ಬೆಂಗಳೂರು : ಉಪ ಚುನಾವಣೆ ನಡೆಯಲಿರುವ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್, ಬಿಜೆಪಿ ಅಲ್ಲ, ಎನ್‍ಡಿಎ ಅಭ್ಯರ್ಥಿ ಗೆಲ್ಲೋದಷ್ಟೇ ಮುಖ್ಯ. ಆದುದರಿಂದ, ಕಾಂಗ್ರೆಸ್ ದುರಾಡಳಿತ ಕೊನೆಗಾಣಿಸಲು ಒಮ್ಮತದ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಗುರುವಾರ ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಜೆಡಿಎಸ್ ಹಾಗೂ ಬಿಜೆಪಿ ನಾಯಕರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ನಡುವೆ ಯಾವುದೇ ಕಾರಣಕ್ಕೂ ಮನಸ್ತಾಪ, ಗೊಂದಲಕ್ಕೆ ಅವಕಾಶ ಕೊಡಲ್ಲ. ಉಪ ಚುನಾವಣೆ, ಜಿಬಿಎ, ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿಯೂ ಇತ್ತೀಚೆಗೆ ನಾಲ್ಕು ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆ ರೀತಿ ಒಗ್ಗಟ್ಟಿನ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ರಾಜ್ಯ ಮಟ್ಟದಲ್ಲಿ ಜೊತೆಗೆ ಜಿಲ್ಲಾ ಮಟ್ಟದಲ್ಲಿಯೂ ಸಮನ್ವಯ ಸಮಿತಿ ರಚನೆ ಮಾಡುತ್ತೇವೆ. ಮುಖ್ಯಮಂತ್ರಿ ಅಭ್ಯರ್ಥಿ ಮುಖ್ಯ ಅಲ್ಲ. ಕಾಂಗ್ರೆಸ್ ಸೋಲಿಸಿ, ಎನ್‍ಡಿಎ ಅಧಿಕಾರಕ್ಕೆ ತರುವುದೇ ಮುಖ್ಯ. ಇದೊಂದು ಘೋಷಣೆಗಳ ಸರಕಾರ ಆಗಿದೆ. ಯಾವುದೇ ಕಾರ್ಯಕ್ರಮಗಳು ಜಾರಿಗೆ ಬರುತ್ತಿಲ್ಲ ಎಂದು ಅವರು ದೂರಿದರು.

ರಾಜ್ಯ ಮಟ್ಟದಲ್ಲಿ ಇಂತಹ ಕೆಟ್ಟ ಆಡಳಿತ ಹಿಂದೆಂದೂ ಕಂಡಿರಲಿಲ್ಲ. ಅಧಿವೇಶನದಲ್ಲಿ ಬೆಲೆಯೇರಿಕೆ ಸೇರಿದಂತೆ ಹಲವು ಜನಪರ ಚರ್ಚೆಗಳನ್ನು ಆದ್ಯತೆ ಮೇಲೆ ತೆಗೆದುಕೊಳ್ಳಲು ಚರ್ಚಿಸಲಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಮುಂದಿನ ಅಧಿವೇಶನದಲ್ಲಿ ಕಾಂಗ್ರೆಸ್ ಸರಕಾರಕ್ಕೆ ಬಿಸಿ ಮುಟ್ಟಿಸುವಂತಹ ಕೆಲಸವನ್ನು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟುಗೂಡಿ ಮಾಡಬೇಕು ಎಂಬ ನಿರ್ಧಾರ ಇವತ್ತು ಆಗಿದೆ. 5 ಸಾವಿರ ರೂ. ಪರಿಹಾರ ಕೊಡುತ್ತೇವೆ ಅಂತ ಹೇಳಿ ಘೋಷಣೆ ಮಾಡಿ, ನಾಮಕಾವಾಸ್ತೆಗೆ 45 ಸಾವಿರ ರೈತರಿಗೆ ಹಣ ಬಿಡುಗಡೆ ಮಾಡಿದ್ದಾರೆ ಎಂದು ಹೇಳಿದರು.

ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಚಾಳಿಯನ್ನು ಮುಂದುವರೆಸಿದ್ದಾರೆ. ರೈತರಿಗೆ ಪರಿಹಾರ ಕೊಡುವುದಕ್ಕೂ ಸಾಧ್ಯ ಆಗಿಲ್ಲ. ಕುಡಿಯುವ ನೀರಿನ ಹಾಹಾಕಾರ ಇದೆ, ರಾಜ್ಯ ಸರಕಾರದಿಂದ ಯಾವುದೇ ರೀತಿ ತಯಾರಿ ಕೂಡ ಇಲ್ಲ. ಬೆಲೆ ಏರಿಕೆಯಿಂದ ರಾಜ್ಯದ ಜನ ತತ್ತರಿಸಿ ಹೋಗಿದ್ದಾರೆ. ಆಶಾ ಕಾರ್ಯಕರ್ತರ ಬವಣೆ, ಈ ಎಲ್ಲವನ್ನು ಸದನದಲ್ಲಿ ಚರ್ಚೆಗೆ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದರು.

ಸಭೆಯಲ್ಲಿ ಉಭಯ ಸದನಗಳ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ ಬಾಬು, ಉಪ ನಾಯಕಿ ಶಾರದಾಪೂರ್ಯ ನಾಯಕ್, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜೆ.ಕೆ.ಕೃಷ್ಣಾ ರೆಡ್ಡಿ ಸೇರಿದಂತೆ ಇನ್ನಿತರ ಶಾಸಕರು, ವಿಧಾನಪರಿಷತ್ ಸದಸ್ಯರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಅಮ್ಜದ್ ಖಾನ್ ಎಂ./ವಾರ್ತಾಭಾರತಿ

ಬೆಂಗಳೂರು ವರದಿಗಾರರು

ಅಮ್ಜದ್ ಖಾನ್ ಎಂ. ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದು, 2007ರಿಂದ ವಾರ್ತಾಭಾರತಿ ಕನ್ನಡ ದೈನಿಕ ಬೆಂಗಳೂರು ಆವೃತ್ತಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವಾಸಿ ಅನುಭವದ ವಿಶೇಷ ಲೇಖನಗಳನ್ನು ಬರೆಯುವುದು, ಪುಸ್ತಕ ಓದುವುದು‌, ಸಾಮಾಜಿಕ ಸೇವಾ ಕಾರ್ಯಗಳು ಇವರ ಹವ್ಯಾಸವಾಗಿವೆ.