ಸಿಜೆಐ ಮೇಲೆ ಶೂ ಎಸೆತ ಘಟನೆ : ವಕೀಲ ರಾಕೇಶ್ ಕಿಶೋರ್ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಎಫ್ಐಆರ್
ವಕೀಲ ರಾಕೇಶ್ ಕಿಶೋರ್ (Photo: ANI)
ಬೆಂಗಳೂರು, ಅ.8: ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಕೀಲ ರಾಕೇಶ್ ಕಿಶೋರ್ ವಿರುದ್ಧ ಬುಧವಾರ ಇಲ್ಲಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ವಕೀಲ ಭಕ್ತವತ್ಸಲ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ 132 ಹಾಗೂ 133ನೇ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಘಟನೆಯು ದಿಲ್ಲಿಯಲ್ಲಿ ನಡೆದಿದ್ದರೂ, ಬೆಂಗಳೂರಿನ ವಿಧಾನಸೌಧ ಠಾಣೆಯಲ್ಲಿ ಇದನ್ನು 'ಶೂನ್ಯ ಎಫ್‌ಐಆರ್' ಎಂದು ದಾಖಲಿಸಲಾಗಿದೆ. ನಾವು ಶೂನ್ಯ ಎಫ್‌ಐಆರ್ ದಾಖಲಿಸಿಕೊಂಡಿದ್ದು, ಇದನ್ನು ದಿಲ್ಲಿ ಪೊಲೀಸರಿಗೆ ಹಸ್ತಾಂತರ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ನ್ಯಾಯಾಲಯದ ಸಭಾಂಗಣದಲ್ಲಿ (ಕೋರ್ಟ್ ನಂ.1) ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಭಕ್ತವತ್ಸಲ ಅವರು ತಮ್ಮ ದೂರಿನಲ್ಲಿ ಕೋರಿದ್ದಾರೆ.