ಅ.20ರಿಂದ ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ
ಸಾಂದರ್ಭಿಕ ಚಿತ್ರ
ಬೆಂಗಳೂರು : ರಾಜ್ಯದ ವಿವಿಧೆಡೆ ಅ.24ರವರೆಗೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ದಕ್ಷಿಣ ಒಳನಾಡಿನಲ್ಲಿ ಅ.24ರವರೆಗೆ ಹಾಗೂ ಕರಾವಳಿ ಭಾಗದಲ್ಲಿ ಅ.20ರಿಂದ 22ರ ವರೆಗೆ ಯೆಲ್ಲೋ ಅಲರ್ಟ್ ಜಾರಿಯಲ್ಲಿರಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಮತ್ತಷ್ಟು ಹೆಚ್ಚಾಗಲಿದೆ.
ಒಳನಾಡಿನ ದಾವಣಗೆರೆ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ, ಬೆಂಗಳೂರು ನಗರ, ಗ್ರಾಮಾಂತರ, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿಯಲ್ಲಿ ಸಾಧಾರಣ ಮಳೆಯಾಗಲಿದ್ದರೆ, ಬಾಗಲಕೋಟೆ ಮತ್ತು ಕೊಪ್ಪಳದಲ್ಲಿ ಹಗುರ ಮಳೆಯಾಗಲಿದೆ. ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.