×
Ad

ಸಾಹಿತಿ, ವಿಮರ್ಶಕ ಜಿ.ಎಸ್.ಸಿದ್ದಲಿಂಗಯ್ಯ ನಿಧನ

Update: 2025-05-07 12:34 IST

ಬೆಂಗಳೂರು : ಕನ್ನಡದ ಸಾಹಿತಿ ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ (94) ವಯೋಸಹಜ ಅನಾರೋಗ್ಯದಿಂದಾಗಿ ಮಂಗಳವಾರ ತಡರಾತ್ರಿ ಇಲ್ಲಿನ ವಿಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಸಿದ್ದಲಿಂಗಯ್ಯ ಅವರು ತುಮಕೂರು ಜಿಲ್ಲೆ ಬೆಳ್ಳಾವಿಯಲ್ಲಿ 1931ರ ಫೆ.20ರಂದು ಜನಿಸಿದರು. ಮೈಸೂರು ಮಹಾರಾಜ ಕಾಲೇಜಿನಲ್ಲಿ ಬಿಎ ಆನರ್ಸ್ (ಕನ್ನಡ)ನಲ್ಲಿ ಪ್ರಥಮ ರ್ಯಾಂಕ್ ಪಡೆದು ಉತ್ತೀರ್ಣರಾದರು.

ಮೈಸೂರು ವಿವಿಯಲ್ಲಿ ಎಂಎ(ಕನ್ನಡ) ಸ್ನಾತಕ ಪದವಿಯನ್ನೂ ಪ್ರಥಮ ದರ್ಜೆಯಲ್ಲಿ ಪಾಸ್‌ ಮಾಡಿದ ಅವರು, ನಂತರ ದಾವಣಗೆರೆ, ತುಮಕೂರು, ಶಿವಮೊಗ್ಗದಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಇಲ್ಲಿನ ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಉಪ ಪ್ರಾಧ್ಯಾಪಕರಾಗಿ, ಚಿತ್ರದುರ್ಗದ ಸರಕಾರಿ ಕಲಾ ಕಾಲೇಜಿನಲ್ಲಿ ಪ್ರಾಚಾರ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಅವರು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. 1989ರ ಫೆ.28ರಂದು ಕಾಲೇಜು ಶಿಕ್ಷಣ ನಿರ್ದೇಶಕರಾಗಿ ನಿವೃತ್ತರಾದರು.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಕ್ರೀಯಾಶೀಲವಾಗಿ ಸೇವೆ ಸಲ್ಲಿಸಿದ್ದ ಜಿ.ಎಸ್.ಸಿದ್ದಲಿಂಗಯ್ಯ ಅವರು, ಕುವೆಂಪು ಅವರ ನೆಚ್ಚಿನ ಶಿಷ್ಯರಲ್ಲಿ ಒಬ್ಬರಾಗಿದ್ದರು.

ಸಾಹಿತ್ಯ ಕ್ಷೇತ್ರದ ಅವರ ಕೊಡುಗೆಗಳನ್ನು ಗಮನಿಸಿ ಅವರಿಗೆ ಸಾಹಿತ್ಯ ಅಕಾಡೆಮಿಯ ವಿಶೇಷ ಗೌರವ, ರಾಜ್ಯೋತ್ಸವ ಪ್ರಶಸ್ತಿ, ಬಸವ ಪ್ರಸಸ್ತಿ, ಮಾಸ್ತಿ ಪ್ರಶಸ್ತಿ ಸೇರಿ ಹಲವು ಪುರಸ್ಕಾರಗಳು ಸಿಕ್ಕಿದ್ದವು.

ಸಿಎಂ ಸಂತಾಪ :

"ಕನ್ನಡದ ಸಾಹಿತಿ, ಕವಿ ಹಾಗೂ ವಿಮರ್ಶಕರಾಗಿದ್ದ ಪ್ರೊ.ಜಿ.ಎಸ್. ಸಿದ್ದಲಿಂಗಯ್ಯನವರ ನಿಧನದಿಂದ ದುಃಖಿತನಾಗಿದ್ದೇನೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಕನ್ನಡದ ಸೊಗಡನ್ನು ವಿಶ್ವವ್ಯಾಪಿಯಾಗಿಸಲು ಅವಿರತ ದುಡಿದ ಸಿದ್ದಲಿಂಗಯ್ಯ ಅವರ ನಿಧನ ಸಾರಸ್ವತ ಲೋಕಕ್ಕೆ ಮಾತ್ರವಲ್ಲ ನಾಡಿಗೂ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ದೊರಕಲೆಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು"

ಸಿದ್ದರಾಮಯ್ಯ, ಮುಖ್ಯಮಂತ್ರಿ

"ಹಿರಿಯ ವಿದ್ವಾಂಸರು, ಕವಿ, ವಿಮರ್ಶಕರು, ಅನುವಾದಕರು, ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷರಾಗಿದ್ದ ಪ್ರೊ. ಜಿ.ಎಸ್. ಸಿದ್ದಲಿಂಗಯ್ಯ ಅವರು ವಿಧಿವಶರಾದ ಸುದ್ದಿ ದುಃಖ ತಂದಿದೆ. ಕುವೆಂಪುರವರ ಪ್ರಿಯ ಶಿಷ್ಯರಲ್ಲೊಬ್ಬರಾಗಿದ್ದ ಜಿ.ಎಸ್.ಎಸ್., ಕಾವ್ಯ, ಮಿಮರ್ಷೆ, ಅನುವಾದ ಹೀಗೆ ಅನೇಕ ಕ್ಷೇತ್ರಗಳಲ್ಲಿ ಅಪಾರವಾದ ಕೊಡುಗೆಗಳನ್ನು ನೀಡಿದ್ದಾರೆ.‌ ಇಂದು ಕನ್ನಡ ಸಾಹಿತ್ಯ ಲೋಕದ ಕೊಂಡಿಯೊಂದು ಕಳಚಿದೆ. ಮೃತರ ಆತ್ಮಕ್ಕೆ ಸದ್ಗತಿ ದೊರೆಯಲಿ, ಅವರ ಕುಟುಂಬ ವರ್ಗದವರು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತನು ನೀಡಲಿ 

ಡಿ.ಕೆ.ಶಿವಕಮಾರ್‌, ಉಪಮುಖ್ಯಮಂತ್ರಿ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News