×
Ad

ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್‌ಗೆ ಆಹ್ವಾನ; ಹೈಕೋರ್ಟ್‌ಗೆ ಮತ್ತೆರಡು ಪಿಐಎಲ್ ಸಲ್ಲಿಕೆ

Update: 2025-09-10 20:38 IST

ಬೆಂಗಳೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್​ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರರುವ ರಾಜ್ಯ ಸರಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಮತ್ತೆರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿವೆ.

ಹಿಂದು ಧರ್ಮದವರಲ್ಲದ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವ ನಿರ್ಧಾರ ಹಿಂಪಡೆಯುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶಿಸಬೇಕು. ಜತೆಗೆ, ದಸರಾ ಉದ್ಘಾಟನೆಯು ಹಿಂದೂ ಧಾರ್ಮಿಕ ಸಂಪ್ರದಾಯದ ಅವಿಭಾಜ್ಯ ಭಾಗವೆಂದು ಘೋಷಿಸಿ, ಹಿಂದೂ ಗಣ್ಯರಿಂದ ಉದ್ಘಾಟಿಸಬೇಕು. ಭಕ್ತಾದಿಗಳ ಭಾವನೆಗಳಿಗೆ ಧಕ್ಕೆ ಆಗದಂತೆ ಹಿಂದೂ ಆಗಮಿಕ ಪದ್ಧತಿ ಪ್ರಕಾರವೇ ಕಟ್ಟುನಿಟ್ಟಾಗಿ ದಸರಾ ಉದ್ಘಾಟನೆ ನಡೆಸಲು ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಬೆಂಗಳೂರಿನ ನಿವಾಸಿ ಎಚ್.ಎಸ್. ಗೌರವ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಇದೇ ವಿಚಾರವಾಗಿ ಬೆಂಗಳೂರಿನ ಉದ್ಯಮಿ ಟಿ.ಗಿರೀಶ್ ಕುಮಾರ್ ಹಾಗೂ ಅಭಿನವ ಭಾರತ್ ಪಾರ್ಟಿಯ ರಾಷ್ಟ್ರೀಯ ಉಪಾಧ್ಯಕ್ಷೆ ಆರ್. ಸೌಮ್ಯಾ ಮತ್ತೊಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಎಲ್ಲ ಅರ್ಜಿಗಳೂ ಇನ್ನಷ್ಟೇ ನ್ಯಾಯಾಲಯದ ಮುಂದೆ ವಿಚಾರಣೆಗೆ ನಿಗದಿಯಾಗಬೇಕಿದೆ.

ಇನ್ನು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ಸರಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸೆಪ್ಟೆಂಬರ್ 6ರಂದೇ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ದಸರಾ ಉದ್ಘಾಟನೆ ವಿವಾದಕ್ಕೆ ಸಂಬಂಧಿಸಿದಂತೆ ಒಟ್ಟು ಮೂರು ಅರ್ಜಿಗಳು ಸಲ್ಲಿಕೆಯಾದಂತಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News