ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸದಿಲ್ಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿರುವುದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.

‘ಇಂಡಿಯಾ ಒಕ್ಕೂಟ’ದ ಪ್ರತಿಭಟನೆ ನಿಮಿತ್ತ ನಿನ್ನೆ ಹೊಸದಿಲ್ಲಿಗೆ ತೆರಳಿದ್ದ ಸಿದ್ದರಾಮಯ್ಯ ಅವರು, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರನ್ನು ಔಪಚಾರಿಕವಾಗಿ ಭೇಟಿ ಮಾಡಿದ್ದರು. ಇದರ ಬೆನ್ನಲ್ಲೆ ಸಿದ್ದರಾಮಯ್ಯ ಅವರು, ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆಂದು ಗೊತ್ತಾಗಿದೆ.

ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ, ಶಾಸಕರಾದ ಎ.ಎಸ್.ಪೊನ್ನಣ್ಣ, ಕೆ.ವೆಂಕಟೇಶ್, ಪರಿಷತ್ ಸದಸ್ಯರಾದ ನಾಗರಾಜ್ ಯಾದವ್, ಶಿವಕುಮಾರ್ ಸೇರಿದಂತೆ ಹಲವರ ಜೊತೆ ವೇಣುಗೋಪಾಲ್ ಮಾತುಕತೆ ನಡೆಸಿದರು.

ಕಾಂಗ್ರೆಸ್‍ಪಕ್ಷದ ವರಿಷ್ಠ ನಾಯಕರ ಜೊತೆ ಭೇಟಿಯ ವೇಳೆ, ‘ಸ್ಟಿಂಗ್ ಆಪರೇಷನ್’ ಬಗ್ಗೆ ಹಾಗೂ ರಾಜ್ಯ ರಾಜಕಾರಣದ ಬಗ್ಗೆ ಇತರ ಮಹತ್ವದ ವಿಚಾರಗಳ ಕುರಿತು ಮಾತುಕತೆ ನಡೆಸಿದ್ದಾರೆ. ಸ್ಟಿಂಗ್ ಪ್ರಕರಣದ ಬಗ್ಗೆ ‘ನ್ಯಾಯಸಮತ ಹಾಗೂ ನಿಷ್ಪಕ್ಷಪಾತ ತನಿಖೆಗೆ ಸೂಚನೆ ನೀಡಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆಂದು ಹೇಳಲಾಗಿದೆ.

‘ಸ್ಟಿಂಗ್ ಪ್ರಕರಣ’ದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಯವರ ಪಾತ್ರವಿದೆ ಎಂದು ಸಾಬೀತಾಗಿದೆ. ಇದರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು. ಹಾಗೆಯೇ ಸ್ಟಿಂಗ್ ಆಪರೇಷನ್‍ನ ಪ್ರಮುಖ ಆರೋಪಿಯ ವಿರುದ್ಧವೂ ಕ್ರಮ ಕೈಗೊಳ್ಳಬೇಕೆಂದು ಸಿದ್ದರಾಮಯ್ಯ, ವರಿಷ್ಟರನ್ನು ಒತ್ತಾಯಿಸಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ.

ನಿಗಮ-ಮಂಡಳಿಗಳ ನೇಮಕಾತಿಗೆ ಈ ಹಿಂದೆ ಸಿದ್ಧಪಡಿಸಲಾದ ಪಟ್ಟಿಯನ್ನು ಅನುಸರಿಸಬೇಕು. ನಿಗಮ ಮಂಡಳಿಗಳ ನೇಮಕಾತಿಯನ್ನು ತ್ವರಿತಗೊಳಿಸಬೇಕು. ರಾಜಕೀಯ ವ್ಯವಹಾರಗಳ ಸಮಿತಿಯ ಶಿಫಾರಸುಗಳನ್ನು ಪ್ರಾಮಾಣಿಕವಾಗಿ ಜಾರಿಗೆ ತರಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor