ಪಿಎಸ್‌ಐ ಅಕ್ರಮ ನೇಮಕಾತಿ ಹಗರಣ; ಎಡಿಜಿಪಿ ಅಮ್ರಿತ್ ಪೌಲ್ ವಿರುದ್ಧದ ಆರೋಪಪಟ್ಟಿ ರದ್ದತಿಗೆ ಹೈಕೋರ್ಟ್ ನಕಾರ
ಬೆಂಗಳೂರು: ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದ 35ನೇ ಆರೋಪಿಯಾಗಿರುವ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಎಡಿಜಿಪಿ) ಅಮ್ರಿತ್ ಪೌಲ್ ವಿರುದ್ಧದ ದೋಷಾರೋಪ ಪಟ್ಟಿ ಮತ್ತು ವಿಚಾರಣಾ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಸಿಐಡಿ ಪೊಲೀಸರು ಸಲ್ಲಿಸಿರುವ 7 (1 ಪ್ರಾಥಮಿಕ, 6 ಹೆಚ್ಚುವರಿ) ದೋಷಾರೋಪ ಪಟ್ಟಿಗಳನ್ನು ರದ್ದುಪಡಿಸಬೇಕು ಹಾಗೂ ನಗರದ 23ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ಅನೂರ್ಜಿತಗೊಳಿಸಬೇಕು ಎಂದು ಕೋರಿ ಎಡಿಜಿಪಿ (ಸದ್ಯ ಅಮಾನತಿನಲ್ಲಿರುವ) ಅಮ್ರಿತ್ ಪೌಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಜೆ.ಎಂ. ಖಾಜಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಜಾಗೊಳಿಸಿದೆ. ವಿಸ್ತೃತ ತೀರ್ಪಿನ ಪ್ರತಿ ಇನ್ನಷ್ಟೇ ಪ್ರಕಟವಾಗಬೇಕಿದೆ.
ವಿಚಾರಣೆ ವೇಳೆ ವಾದ ಮಂಡಿಸಿದ್ದ ಸಿಐಡಿ ಪೊಲೀಸರ ಪರ ವಿಶೇಷ ಅಭಿಯೋಜಕ ಪಿ. ಪ್ರಸನ್ನ ಕುಮಾರ್, ಅಮ್ರಿತ್ ಪೌಲ್ ಅವರು ಪಿಎಸ್ಐ ನೇಮಕಾತಿಯ ಉಸ್ತುವಾರಿ ವಹಿಸಿದ್ದರು. ಉತ್ತರ ಪತ್ರಿಕೆಗಳನ್ನು (ಒಎಂಆರ್ ಶೀಟ್) ಇರಿಸಲಾಗಿದ್ದ ಸ್ಟ್ರಾಂಗ್ ರೂಂ ಲಾಕರ್‌ನ ಕೀ ಪೌಲ್ ಅವರ ಬಳಿಯಿತ್ತು. ಅದನ್ನು ತಮ್ಮ ಕಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನೀಡಿ ಒಎಂಆರ್ ಶೀಟ್‌ಗಳನ್ನು ತಿದ್ದುಪಡಿ ಮಾಡಿದ್ದಾರೆ. ಮಧ್ಯವರ್ತಿಗಳೊಂದಿಗೆ ಒಳಸಂಚು ರೂಪಿಸಿ ನೇಮಕಾತಿಯಲ್ಲಿ ಅಕ್ರಮ ನಡೆಸಿದ್ದಾರೆ. ಈ ಕೃತ್ಯದ ಸಂಬಂಧ ಪಡೆದಿದ್ದ ಲಂಚದ ಹಣವನ್ನು ಜಪ್ತಿ ಮಾಡಲಾಗಿದೆ. ಆದ್ದರಿಂದ, ಅರ್ಜಿ ವಜಾಗೊಳಿಸಬೇಕು ಎಂದು ಕೋರಿದ್ದರು.