×
Ad

ಎಸ್‌ಸಿ ಒಳಮೀಸಲಾತಿ ವರ್ಗೀಕರಣ ಪ್ರಶ್ನಿಸಿದ ಅರ್ಜಿ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

Update: 2026-06-23 21:27 IST

Photo credit: PTI

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹಂಚಿಕೆ ಹಾಗೂ ವರ್ಗೀಕರಣ ಮಾಡಿ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್‌ ಜಾರಿಗೊಳಿಸಿದೆ‌.

ರಾಜ್ಯ ಸರ್ಕಾರ 2026 ಮೇ 8ರಂದು ಹೊರಡಿಸಿರುವ ಆದೇಶ ಪ್ರಶ್ನಿಸಿ ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಒಕ್ಕೂಟ ಹಾಗೂ ಇತರರು ಸಲ್ಲಿಸಿರುವ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿ, ಅರ್ಜಿ ವಿಚಾರಣೆ ಮುಂದೂಡಿತು.

ಪ್ರಕರಣವೇನು?

ಸುಪ್ರೀಂಕೋರ್ಟ್‌ನ ಸಾಂವಿಧಾನಿಕ ನ್ಯಾಯಪೀಠವು ಎಸ್‌ಸಿ ಒಳಮೀಸಲಾತಿ ವರ್ಗೀಕರಣಕ್ಕೆ ಅನುಮತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್‌ಸಿ ಸಮುದಾಯಗಳನ್ನು ಮೂರು ಪ್ರತ್ಯೇಕ ಗುಂಪುಗಳಾಗಿ (ಕೆಟಗರಿ ಎ.ಬಿ.ಸಿ) ವಿಂಗಡಿಸಿ ಆದೇಶ ಹೊರಡಿಸಿತ್ತು.

ಇತ್ತೀಚಿನ ಹೊಸ ಆದೇಶದ ಪ್ರಕಾರ, ಶೇ.15 ಮೀಸಲಾತಿಯಲ್ಲಿ 'ಸಿ' ಪ್ರವರ್ಗಕ್ಕೆ ಶೇ. 4.5 ರಷ್ಟು ಕೋಟಾ ನಿಗದಿಪಡಿಸಲಾಗಿದ್ದು, ಅದರಲ್ಲಿ 59 ಅಲೆಮಾರಿ ಮತ್ತು ಸೂಕ್ಷ್ಮ ಸಮುದಾಯಗಳಿಗೆ ಕೇವಲ ಶೇ. 20 ಆಂತರಿಕ ಮೀಸಲಾತಿ ನೀಡಲಾಗಿದೆ. ಅಲ್ಲದೇ ಒಟ್ಟಾರೆ ಮೀಸಲಾತಿಯನ್ನು ಶೇ.50ಕ್ಕೆ ಮಿತಿಗೊಳಿಸಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಒಳ ಮೀಸಲಾತಿಗೆ ಸಂಬಂಧಿಸಿದಂತೆ ರಚನೆಯಾಗಿದ್ದ ನ್ಯಾಯಮೂರ್ತಿ ಎಚ್‌. ಎನ್. ನಾಗಮೋಹನ ದಾಸ್ ಆಯೋಗದ ಶಿಫಾರಸುಗಳನ್ನು ಬದಿಗಿಟ್ಟು, ಅವೈಜ್ಞಾನಿಕವಾಗಿ ವರ್ಗೀಕರಣ ಮಾಡಲಾಗಿದೆ. ಆದ್ದರಿಂದ, ಸರ್ಕಾರದ ಆದೇಶ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News