×
Ad

ಡ್ರಗ್ಸ್ ಚಟುವಟಿಕೆ ಮಟ್ಟಹಾಕಲು ಮತ್ತಷ್ಟು ಕಠಿಣ ಕ್ರಮ : ಜಿ.ಪರಮೇಶ್ವರ್‌

Update: 2025-06-26 16:24 IST

ಬೆಂಗಳೂರು : ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯವಿದ್ದು, ಮಾದಕ ವ್ಯಸನಕ್ಕೆ ಸಿಲುಕಿ ಜೀವನ ಹಾಳು ಮಾಡಿಕೊಳ್ಳಬೇಡಿ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಅವರು ಹೇಳಿದರು.

ಬೆಂಗಳೂರು ನಗರ ಪೊಲೀಸ್ ವತಿಯಿಂದ‌ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 'ಅಂತಾರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳ ಸಾಗಾಣಿಕೆ ವಿರೋಧಿ ದಿನ'ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಳೆದ ಒಂದು ವರ್ಷದಲ್ಲಿ ನಾಲ್ಕು ಸಾವಿರ ಕೆ.ಜಿ. ಗಾಂಜಾ ಸೇರಿದಂತೆ 45 ಕೋಟಿ ರೂ. ಮೌಲ್ಯದ ವಿವಿಧ ಬಗೆಯ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿದೇಶಿ ವಿದ್ಯಾರ್ಥಿಗಳು ಡ್ರಗ್ಸ್ ದಂಧೆಯಲ್ಲಿ ತೊಡಗುತ್ತಿದ್ದು, 200ಕ್ಕು ಹೆಚ್ಚು ವಿದೇಶಿಗರನ್ನು ಗಡಿಪಾರು ಮಾಡಲಾಗಿದೆ ಎಂದರು.

ವಿಶ್ವದಲ್ಲಿ ಮಾದಕ ವಸ್ತುಗಳು ಮತ್ತು ಮಾನವ ಕಳ್ಳ ಸಾಗಾಣಿಕೆ ವಿರುದ್ಧ ಆಂದೋಲನ ಮಾಡಲಾಗುತ್ತಿದೆ. ಡ್ರಗ್ಸ್‌ನಿಂದಾಗುವ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಮನುಷ್ಯನಿಗೆ ಆಗುವ ದೈಹಿಕ ಮತ್ತು ಮಾನಸಿಕ ದುಷ್ಪರಿಣಾಮಗಳನ್ನು ಅರ್ಥ ಮಾಡಿಕೊಳ್ಳಬೇಕು‌ ಎಂದು ಹೇಳಿದರು

ಡ್ರಗ್ಸ್ ದಂಧೆಯನ್ನು ಮಟ್ಟ ಹಾಕಲು ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಬರೀ ಕಾನೂನಿಂದ ಮಾತ್ರ ನಿಲ್ಲಿಸಲು ಸಾಧ್ಯವಿಲ್ಲ. ಯುವಕರ ಮನಸ್ಸನ್ನು ಜಾಗೃತ ಮಾಡಲು ಕಾರ್ಯಕ್ರಮಗಳನ್ನು ರೂಪಿಸಿ, ಅವರ ಮನಸ್ಸಿಗೆ ನಾಟುವ ರೀತಿಯಲ್ಲಿ ತಿಳಿಹೇಳಲಾಗುತ್ತಿದೆ. ಆನಂತರವೂ ಮುಂದುವರಿದರೆ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದು ಎಂದರು.

ಕೆಲವು ರಾಜ್ಯಗಳಲ್ಲಿ ಡ್ರಗ್ ಪೆಡ್ಲರ್‌ಗಳ ಆಸ್ತಿ ಮುಟ್ಟುಗೋಲು, ಗೂಂಡಾ ಕಾಯ್ದೆ ಹಾಕುವ ಮೂಲಕ ಕ್ರಮ ಜರುಗಿಸಲಾಗುತ್ತಿದೆ. ಕಳೆದ ಅಧಿವೇಶನದಲ್ಲಿ ಮಾದಕವ್ಯಸನ ಮುಕ್ತ ಕರ್ನಾಟಕ ಮಾಡುವುದಾಗಿ ಮುಖ್ಯಂಮತ್ರಿಗಳು ಘೋಷಿಸಿದ್ದಾರೆ. ಪಂಜಾಬ್‌ನಲ್ಲಿ ಡ್ರಗ್ಸ್ ಪರಿಣಾಮದಿಂದ ಉಡ್ತಾ ಪಂಜಾಬ್ ಎಂದು ಕರೆಯುತ್ತಿದ್ದರು. ಇದಕ್ಕೆ ರಾಜ್ಯದಲ್ಲಿ ಆಸ್ಪದ ನೀಡುವುದಿಲ್ಲ. ಡ್ರಗ್ಸ್ ಚಟುವಟಿಕೆಯನ್ನು ಮಟ್ಟಹಾಕಲು ಮತ್ತಷ್ಟು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಕರ್ನಾಟಕದಲ್ಲಿ 6.50 ಲಕ್ಷ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಗಿದೆ. ಪ್ರತಿ ತಿಂಗಳು ಆಯಾ ಠಾಣೆಯ ಪೊಲೀಸರು ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ, ಏನಾಗುತ್ತಿದೆ ಎಂಬುದರ ಕುರಿತು ಮಾಹಿತಿ ಪಡೆಯಬೇಕು. ಪ್ರತಿ ಕಾಲೇಜಿನಲ್ಲಿ ಆ್ಯಂಟಿ ಡ್ರಗ್ ಸಮಿತಿ ರಚಿಸುವಂತೆ ಸೂಚಿಸಲಾಗಿದೆ ಎಂದರು.

ಬೆಂಗಳೂರು ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿರುವ 45 ಕೋಟಿ ರೂ. ಮೌಲ್ಯದ ವಿವಿಧ ರೀತಿಯ ಮಾದಕ ದ್ರವ್ಯಗಳನ್ನು ನಾಶಪಡಿಸಲು ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಆನ್‌ಲೈನ್ ಮೂಲಕ ಚಾಲನೆ ನೀಡಿದರು‌.

ಡ್ರಗ್ಸ್ ಬಳಕೆಯಿಂದ ಆಗುವ ದುಷ್ಪರಿಣಾಮದ ಕುರಿತು ಬೆಂಗಳೂರು ನಗರ ಪೊಲೀಸರೊಂದಿಗೆ ಜೊತೆಗೂಡಿ ಸಾಮಾಜಿಕ ಜಾಗೃತಿ ಮೂಡಿಸಿದ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕರಾದ ರಿಜ್ವಾನ್ ಅರ್ಷದ್, ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ.ಎಂ.ಎ.ಸಲೀಂ, ಸೈಬರ್ ಅಪರಾಧಗಳು ಮತ್ತು ಮಾದಕ ವಸ್ತು ವಿಭಾಗದ ಪೊಲೀಸ್ ಮಹಾನಿರ್ದೇಶಕರಾದ ಡಾ.ಪ್ರಣವ್ ಮಹಾಂತಿ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್  ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News