ಚುನಾವಣಾ ಅಕ್ರಮ ಆರೋಪ; ಶಾಸಕ ಮುನಿರತ್ನ ವಿರುದ್ಧದ ಎಫ್ಐಆರ್ ರದ್ದು

Update: 2026-07-18 21:55 IST

ಶಾಸಕ ಮುನಿರತ್ನ

ಬೆಂಗಳೂರು: ಕಳೆದ ಲೋಕಸಭೆ ಚುನಾವಣೆ ವೇಳೆ ನಿರ್ದಿಷ್ಟ ಪಕ್ಷದ ಶಾಲು ಧರಿಸುವಂತೆ ಜನರಿಗೆ ಬಲವಂತಪಡಿಸಿದ ಆರೋಪದಲ್ಲಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್​ ರದ್ದುಪಡಿಸಿದೆ.

ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್ ರದ್ದುಕೋರಿ ಶಾಸಕ ಮುನಿರತ್ನ ನಾಯ್ಡು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.

ಪ್ರಕರಣದಲ್ಲಿ ದಾಖಲಿಸಲಾಗಿರುವ ಸೆಕ್ಷನ್​​‌ಗಳು ತೀರಾ ಸಡಿಲವಾಗಿದ್ದು, ಸೂಕ್ತ ಆಧಾರಗಳಿಲ್ಲದೆ ಸೇರ್ಪಡೆ ಮಾಡಲಾಗಿದೆ. ಐಪಿಸಿ ಸೆಕ್ಷನ್ 363 ಅಪ್ರಾಪ್ತರ ಅಪಹರಣಕ್ಕೆ ಸಂಬಂಧಿಸಿದ್ದಾಗಿದೆ. ಆದರೆ, ಈ ಪ್ರಕರಣದಲ್ಲಿ ಯಾವುದೇ ಅಪ್ರಾಪ್ತರ ಅಪಹರಣ ನಡೆದಿಲ್ಲ. ಹೀಗಿದ್ದರೂ, ಪೊಲೀಸರು ಈ ಸೆಕ್ಷನ್ ಅನ್ವಯಿಸಿರುವುದು ಸರಿಯಾದ ಕ್ರಮವಲ್ಲ ಎಂದು ನ್ಯಾಯಪೀಠ ಆದೇಶದಲ್ಲಿ ಹೇಳಿದೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮತ್ತು ಐಪಿಸಿ ಸೆಕ್ಷನ್ 171-ಸಿ ಅಡಿಯಲ್ಲಿನ ಆರೋಪಗಳಿಗೆ ಸಂಬಂಧಿಸಿದಂತೆ ಈ ಹಿಂದಿನ ತೀರ್ಪುಗಳನ್ನು ಉಲ್ಲೇಖಿಸಿದ ನ್ಯಾಯಪೀಠ, ಇಂಥ ಸಣ್ಣಪುಟ್ಟ ವಿಷಯಗಳಲ್ಲಿ ತನಿಖೆ ಮುಂದುವರಿಸಲು ಅನುಮತಿ ನೀಡುವುದು ಕಾನೂನು ಪ್ರಕ್ರಿಯೆಯ ದುರುಪಯೋಗಕ್ಕೆ ಕಾರಣವಾಗುತ್ತದೆ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠ, ಮುನಿರತ್ನ ವಿರುದ್ಧದ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದುಪಡಿಸಿ ಆದೇಶಿಸಿದೆ.

ಪ್ರಕರಣವೇನು?

ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಶಾಸಕ ಮುನಿರತ್ನ ಅವರು ಮತದಾರರಿಗೆ ನಿರ್ದಿಷ್ಟ ರಾಜಕೀಯ ಪಕ್ಷದ ಶಾಲು ಧರಿಸುವಂತೆ ಬಲವಂತಪಡಿಸಿದ್ದಲ್ಲದೆ, ಬೆದರಿಕೆ ಹಾಕಿದ್ದರು ಎಂದು ಆರೋಪಿಸಿ ಸ್ಯಾಮ್ಯುಯೆಲ್ ಜೆ. ಎಂಬವರು ದೂರು ನೀಡಿದ್ದರು.

ಈ ದೂರು ಆಧರಿಸಿ ನಂದಿನಿ ಲೇಔಟ್ ಪೊಲೀಸರು ಮುನಿರತ್ನ ವಿರುದ್ಧ ಐಪಿಸಿ ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ), 149 (ಅಕ್ರಮ ಕೂಟ), 363 (ಅಪಹರಣ) ಮತ್ತು 171-ಸಿ (ಚುನಾವಣೆಯಲ್ಲಿ ಅನುಚಿತ ಪ್ರಭಾವ ಬೀರಲು ಯತ್ನ) ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದರು. ಇದರಿಂದ, ಪ್ರಕರಣ ರದ್ದು ಕೋರಿ ಮುನಿರತ್ನ ಹೈಕೋರ್ಟ್ ಮೆಟ್ಟಿಲೇರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News