×
Ad

ವಾಲ್ಮೀಕಿ ನಿಗಮ ಹಗರಣ | ಆರೋಪಿ ಸತ್ಯನಾರಾಯಣ ವರ್ಮಾ ವಿರುದ್ಧದ ವಿಚಾರಣಾ ಪ್ರಕ್ರಿಯೆ ರದ್ದತಿಗೆ ಹೈಕೋರ್ಟ್ ನಕಾರ

Update: 2025-09-01 22:55 IST

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಗರಣದ ಮೊದಲ ಆರೋಪಿಯಾದ ಹೈದರಾಬಾದ್‌ನ ಜಿ.ಸತ್ಯನಾರಾಯಣ ವರ್ಮಾ ವಿರುದ್ಧದ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 23ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯದ (ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಸ್ಥಾಪನೆಗೊಂಡ ವಿಶೇಷ ನ್ಯಾಯಾಲಯ) ಇಡೀ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಕೋರಿ ಸತ್ಯನಾರಾಯಣ ವರ್ಮಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಿದ್ದು, ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ಆದೇಶವೇನು?

ಅರ್ಜಿದಾರರ ವಿರುದ್ಧ ಗಂಭೀರ ಆರೋಪಗಳಿವೆ. ಪ್ರಕರಣದ ಕುರಿತು ತನಿಖಾಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಅರ್ಜಿದಾರರ ವಿರುದ್ದದ ಪ್ರಕರಣವು ವಿಚಾರಣಾ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ಪೂರ್ಣ ಪ್ರಮಾಣದ ವಿಚಾರಣೆಗೂ ಮುನ್ನವೇ ಪ್ರಕರಣವನ್ನು ರದ್ದು ಕೋರಿ ಅರ್ಜಿದಾರರು ಈ ಅರ್ಜಿ ಸಲ್ಲಿಸಿದ್ದಾರೆ ಎಂದು ಹೈಕೋರ್ಟ್ ಆದೇಶದಲ್ಲಿ ಅಭಿಪ್ರಾಯಪಟ್ಟಿದೆ.

ಅರ್ಜಿದಾರರು ಈ ಮೊದಲು ತಮ್ಮ ಬಂಧನವನ್ನು ಅಕ್ರಮವೆಂದು ಘೋಷಿಸುವಂತೆ ಕೋರಿ ಒಂದು ರಿಟ್ ಅರ್ಜಿ ಸಲ್ಲಿಸಿದ್ದರು. ಅದನ್ನು ಹೈಕೋರ್ಟ್‌ನ ಮತ್ತೊಂದು ಪೀಠ ವಜಾಗೊಳಿಸಿತ್ತು. ಅದಾದ ಒಂದು ವಾರ ಬಳಿಕ ಈ ಅರ್ಜಿ ಸಲ್ಲಿಸಲಾಗಿದೆ. ಒಂದು ಅರ್ಜಿಯಲ್ಲಿ ಪರಿಹಾರ ದೊರಕದಿದ್ದರೆ, ಬೇರೆ ಅಂಶಗಳನ್ನು ಹುಡುಕಿ ಮತ್ತೊಂದು ಹೊಸ ಅರ್ಜಿ ಸಲ್ಲಿಸುತ್ತ ಕಾನೂನು ದುರುಪಯೋಗ ಮಾಡಿಕೊಳ್ಳಲಾಗಿದೆ. ಅರ್ಜಿದಾರರ ಈ ನಡೆಯನ್ನು ಒಪ್ಪಲಾಗದು. ವಿಚಾರಣಾ ನ್ಯಾಯಾಲಯ ವಿಚಾರಣೆ ಮುಂದುವರಿಯಬೇಕಿದೆ ಎಂದು ತಿಳಿಸಿರುವ ಹೈಕೋರ್ಟ್, ಅರ್ಜಿ ವಜಾಗೊಳಿಸಿ ಆದೇಶಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News