×
Ad

ಉದಯಗಿರಿ ಕಲ್ಲು ತೂರಾಟ ಪ್ರಕರಣ | ದಾಂಧಲೆ ಎಬ್ಬಿಸಿದವರ ಬಂಧಿಸಿ ಕಾನೂನು ಕ್ರಮ : ಜಿ.ಪರಮೇಶ್ವರ್‌

Update: 2025-02-11 15:09 IST

ಬೆಂಗಳೂರು : ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿ ದಾಂಧಲೆ ಎಬ್ಬಿಸಿದವರನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಅವರು ಹೇಳಿದರು‌.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಷಿಯಲ್ ಮಿಡೀಯಾದಲ್ಲಿ ಪೋಸ್ಟ್ ಮಾಡಿದ್ದು ಒಂದು ಸಮುದಾಯವನ್ನು ಕೆರಳಿಸಿದೆ.‌ ಪೋಸ್ಟ್ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು‌. ಆತನನ್ನು ವಶಕ್ಕೆ ನೀಡುವಂತೆ ಇನ್ನೂರು ಜನ ಠಾಣೆ ಬಳಿ ಬಂದು ಗಲಾಟೆ ಮಾಡಿ, ಕಲ್ಲು ತೂರಿದ್ದಾರೆ. ಆಗ ಪೊಲೀಸರು ಅಶ್ರುವಾಯು ಸಿಡಿಸಿ, ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ಕಲ್ಲು ತೂರಾಟ ನಡೆಸಿ ದಾಂಧಲೆ ಎಬ್ಬಿಸಿದವರನ್ನು ಬಂಧಿಸಿ, ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದೇನೆ‌ ಎಂದರು.

ಈ ಘಟನೆಯಲ್ಲಿ ಯಾರದ್ದು ತಪ್ಪು, ಯಾರದ್ದು ಸರಿ ಎಂಬುದನ್ನು ನಾವು ನಿರ್ಧಾರ‌ ಮಾಡಲು ಆಗುವುದಿಲ್ಲ. ಪೊಲೀಸರು ಕಾನೂನು ಪ್ರಕಾರ ಮಾಡಿರುತ್ತಾರೆ. ತಪ್ಪು ಮಾಡಿದ್ದರೆ ಪೊಲೀಸರ ಮೇಲೂ ಕ್ರಮ ತೆಗೆದುಕೊಳ್ಳುತ್ತೇವೆ. ಅನೇಕ ಸಂದರ್ಭಗಳಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್, ಪಿಎಸ್ಐ‌ಗಳನ್ನು ಅಮಾನತು ಮಾಡಲಾಗಿದೆ. ಪೊಲೀಸರ‌ ಮೇಲೂ ಕ್ರಮ ಜರುಗಿಸಲಾಗಿದೆ‌. ಈಗಾಗಲೇ ಕಾನೂನು ಸುವ್ಯವಸ್ಥೆ ಎಡಿಜಿಪಿ ಸ್ಥಳಕ್ಕೆ ಹೋಗಿದ್ದಾರೆ ಎಂದು ಹೇಳಿದರು‌.

ಭದ್ರಾವತಿ ಶಾಸಕ ಸಂಗಮೇಶ್ ಅವರ ಪುತ್ರ ಮಹಿಳಾ ಅಧಿಕಾರಿಯೊಬ್ಬರಿಗೆ ಅವಾಚ್ಯವಾಗಿ ನಿಂದಿಸಿರುವ ಕುರಿತು ಪ್ರತಿಕ್ರಿಯಿಸಿ, ಅವಹೇಳನಕಾರಿಯಾಗಿ ಮಾತಾಡಿದ್ದಾರೆ ಎಂಬುದು ಗೊತ್ತಿದೆ. ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿದ್ದರೆ ಕ್ರಮ ತೆಗೆದುಕೊಳ್ಳುತ್ತಾರೆ. ಈ ಬಗ್ಗೆ ಸ್ಥಳೀಯ ಪೊಲೀಸರು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತಾರೆ. ಎಲ್ಲದಕ್ಕೂ ಸರ್ಕಾರ ಸೂಚನೆಗಳನ್ನು ನೀಡುವುದಿಲ್ಲ ಎಂದು ತಿಳಿಸಿದರು

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News