×
Ad

ಶಾಲೆಗಳಲ್ಲಿ ಹೃದಯ ಸಂಬಂಧಿ ತಪಾಸಣೆ ಕಡ್ಡಾಯ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Update: 2025-07-07 16:29 IST

ಬೆಂಗಳೂರು : ಹಠಾತ್ ಮರಣಗಳಿಗೆ ಕಾರಣವಾಗುವ ಕೆಲವು ಕಾಯಿಲೆಗಳನ್ನು ‘ಅಧಿಸೂಚಿತ ಕಾಯಿಲೆಗಳು' ಎಂದು ಘೋಷಿಸುವ ಜತೆಗೆ 15 ವರ್ಷದೊಳಗಿನ ಮಕ್ಕಳಿಗೆ ಶಾಲಾ ಹಂತದಲ್ಲಿಯೇ ಹೃದಯ ಸಂಬಂಧಿ ತಪಾಸಣೆಗಳನ್ನು ಕಡ್ಡಾಯಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಕಟಿಸಿದ್ದಾರೆ.

ಸೋಮವಾರ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ರವೀಂದ್ರನಾಥ್ ನೇತೃತ್ವದ ತಜ್ಞರ ಸಮಿತಿ ವರದಿಯನ್ನು ಸ್ವೀಕರಿಸಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

15 ವರ್ಷದೊಳಗಿನ ಮಕ್ಕಳಿಗೆ ಶಾಲಾ ಹಂತದಲ್ಲಿಯೇ ಹೃದಯ ಸಂಬಂಧಿ ತಪಾಸಣೆಗಳನ್ನು ಕಡ್ಡಾಯಗೊಳಿಸಲಾಗುವುದು. ಇದು ಬಾಲ್ಯದಲ್ಲಿಯೇ ಹೃದಯ ಸಮಸ್ಯೆಗಳನ್ನು ಗುರುತಿಸಿ ಚಿಕಿತ್ಸೆ ನೀಡಲು ನೆರವಾಗಲಿದೆ. ಹೃದಯಾಘಾತ ಮತ್ತು ಅಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಮೂಡಿಸುವ ವಿಷಯಗಳನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪಠ್ಯಪುಸ್ತಕಗಳಲ್ಲಿ ಅಳವಡಿಸಲಾಗುವುದು. ಈ ವರ್ಷ ನೈತಿಕ ಪಾಠಗಳ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಇನ್ನೂ, ಆಸ್ಪತ್ರೆಯ ಹೊರಗೆ ಸಂಭವಿಸುವ ಹಠಾತ್ ಮರಣಗಳಿಗೆ ಕಡ್ಡಾಯವಾಗಿ ಮರಣೋತ್ತರ ಪರೀಕ್ಷೆ ನಡೆಸಬೇಕು. ಇದು ಮರಣದ ನಿಖರ ಕಾರಣವನ್ನು ಪತ್ತೆಹಚ್ಚಲು ಮತ್ತು ಮುಂದಿನ ಕ್ರಮಗಳನ್ನು ಕೈಗೊಳ್ಳಲು ನೆರವಾಗಲಿದೆ ಎಂದ ಅವರು, ರೈಲ್ವೆ ನಿಲ್ದಾಣಗಳು ಮತ್ತು ಬಸ್ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳಲ್ಲೂ ಆಟೊಮೇಟೆಡ್ ಎಕ್ಸ್‌ ಟರ್ನಲ ಡಿಫೈಬ್ರಿಲ್ಲೇಟರ್ಸ್(ಎಇಡಿ) ಸಾಧನ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸರಕಾರಿ ನೌಕರರು ಮತ್ತು ಗುತ್ತಿಗೆದಾರರಿಗೆ ವರ್ಷಕ್ಕೊಮ್ಮೆ ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮಾಡಿಸಲಾಗುವುದು. ಖಾಸಗಿ ಕಂಪೆನಿಗಳ ಸಿಬ್ಬಂದಿಗೂ ವರ್ಷಕ್ಕೊಮ್ಮೆ ಆರೋಗ್ಯ ತಪಾಸಣೆ ಮಾಡಿಸುವುದನ್ನು ಕಡ್ಡಾಯಗೊಳಿಸಲಾಗುವುದು. ಈ ಎಲ್ಲ ಶಿಫಾರಸುಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

ಪುನೀತ್ ರಾಜ್‍ಕುಮಾರ್ ಯೋಜನೆ ವಿಸ್ತರಣೆ..!

ಪ್ರಸ್ತುತ ರಾಜ್ಯದ 86 ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪುನೀತ್ ರಾಜ್‍ಕುಮಾರ್ ವಿಜಯಜ್ಯೋತಿ ಯೋಜನೆ'ಯನ್ನು ತಾಲೂಕು ಆಸ್ಪತ್ರೆಗಳಿಗೂ ವಿಸ್ತರಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News