ಸಾಂದರ್ಭಿಕ ಚಿತ್ರ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ‘ಅರ್ನಾಬ್ ಮುರಸು’ ಚಂಡಮಾರುತದ ಅಬ್ಬರ ತಣ್ಣಗಾದ ಬೆನ್ನಲ್ಲೇ ಇದೀಗ ಮತ್ತೊಂದು ಚಂಡಮಾರುತದ ಆತಂಕ ಎದುರಾಗಿದ್ದು, ಕರ್ನಾಟಕದಲ್ಲಿಯೂ ನವೆಂಬರ್ 18 ಮತ್ತು 19ರಂದು ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಆಗ್ನೇಯ ಬಂಗಾಳಕೊಲ್ಲಿ ಮತ್ತು ಅಂಡಮಾನ್ ಸಮುದ್ರ ವ್ಯಾಪ್ತಿಯಲ್ಲಿ ವಾಯುಭಾರ ಕುಸಿದಿದ್ದು, ನ.16ರಂದು ಪ್ರಬಲ ಚಂಡಮಾರುತವು ಭಾರತದ ಪೂರ್ವ ಕರಾವಳಿ ತೀರಕ್ಕೆ ಅಪ್ಪಳಿಸುವ ಸಾಧ್ಯತೆಯಿದೆ. ಅದರ ಪರಿಣಾಮ, ಕರ್ನಾಟಕದಲ್ಲಿ ನ.18 ಮತ್ತು 19ರಂದು ಭಾರೀ ಮಳೆ ಸುರಿಯಲಿದೆ.

ಚಂಡಮಾರುತದ ಪರಿಣಾಮವಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ ಹಾಗೂ ಧಾರವಾಡ ಜಿಲ್ಲೆಗಳಿಗೆ ನ.19ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ನ.15ರಂದು ಮತ್ತಷ್ಟು ತೀವ್ರಗೊಂಡು, ವಾಯುವ್ಯ ದಿಕ್ಕಿನತ್ತ ಚಲಿಸಲಿದೆ. ನ.16ರ ವೇಳೆಗೆ ಮಧ್ಯ ಬಂಗಾಳಕೊಲ್ಲಿಯಲ್ಲಿ ಪ್ರಬಲ ಚಂಡಮಾರುತವಾಗಿ ರೂಪುಗೊಂಡು ಕರಾವಳಿ ತೀರಗಳಿಗೆ ಅಪ್ಪಳಿಸಲಿದೆ. ಒಡಿಶಾ ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದ್ದು, ಎರಡೂ ರಾಜ್ಯಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ.

ಚಂಡಮಾರುತದ ಹಿನ್ನೆಲೆಯಲ್ಲಿ ಸಮುದ್ರದ ಅಲೆಗಳು ಪ್ರಕ್ಷುಬ್ಧಗೊಂಡಿದ್ದು, ಗಂಟೆಗೆ 50ರಿಂದ 65 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುತ್ತಿದೆ. ಹೀಗಾಗಿ, ಈಗಾಗಲೇ ಸಮುದ್ರಕ್ಕೆ ಇಳಿದಿರುವ ಮೀನುಗಾರರು ತಕ್ಷಣವೇ ದಡಕ್ಕೆ ಮರಳುವಂತೆ ಸೂಚಿಸಲಾಗಿದೆ. ಅಲ್ಲದೆ, ನ.15ರಿಂದ 18ರವರೆಗೆ ಆಗ್ನೇಯ ಬಂಗಾಳಕೊಲ್ಲಿ ಮತ್ತು ನ.16ರಿಂದ 19ರವರೆಗೆ ಮಧ್ಯ ಬಂಗಾಳಕೊಲ್ಲಿ ಭಾಗದಲ್ಲಿ ಮೀನುಗಾರಿಕೆ ನಡೆಸದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor