾರದರ್ಶಕತೆ ಮತ್ತಿತರ ವಿಷಯಗಳಲ್ಲಿ ಸುಧಾರಣೆ ತರುವ ಕುರಿತು ಕ್ರಮ ಕೈಗೊಳ್ಳಬೇಕು ಎಂದರು.
ಮುಂದಿನ ವರ್ಷ ಆಯವ್ಯಯ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದ ಗುಣಮಟ್ಟ ಸುಧಾರಣೆಗೆ ಮುಂಚಿತವಾಗಿಯೇ ಸಭೆ ನಡೆಸಿ, ಕೈಗೊಳ್ಳಬೇಕಾದ ಕ್ರಮಗಳನ್ನು ಚರ್ಚಿಸಿ, ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಸೂಚಿಸಿದರು.