ಜೂ.27ರವರಗೆ ಹೇಮಂತ್ ನಿಂಬಾಳ್ಕರ್ ವಿದೇಶ ಪ್ರವಾಸ; ಪ್ರಭಾರ ಆಯುಕ್ತರಾಗಿ ನಾಗೇಂದ್ರ ಪ್ರಸಾದ್ ಕೆ. ನೇಮಕ
ಹೇಮಂತ್ ಎಂ. ನಿಂಬಾಳ್ಕರ್
ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹಾಗೂ ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೋಲಿಸ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಹೇಮಂತ್ ಎಂ. ನಿಂಬಾಳ್ಕರ್ ಅವರು ಜೂ.12ರಿಂದ ಜೂ.27ರವರಗೆ ವಿದೇಶ ಪ್ರವಾಸ ಕೈಗೊಂಡಿರುವ ಹಿನ್ನೆಲೆಯಲ್ಲಿ ಅವರಿಗೆ ಗಳಿಕೆ ರಜೆಯನ್ನು ಮಂಜೂರು ಮಾಡಲಾಗಿದೆ.
ಬುಧವಾರದಂದು ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದ್ದು, ಹೇಮಂತ್ ಎಂ. ನಿಂಬಾಳ್ಕರ್ ಅವರ ಗಳಿಕೆ ರಜೆ ಅವಧಿಯಲ್ಲಿ ಕರ್ನಾಟಕ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕ ನಾಗೇಂದ್ರ ಪ್ರಸಾದ್ ಕೆ. ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಭಾರ ಆಯುಕ್ತರಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದೆ.
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆ ವೇಳೆ ನಡೆದ ಭೀಕರ ಕಾಲ್ತುಳಿತದ ಘಟನೆ ಬೆನ್ನಲ್ಲೇ ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶಿಸಿತ್ತು.