ಸ್ಮಾರ್ಟ್ ಮೀಟರ್ ಟೆಂಡರ್‌ನಲ್ಲಿ ಅಕ್ರಮ ಆರೋಪ: ಸಚಿವ ಕೆ.ಜೆ.ಜಾರ್ಜ್ ಅರ್ಜಿ ಕುರಿತ ಆದೇಶ ಕಾಯ್ದಿರಿಸಿದ ಹೈಕೋರ್ಟ್
ಕೆ.ಜೆ.ಜಾರ್ಜ್
ಬೆಂಗಳೂರು : ರಾಜ್ಯದಲ್ಲಿ ಸ್ಮಾರ್ಟ್ ವಿದ್ಯುತ್ ಮೀಟರ್‌ಗಳ ಖರೀದಿ ಮತ್ತು ಅಳವಡಿಕೆ ಟೆಂಡರ್‌ನಲ್ಲಿ ಅಕ್ರಮ ನಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಇಂಧನ ಸಚಿವ ಕೆ.ಜೆ.ಜಾರ್ಜ್ ಮತ್ತಿತರರು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ.
ಖಾಸಗಿ ದೂರು ದಾಖಲಿಸಲು ಕಚೇರಿಗೆ ನಿರ್ದೇಶಿಸಿರುವುದು ಮತ್ತು ಸ್ಮಾರ್ಟ್ ಮೀಟರ್ ಅಳವಡಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶಿಸಿರುವ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಚಿವ ಕೆ.ಜೆ ಜಾರ್ಜ್ ಹಾಗೂ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ, ತಾಂತ್ರಿಕ ವಿಭಾಗದ ನಿರ್ದೇಶಕ ಎಚ್.ಜೆ. ರಮೇಶ್ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಲೋಕಾಯುಕ್ತ ಪರ ವಕೀಲ ವೆಂಕಟೇಶ್ ಅರಬಟ್ಟಿ ವಾದ ಮಂಡಿಸಿ, ದೇಶದ ಬೇರೆ ಬೇರೆ ರಾಜ್ಯಗಳಲ್ಲಿ 97 ಮತ್ತು ಅದಕ್ಕೂ ಹೆಚ್ಚು ಅರ್ಹ ಟೆಂಡರ್‌ದಾರರು ಸ್ಮಾರ್ಟ್ ಮೀಟರ್ ಅಳವಡಿಕೆ ಕೆಲಸ ಮಾಡುತ್ತಾರೆ. ಅವರೂ ಈ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹರಾಗಿದ್ದರು. ಇದರ ಸಂಬಂಧಿತ ಮಾಹಿತಿಯು ಬೆಸ್ಕಾಂ ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ. ಐವರು ಟೆಂಡರ್‌ದಾರರ ಜತೆ ಚರ್ಚೆ ನಡೆದಿದೆ. ಮರು ಬಿಡ್ ಸಹ ಐವರ ನಡುವೆ ನಡೆದಿದೆ. ಎಲ್ಲರೂ ಕರ್ನಾಟಕದವರೇ ಇದ್ದರು. ಈ ಪೈಕಿ ಟೆಂಡರ್‌ನ 5 ಷರತ್ತುಗಳನ್ನು ಪೂರೈಸಲು ಮೂವರು ಬಿಡ್‌ದಾರರು ವಿಫಲವಾದ್ದರಿಂದ ಅನರ್ಹರಾಗಿದ್ದರು ಎಂದು ವರದಿಯಲ್ಲಿ ಹೇಳಲಾಗಿದೆ ಎಂದು ಅದನ್ನು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದರು.
ದೂರುದಾರರ ಪರ ಹಿರಿಯ ವಕೀಲೆ ಲಕ್ಷ್ಮಿ ಐಯ್ಯಂಗಾರ್ ಅವರು, 97 ಮಂದಿ ಇದ್ದರು ಎಂದು ವಕೀಲರು ಹೇಳಿದ್ದು, ಆನಂತರ ಅದಕ್ಕೂ ಹೆಚ್ಚು ಮಂದಿ ಬಿಡ್‌ದಾರರು ಇರಬಹುದು ಎಂದಿದ್ದಾರೆ. ನಮ್ಮ ಪ್ರಕಾರ 2 ಸಾವಿರ ಮಂದಿ ಟೆಂಡರ್‌ದಾರರು ಇದ್ದಾರೆ. ಇದರರ್ಥ ನಾವು ಏನು ಹೇಳಬೇಕು ಎಂದುಕೊಂಡಿದ್ದೆವೋ ಅದನ್ನು ಅವರ ಹೇಳಿಕೆ ಸಾಬೀತುಪಡಿಸಿದೆ ಎಂದರು.
ವಾದ ಮುಂದುವರಿಸಿದ ಅರಬಟ್ಟಿ ಅವರು, ದೂರುದಾರರು ಸಂಪೂರ್ಣವಾದ ಖಾಸಗಿ ದೂರು ನೀಡಿದ್ದಾರೆ. ಖಾಸಗಿ ದೂರಿನ ಜತೆ 14 ದಾಖಲೆಗಳಿವೆ. ದೂರುದಾರರು ಮತ್ತು ಟೆಂಡರ್‌ದಾರರು ಹಾಗೂ ಆರೋಪಿತ ಅಧಿಕಾರಿಗಳು ನಮ್ಮ ಪತ್ರಕ್ಕೆ ಪ್ರತಿಕ್ರಿಯೆ ಸಲ್ಲಿಸಿದ್ದಾರೆ ಎಂದರು.
ಅಂತಿಮವಾಗಿ ನ್ಯಾಯಪೀಠ, ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿಯ ವರದಿಯನ್ನು ದೂರುದಾರರು ಮತ್ತು ಅರ್ಜಿದಾರರಿಗೆ ನೀಡಬೇಕು. ಇದನ್ನು ಪರಿಶೀಲಿಸಿ, ಅವರು ಶುಕ್ರವಾರದೊಳಗೆ ತಮ್ಮ ವಾದಾಂಶಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ಹೀಗಾದಲ್ಲಿ ಮುಂದಿನ ವಾರದಲ್ಲಿ ಆದೇಶ ಪ್ರಕಟಿಸಲಾಗುವುದು ಎಂದು ಮೌಖಿಕವಾಗಿ ತಿಳಿಸಿ, ಆದೇಶ ಕಾಯ್ದಿರಿಸಿತು.
ಪ್ರಕರಣವೇನು?
ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಸಂಬಂಧಿಸಿದ ಟೆಂಡರ್ ಕಾನೂನುಬಾಹಿರವಾಗಿದೆ ಮತ್ತು ಈ ಟೆಂಡರ್ ನೀಡಿಕೆಯಿಂದ ಅಂದಾಜು 16 ಸಾವಿರ ಕೋಟಿ ರೂ. ಮೊತ್ತದ ದುರ್ಲಾಭ ಪಡೆಯಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಶಾಸಕರಾದ ಡಾ.ಸಿ.ಎನ್. ಅಶ್ವತ್ಥ ನಾರಾಯಣ, ಎಸ್.ಆರ್. ವಿಶ್ವನಾಥ್ ಮತ್ತು ಧೀರಜ್ ಮುನಿರಾಜು ಅವರು ವಿಚಾರಣಾಧೀನ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ.
ಸ್ಮಾರ್ಟ್ ಮೀಟರ್ ಸೇವೆ ಒದಗಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್ 26ರಂದು ಟೆಂಡರ್ ಕರೆಯಲಾಗಿತ್ತು. ಬಿಡ್‌ದಾರರಾದ ದಾವಣಗೆರೆಯ ರಾಜಶ್ರೀ ಎಲೆಕ್ಟ್ರಿಕಲ್ಸ್ ಎಂಬ ಶೆಲ್ ಕಂಪನಿಗೆ ಟೆಂಡರ್ ನೀಡಲಾಗಿದೆ ಎಂದು ಖಾಸಗಿ ದೂರಿನಲ್ಲಿ ಆರೋಪಿಸಲಾಗಿದ್ದು, ಈ ಟೆಂಡರ್ ಅನ್ನು ರಾಜ್ಯದಲ್ಲಿ ವಿವಿಧ ಭಾಗಗಳ ವಿದ್ಯುತ್ ಸರಬರಾಜು ಕಂಪನಿಗಳಿಗೆ ಪ್ರತ್ಯೇಕ ಟೆಂಡರ್ ಕರೆಯದೆ ಬೆಸ್ಕಾಂ ಕಂಪನಿ ಮೂಲಕವೇ ನೇರವಾಗಿ ಟೆಂಡರ್ ನೀಡಲಾಗಿದೆ. ಇದರಿಂದ, ಅಂದಾಜು 16 ಸಾವಿರ ಕೋಟಿ ರೂ. ಮೊತ್ತವನ್ನು ಪಡೆಯುವ ಅಕ್ರಮ ನಡೆದಿದೆ. ಕಾನೂನು ಬಾಹಿರವಾದ ಈ ಪ್ರಕ್ರಿಯೆ ಕರ್ನಾಟಕ ಸಾರ್ವಜನಿಕ ಖರೀದಿಯಲ್ಲಿ ಪಾರದರ್ಶಕತೆ (ಕೆಟಿಪಿಪಿ) ಅಧಿನಿಯಮ-2000 ಹಾಗೂ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (ಕೆಇಆರ್‌ಸಿ) ನಿಯಮಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಲಾಗಿದೆ.
ಇಂಧನ ಸಚಿವ ಕೆ.ಜೆ. ಜಾರ್ಜ್, ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಬೆಸ್ಕಾಂ ಮಾಜಿ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಬೆಸ್ಕಾಂನ ತಾಂತ್ರಿಕ ನಿರ್ದೇಶಕ ಎಚ್.ಜೆ. ರಮೇಶ್ ಅವರನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿತ್ತು. ಇದನ್ನು ಪರಿಗಣಿಸಿದ್ದ ವಿಚಾರಣಾ ನ್ಯಾಯಾಲಯ, ಖಾಸಗಿ ದೂರು ದಾಖಲಿಸಿಕೊಂಡು, ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿಗೆ ವರದಿ ನೀಡಲು ಆದೇಶಿಸಿತ್ತು. ಈ ಆದೇಶಕ್ಕೆ ಹೈಕೋರ್ಟ್ ಈ ಹಿಂದೆಯೇ ತಡೆ ನೀಡಿದೆ.