ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಆಯೋಜನೆಗೆ ಸರಕಾರ ಅನುಮತಿ
PC : PTI
ಬೆಂಗಳೂರು : ಕಾಲ್ತುಳಿತ ದುರಂತದ ಹಿನ್ನೆಲೆಯಲ್ಲಿ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಥಗಿತಗೊಂಡಿದ್ದ ಅಂತರರಾಷ್ಟ್ರೀಯ ಕ್ರಿಕೆಟ್ ಮತ್ತು ಐಪಿಎಲ್ ಪಂದ್ಯಗಳನ್ನು ಪುನಃ ಆಯೋಜಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆಎಸ್‌ಸಿಎ), ರಾಜ್ಯ ಗೃಹ ಇಲಾಖೆ ಅಧಿಕೃತವಾಗಿ ಅನುಮತಿ ನೀಡಿದೆ.
ನ್ಯಾಯಮೂರ್ತಿ ಮೈಕಲ್ ಡಿ.ಕುನ್ಹಾ ಅವರ ವರದಿಯಲ್ಲಿನ ಅಂಶಗಳನ್ನು ಜಾರಿಗೊಳಿಸಿ ಪಂದ್ಯಗಳನ್ನು ನಡೆಸಲು ಒಪ್ಪಿಗೆ ನೀಡಲಾಗಿದೆ. ಸರಕಾರ, ಸಂಬಂಧಿತ ಅಧಿಕಾರಿಗಳು ನಿಗದಿಪಡಿಸಿರುವ ನಿರ್ದಿಷ್ಟ ಷರತ್ತುಗಳು, ನಿಯಮಗಳನ್ನು ಪಾಲಿಸುವ ಷರತ್ತಿನೊಂದಿಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜಿಸಲು ಅನುಮತಿ ನೀಡಲಾಗಿದೆ.
ಶನಿವಾರ ಈ ಕುರಿತು ಪ್ರಕಟನೆ ಹೊರಡಿಸಿರುವ ಕೆಎಸ್‌ಸಿಎ ವಕ್ತಾರ ವಿನಯ್ ಮೃತ್ಯುಂಜಯ, "ಸರಕಾರದ ಗೃಹ ಇಲಾಖೆಯು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ನಡೆಸಲು ಅನುಮತಿ ನೀಡಿರುವುದು ನಮಗೆ ಸಂತೋಷ ತಂದಿದೆ" ಎಂದು ತಿಳಿಸಿದ್ದಾರೆ.
ಸರಕಾರ ನೇಮಿಸಿದ್ದ ಕಾರ್ಯಪಡೆಯು ಕ್ರೀಡಾಂಗಣದ ಭದ್ರತಾ ಕ್ರಮಗಳನ್ನು ಪರಿಶೀಲಿಸಿ ವರದಿ ನೀಡಿದ ನಂತರ ಈ ಅನುಮತಿ ದೊರೆತಿದೆ.
2025ರಲ್ಲಿ ಜೂನ್ 4 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು 18 ವರ್ಷಗಳ ನಂತರ ಐಪಿಎಲ್ ಟ್ರೋಫಿ ಗೆದ್ದಿತ್ತು. ಈ ವೇಳೆ ನಡೆದ ವಿಜಯೋತ್ಸವದ ಮೆರವಣಿಗೆಯಲ್ಲಿ ಉಂಟಾದ ನೂಕುನುಗ್ಗಲು ಮತ್ತು ಕಾಲ್ತುಳಿತದಿಂದಾಗಿ 11 ಮಂದಿ ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದರು. ಈ ಘಟನೆಯ ನಂತರ ಭದ್ರತಾ ಕಾರಣಗಳಿಗಾಗಿ ಕ್ರೀಡಾಂಗಣದಲ್ಲಿ ಯಾವುದೇ ಪ್ರಮುಖ ಪಂದ್ಯಗಳನ್ನು ಆಯೋಜಿಸಲು ಪೊಲೀಸರು ಅನುಮತಿ ನಿರಾಕರಿಸಿದ್ದರು. ಈ ನಿಷೇಧದಿಂದಾಗಿ ವಿಜಯ್ ಹಜಾರೆ ಟ್ರೋಫಿಯ ಫೈನಲ್ ಸೇರಿದಂತೆ ಹಲವು ಪಂದ್ಯಗಳನ್ನು ದೇವನಹಳ್ಳಿಯ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ಗೆ ಸ್ಥಳಾಂತರಿಸಲಾಗಿತ್ತು. ಅಷ್ಟೇ ಅಲ್ಲದೆ, ಮಹಿಳಾ ವಿಶ್ವಕಪ್ ಮತ್ತು ಮುಂಬರುವ ಪುರುಷರ ಟಿ20 ವಿಶ್ವಕಪ್ ಪಂದ್ಯಗಳ ಆತಿಥ್ಯವನ್ನೂ ಬೆಂಗಳೂರು ಕಳೆದುಕೊಂಡಿತ್ತು.