ಅತ್ಯಾಚಾರ ಪ್ರಕರಣ | ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ; ಜನಪ್ರತಿನಿಧಿಗಳ ಕೋರ್ಟ್ ತೀರ್ಪು
ಪ್ರಜ್ವಲ್ ರೇವಣ್ಣ
ಬೆಂಗಳೂರು : ತೋಟದ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದ ಅಪರಾಧಿ ಪ್ರಜ್ವಲ್ ರೇವಣ್ಣಗೆ ಜೀವನಪರ್ಯಂತ ಸೆರೆವಾಸ ಹಾಗೂ ಒಟ್ಟು 11.60 ಲಕ್ಷ ರೂ.ದಂಡ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.
ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶುಕ್ರವಾರಷ್ಟೇ ಪ್ರಜ್ವಲ್ ರೇವಣ್ಣ ಅವರನ್ನು ಅಪರಾಧಿ ಎಂದು ತೀರ್ಮಾನಿಸಿದ್ದ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರು ಶನಿವಾರ ಅಪರಾಧಿಗೆ ಶಿಕ್ಷೆಯ ಪ್ರಮಾಣ ಪ್ರಕಟಿಸಿದರು.
ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 376(2)(ಕೆ)-ಪ್ರಬಲ ಸ್ಥಾನದಲ್ಲಿದ್ದುಕೊಂಡು ಮಹಿಳೆ ಮೇಲೆ ಅತ್ಯಾಚಾರ) ಅಪರಾಧಕ್ಕೆ ಜೀವಾವಧಿ ಶಿಕ್ಷೆ ಹಾಗೂ ಹಾಗೂ 5 ಲಕ್ಷ ರೂ. ದಂಡ, 376(2)(ಎನ್)-(ಮಹಿಳೆಯ ಮೇಲೆ ಪದೇಪದೆ ಅತ್ಯಾಚಾರ) ಅಪರಾಧಕ್ಕೆ ಜೀವನ ಪರ್ಯಂತ ಸೆರೆವಾಸ ಹಾಗೂ 5 ಲಕ್ಷ ರೂ. ದಂಡದ ಗರಿಷ್ಠ ಶಿಕ್ಷೆಯನ್ನು ನ್ಯಾಯಾಲಯ ವಿಧಿಸಿದೆ.
ಇತರ ಅಪರಾಧಗಳು ಮತ್ತು ಶಿಕ್ಷೆಯ ಪ್ರಮಾಣ:
* ಸೆಕ್ಷನ್ 354 (ಎ)-(ಲೈಂಗಿಕ ದೌರ್ಜನ್ಯ) ಅಡಿಯ ಅಪರಾಧಕ್ಕೆ 3 ವರ್ಷ ಜೈಲು, 25 ಸಾವಿರ ರೂ. ದಂಡ
* ಸೆಕ್ಷನ್ 354 (ಬಿ)-(ವಿವಸ್ತ್ರಗೊಳಿಸುವ ಉದ್ದೇಶದಿಂದ ಮಹಿಳೆಯ ಮೇಲೆ ಹಲ್ಲೆ ಅಥವಾ ಬಲಪ್ರಯೋಗ) ಅಡಿಯ ಅಪರಾಧಕ್ಕೆ 7 ವರ್ಷ ಕಾರಾಗೃಹ ಶಿಕ್ಷೆ, 50 ಸಾವಿರ ರೂ. ದಂಡ
* ಸೆಕ್ಷನ್ 354 (ಸಿ)-(ಮಹಿಳೆಯ ಖಾಸಗಿ ದೃಶ್ಯಗಳನ್ನು ನೋಡುವುದು ಅಥವಾ ಸೆರೆಹಿಡಿಯುವುದು) ಅಪರಾಧಕ್ಕೆ 3 ವರ್ಷ ಜೈಲು, 25 ಸಾವಿರ ರೂ. ದಂಡ
* ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ) ಅಡಿಯ ಅಪರಾಧಕ್ಕೆ 2 ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ
* ಸೆಕ್ಷನ್ 201 (ಅಪರಾಧದ ಸಾಕ್ಷ್ಯ ನಾಶ) ಅಡಿಯ ಅಪರಾಧಕ್ಕೆ 3 ವರ್ಷ ಸೆರೆವಾಸ, 25 ಸಾವಿರ ರೂ. ದಂಡ
* ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆ ಸೆಕ್ಷನ್ 66(ಇ)-(ವ್ಯಕ್ತಿಯ ಖಾಸಗಿತನ ಉಲ್ಲಂಘಿಸಿ ಚಿತ್ರ ಸೆರೆ ಹಿಡಿಯುವುದು ಹಾಗೂ ಹಂಚುವುದು) ಅಡಿಯ ಅಪರಾಧಕ್ಕೆ 3 ವರ್ಷ ಜೈಲು, 25 ಸಾವಿರ ರೂ. ದಂಡ
ಒಟ್ಟು ದಂಡದ ಮೊತ್ತ 11.60 ಲಕ್ಷ ರೂ. ಗಳಲ್ಲಿ 11.25 ಲಕ್ಷ ರೂ. ಗಳನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡಲು ಆದೇಶಿಸಿರುವ ನ್ಯಾಯಾಲಯ, ಎಲ್ಲ ಶಿಕ್ಷೆಗಳೂ ಏಕಕಾಲಕ್ಕೆ ಜಾರಿಯಾಗಲಿವೆ ಎಂದು ಸ್ಪಷ್ಟಪಡಿಸಿದೆ.
ಮಧ್ಯಾಹ್ನಕ್ಕೆ ಆದೇಶ ಕಾಯ್ದರಿಸಿದ್ದ ಕೋರ್ಟ್:
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ತೀರ್ಪು ನೀಡಿದ್ದ ವಿಶೇಷ ನ್ಯಾಯಾಲಯ, ಇಂದು ಬೆಳಗ್ಗೆ ಶಿಕ್ಷೆ ಪ್ರಮಾಣ ನಿಗದಿಪಡಿಸುವ ಕುರಿತು ಪ್ರಾಸಿಕ್ಯೂಷನ್ ಹಾಗೂ ಪ್ರಜ್ವಲ್ ಪರ ವಕೀಲರ ವಾದ-ಪ್ರತಿವಾದ ಆಲಿಸಿ, ಮಧ್ಯಾಹ್ನಕ್ಕೆ ಆದೇಶ ಕಾಯ್ದಿರಿಸಿತ್ತು.
ಮಧ್ಯಾಹ್ನ ನ್ಯಾಯಾಧೀಶರ ಕೊಠಡಿಯಲ್ಲಿ ಆದೇಶ ಬರೆಸುವ ಪ್ರಕ್ರಿಯೆ ನಡೆಯುತ್ತಿದ್ದರೆ, ಇತ್ತ ಪ್ರಜ್ವಲ್ ರೇವಣ್ಣ ಅವರಿಗೆ ಯಾವ ಶಿಕ್ಷೆಯಾಗಲಿದೆ ಎಂಬ ಕುತೂಹಲದಿಂದ ಕೋರ್ಟ್ ಹಾಲ್‌ನಲ್ಲಿ ವಕೀಲರು ಕಿಕ್ಕಿರಿದು ಸೇರಿದ್ದರು.
ಸಂಜೆ 4 ಗಂಟೆ ಸುಮಾರಿಗೆ ನ್ಯಾಯಾಧೀಶರು ಕೋರ್ಟ್ ಹಾಲ್ ಪ್ರವೇಶಿಸಿದರು. ನ್ಯಾಯಾಲಯದಲ್ಲಿ ಹಾಜರಿದ್ದ ಪ್ರಜ್ವಲ್ ರೇವಣ್ಣ ಕೈ ಜೋಡಿಸಿ ನಿಂತಿದ್ದರು. ತೆರೆದ ನ್ಯಾಯಾಲಯದಲ್ಲಿ ನೂರಾರು ಪುಟಗಳ ಆದೇಶದ ಪ್ರತಿಗೆ ಸಹಿ ಹಾಕಿದ ನ್ಯಾಯಾಧೀಶರು ಬಳಿಕ ಆದೇಶದ ಸಾರಾಂಶ ಓದಿದರು. ವಿಸ್ತೃತ ಆದೇಶ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಹಿನ್ನೆಲೆ:
ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಲೈಂಗಿಕ ಹಗರಣದ ಪೆನ್ ಡ್ರೈವ್‌ಗಳು ಭಾರಿ ಸದ್ದು ಮಾಡಿದ್ದವು.
ಮೈಸೂರಿನ ಕೆ.ಆರ್. ನಗರದ ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಸೈಬರ್ ಅಪರಾಧ ಠಾಣೆಯಲ್ಲಿ ಪ್ರಜ್ವಲ್ ವಿರುದ್ಧ ಐಪಿಸಿ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಲಾಗಿತ್ತು. ಈ ಸಂಬಂಧ ಎಸ್ಐಟಿ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಸಂಗ್ರಹಿಸಿ, ಸುಮಾರು 2 ಸಾವಿರ ಪುಟಗಳ ಆರೋಪ ಪಟ್ಟಿಯನ್ನು ಕಳೆದ ವರ್ಷಾಂತ್ಯದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡಿದ ಬಳಿಕ ವಿದೇಶಕ್ಕೆ ತೆರಳಿದ್ದ ಪ್ರಜ್ವಲ್ ರೇವಣ್ಣ ಅವರನ್ನು ಭಾರತಕ್ಕೆ ಹಿಂದಿರುಗುತ್ತಿದ್ದಂತೆ 2024ರ ಮೇ 31ರಂದು ಎಸ್‌ಐಟಿ ಅಧಿಕಾರಿಗಳು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಾಡಿ ವಾರಂಟ್ ಮೇಲೆ ವಶಕ್ಕೆ ಪಡೆದಿದ್ದರು. ಬಳಿಕ ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿತ್ತು.
ಪ್ರಕರಣ ತನಿಖೆ ನಡೆಸಿದ್ದ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಸಂಗ್ರಹಿಸಿ, ಅಂದಾಜು 2 ಸಾವಿರ ಪುಟಗಳ ಆರೋಪ ಪಟ್ಟಿಯನ್ನು ಕಳೆದ ವರ್ಷಾಂತ್ಯದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಪ್ರಜ್ವಲ್ ಮೊದಲ ಬಾರಿಗೆ ಸಂತ್ರಸ್ತೆಯ ಮೇಲೆ ಹಾಸನದ ಗನ್ನಿಗಡ ತೋಟದ ಮನೆ, ಆನಂತರ ಬೆಂಗಳೂರಿನ ಬಸವನಗುಡಿಯಲ್ಲಿರುವ ರೇವಣ್ಣ ಅವರ ನಿವಾಸದಲ್ಲಿ ಬಲವಂತವಾಗಿ ಅತ್ಯಾಚಾರ ಎಸಗಿ, ಆ ಕೃತ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು ಎಂದು ಚಾರ್ಜ್‌ಶೀಟ್‌ನಲ್ಲಿ ಆರೋಪಿಸಲಾಗಿತ್ತು.
2025ರ ಏಪ್ರಿಲ್ 3ರಂದು ಪ್ರಜ್ವಲ್ ವಿರುದ್ಧ ಆರೋಪ ನಿಗದಿ ಮಾಡಿದ್ದ ನ್ಯಾಯಾಲಯ ಆನಂತರ ಮೇ 5ರಂದು ವಿಚಾರಣೆ ಆರಂಭಿಸಿತ್ತು. ಅಂದಿನಿಂದ ಜೂನ್ 28ರವರೆಗೆ ಒಟ್ಟು 22 ದಿನ ವಿಚಾರಣೆ ನಡೆಸಿದ್ದ ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು. ಆನಂತರ ಕೆಲವು ತಾಂತ್ರಿಕ ಸಾಕ್ಷಿಗಳ ಕುರಿತು ಸ್ಪಷ್ಟನೆ ಕೋರಿ ತೀರ್ಪು ಪ್ರಕಟಣೆಯನ್ನು ಶುಕ್ರವಾರಕ್ಕೆ (ಆಗಸ್ಟ್ 1) ಮುಂದೂಡಿತ್ತು.
ಪ್ರಜ್ವಲ್ ವಿರುದ್ದ ಒಟ್ಟು ನಾಲ್ಕು ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ಒಂದು ಪ್ರಕರಣದಲ್ಲಿ ಇಂದು ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಎಲ್ಲ ನಾಲ್ಕೂ ಪ್ರಕರಣಗಳಲ್ಲಿ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿಗಳು ವಿಚಾರಣಾ ನ್ಯಾಯಾಲಯ, ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್‌ಗಳಲ್ಲಿ ವಜಾಗೊಂಡಿವೆ. ಈ ಮಧ್ಯೆ, ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿಯು ವಿಚಾರಣಾ ನ್ಯಾಯಾಲಯದಲ್ಲಿ ಬಾಕಿ ಇದೆ.