ಎಲ್ಲ ಚುನಾವಣೆಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ: ಎಚ್.ಡಿ.ದೇವೇಗೌಡ ಘೋಷಣೆ
"ಮೋದಿ ಅವರೊಂದಿಗಿನ ಒಡನಾಟದಲ್ಲಿ ಯಾವುದೇ ಬದಲಾವಣೆ ಇಲ್ಲ"
ಎಚ್.ಡಿ. ದೇವೇಗೌಡ (File Photo)
ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬಗ್ಗೆ ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ. ಎಲ್ಲ ಹಂತದ ಚುನಾವಣೆಗಳಲ್ಲೂ ಉಭಯ ಪಕ್ಷಗಳ ಮೈತ್ರಿ ಮುಂದುವರೆಯುತ್ತದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಘೋಷಿಸಿದ್ದಾರೆ.
ಶುಕ್ರವಾರ ಬೆಂಗಳೂರಿನ ಜೆಡಿಎಸ್ ಕಚೇರಿ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಐದು ಮಹಾನಗರ ಪಾಲಿಕೆ ಸೇರಿದಂತೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಮುಂದಿನ ವಿಧಾನಸಭೆ ಚುನಾವಣೆಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರೆಯುತ್ತದೆ ಎಂದು ಸಷ್ಪಪಡಿಸಿದರು.
ಪ್ರಧಾನಮಂತ್ರಿ ಮೋದಿ ಅವರೊಂದಿಗಿನ ಒಡನಾಟದಲ್ಲಿ ಯಾವುದೇ ಬದಲಾವಣೆ ಇಲ್ಲ. ನನ್ನ ಬಗ್ಗೆ ಪ್ರಧಾನಿಯವರು ಒಂದೇ ಒಂದು ಮಾತನ್ನೂ ಲಘುವಾಗಿ ಆಡಿಲ್ಲ. ಎರಡೂ ಪಕ್ಷಗಳ ನಡುವಿನ ಸಂಬಂಧ ಚೆನ್ನಾಗಿದೆ ಎಂದು ದೇವೇಗೌಡ ಸ್ಪಷ್ಟಪಡಿಸಿದರು.
ಬಿಡದಿ ಟೌನ್‍ಶಿಪ್ ವಿರೋಧಿಸಿ ರೈತರು ಪ್ರತಿಭಟನೆ ಮಾಡುತ್ತಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ದೇವೇಗೌಡರು, ಈ ವಿಚಾರದಲ್ಲಿ ಯಾರ ಹೆಸರನ್ನೂ ಪ್ರಸ್ತಾಪಿಸುವುದಿಲ್ಲ. ನಮ್ಮದು ಸಣ್ಣ ರಾಜಕೀಯ ಪಕ್ಷವಾಗಿದ್ದು, ಅದನ್ನು ಉಳಿಸಿ-ಬೆಳೆಸಲು ಶಕ್ತಿಮೀರಿ ಕೆಲಸ ಮಾಡುತ್ತೇವೆ. ಚುನಾವಣೆ ಬಂದಾಗ ಜನರು ತೀರ್ಪು ನೀಡುತ್ತಾರೆ. ಅಲ್ಲಿಯವರೆಗೂ ಕಾಯಲೇಬೇಕು ಎಂದು ಮಾರ್ಮಿಕವಾಗಿ ನುಡಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದಾಗಿ ರಾಜ್ಯ ಸರಕಾರದ ಹಣಕಾಸಿನ ಪರಿಸ್ಥಿತಿ ಹದಗೆಟ್ಟಿದೆ ಎಂದು ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ. ಅವರಲ್ಲೇ ಗೊಂದಲವಿದೆ. ಇಂತಹ ಪರಿಸ್ಥಿತಿ ಉಂಟಾದಾಗ ರಾಜ್ಯ ಸರಕಾರ ಶಕ್ತಿ ಮೀರಿ ಜನರಿಗೆ ಸಹಾಯ ಮಾಡುವ ಜವಾಬ್ದಾರಿ ಇದೆ ಎಂದು ದೇವೇಗೌಡರು ಹೇಳಿದರು.
ಜೆಡಿಎಸ್ ಪಕ್ಷ ಸಂಘಟನೆಗೆ ನಾನು ಶ್ರಮ ಹಾಕುತ್ತೇನೆ. ಹಿಂದಿನಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಸಕ್ರಿಯವಾಗಿ ಕೆಲಸ ಮಾಡಲಿದ್ದಾರೆ. ಅವರ ಆರೋಗ್ಯ ಉತ್ತಮವಾಗಿದೆ. ನಿಖಿಲ್ ಕುಮಾರಸ್ವಾಮಿ ಅವರು ಪಕ್ಷ ಸಂಘಟನೆಯನ್ನು ಮಾಡುತ್ತಿದ್ದಾರೆ. ಮೂರು ಸಲ ಅವರು ಚುನಾವಣೆಯಲ್ಲಿ ಸೋತರೂ ಮನೆಯಲ್ಲಿ ಕೂರದೆ 60 ರಿಂದ 65 ಕ್ಷೇತ್ರಗಳಲ್ಲಿ ಸಂಘಟನೆ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ದೇವೇಗೌಡರು ಮೆಚ್ಚುಗೆ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಪರಿಷತ್ ಸದಸ್ಯ ಟಿ.ಎನ್.ಜವರಾಯಿಗೌಡ, ಮಾಜಿ ಸಚಿವೆ ಲೀಲಾದೇವಿ ಆರ್. ಪ್ರಸಾದ್, ಮಾಜಿ ಶಾಸಕ ಎಚ್.ನಿಂಗಪ್ಪ, ನಗರ ಜೆಡಿಎಸ್ ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್‍ಗೌಡ, ಮಾಜಿ ಸದಸ್ಯರಾದ ಕೆ.ಎನ್.ತಿಪ್ಪೇಸ್ವಾಮಿ, ಕೆ.ಟಿ.ಶ್ರೀಕಂಠೇಗೌಡ, ಚೌಡರೆಡ್ಡಿ ತೂಪಲ್ಲಿ ಮತ್ತಿತರರಿದ್ದರು.
ಅ.12ಕ್ಕೆ ಮಹಿಳಾ ಸಮಾವೇಶ:
ನಿಖಿಲ್ ಕುಮಾರಸ್ವಾಮಿ ರಾಜ್ಯ ವ್ಯಾಪಿ ನಡೆಸುತ್ತಿರುವ ಸದಸ್ಯ ಅಭಿಯಾನ ಮತ್ತು ಸಂಘಟನಾ ಪ್ರವಾಸ ಯಶಸ್ವಿಯಾಗಿದೆ. ಅಲ್ಲದೆ, ಬೆಂಗಳೂರು ನಗರದಲ್ಲಿ ಪಕ್ಷವನ್ನು ಕಟ್ಟುತ್ತೇವೆ. ಈ ನಿಟ್ಟಿನಲ್ಲಿ ಅ.12ರಂದು ಜೆಡಿಎಸ್ ಮಹಿಳಾ ಸಮಾವೇಶವನ್ನು ಆಯೋಜಿಸಲಾಗುವುದು. ಕನಿಷ್ಠ 50 ಸಾವಿರದಿಂದ 60ಸಾವಿರ ಮಹಿಳೆಯರು ಭಾಗವಹಿಸಲಿದ್ದಾರೆ. ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲಾಗುವುದು. ಸಾಧ್ಯವಾದರೆ ಅರಮನೆ ಮೈದಾನದಲ್ಲೇ ಈ ಸಮಾವೇಶ ನಡೆಸಲಾಗುವುದು’
-ಎಚ್.ಡಿ.ದೇವೇಗೌಡ, ಜೆಡಿಎಸ್ ವರಿಷ್ಠ