ಬೆಂಗಳೂರು : ಹಿರಿಯೂರು ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ಒಮ್ಮತದ ಎನ್‍ಡಿಎ ಅಭ್ಯರ್ಥಿಯನ್ನು ಕಣಕ್ಕಿಳಿಸುವ ವಿಚಾರವಾಗಿ ಕೇಂದ್ರದ ಬಿಜೆಪಿ ನಾಯಕರೊಂದಿಗೆ ಚರ್ಚಿಸಲಾಗಿದ್ದು, ಎಲ್ಲರ ಸಮನ್ವಯದಿಂದ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಮಂಗಳವಾರ ನಗರದ ಜೆಡಿಎಸ್ ಪಕ್ಷದ ಕೇಂದ್ರ ಕಚೇರಿ ಜೆ.ಪಿ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಚಿತ್ರದುರ್ಗ, ತುಮಕೂರು ಮತ್ತು ಕೋಲಾರ ಜಿಲ್ಲೆಗಳ ಕೆರೆಗಳಿಗೆ ನೀರು ತುಂಬಿಸುವ ಉದ್ದೇಶದಿಂದ 4,500 ಕೋಟಿ ರೂ.ವೆಚ್ಚದ ಮಹತ್ವದ ಯೋಜನೆಗೆ ಅನುಮೋದನೆ ನೀಡಲಾಗಿತ್ತು. ಆದರೆ, ಪ್ರಸ್ತುತ ಆಡಳಿತ ನಡೆಸುತ್ತಿರುವ ಸರಕಾರವು ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಟೀಕಿಸಿದರು.

ಇತ್ತ ರಾಜ್ಯ ಸರಕಾರದ ಆರ್ಥಿಕ ಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು, ಈಗಾಗಲೇ ಪೂರ್ಣಗೊಂಡಿರುವ ಹಿಂದಿನ ಕಾಮಗಾರಿಗಳಿಗೆ ಗುತ್ತಿಗೆದಾರರಿಗೆ 38 ಸಾವಿರ ಕೋಟಿ ರೂ.ಬಾಕಿ ಪಾವತಿಸಬೇಕಿದೆ. ಇಷ್ಟೊಂ ದು ಮೊತ್ತ ಬಾಕಿ ಉಳಿಸಿಕೊಂಡಿರುವ ಸರಕಾರ, ಯಾವುದೇ ಆರ್ಥಿಕ ಅನುಮೋದನೆ ಮತ್ತು ಬಜೆಟ್ ಮೀಸಲಿಡದೇ ಕೇವಲ ಹೊಸ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಪ್ರಚಾರದ ಕೆಲಸಕ್ಕೆ ಮಾತ್ರ ಸೀಮಿತವಾಗಿದೆ.

ಈ ಸರಕಾರ ಕೇವಲ ಕೆಲಸಗಳೇ ಆಗದಿರುವ ಬೋಗಸ್ ಶಂಕುಸ್ಥಾಪನೆಗಳನ್ನು ಮಾಡುತ್ತಿದೆ. ಯಾವುದೇ ಕಾಮಗಾರಿ ಮುಗಿಯುವುದಿಲ್ಲ. ಆದರೆ, ಶಂಕುಸ್ಥಾಪನೆ ಮಾಡಿ ಪುಕ್ಕಟೆ ಪ್ರಚಾರ ಪಡೆಯುತ್ತಿದೆ. ಹಣ ಇಲ್ಲದೆ ಶಂಕುಸ್ಥಾಪನೆ ಮಾಡಿ ಜನರನ್ನು ಯಾಮಾರಿಸುವ ಕೆಲಸವನ್ನು ಮಾಡುವುದು ಕಾಂಗ್ರೆಸ್ ಪಕ್ಷಕ್ಕೆ ಅಂಟಿಕೊಂಡು ಬಂದಿರುವ ಚಾಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor