×
Ad

ಮುಡಾ ಹಗರಣ; ಜಿ.ಟಿ.ದಿನೇಶ್ ಕುಮಾರ್ ವಿರುದ್ಧದ ಪಿಎಂಎಲ್‌ಎ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ನಿರ್ಬಂಧ

Update: 2026-03-09 19:41 IST

ಬೆಂಗಳೂರು : ಅಕ್ರಮ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ (ಪಿಎಂಎಲ್‌) ಕಾಯ್ದೆ ಅಡಿ ದಾಖಲಿಸಿರುವ ಪ್ರಕರಣದ ವಿಚಾರಣೆ ನಡೆಸದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್‌ ನಿರ್ಬಂಧ ವಿಧಿಸಿದೆ.

ಪ್ರಕರಣದ ವಿಚಾರಣೆಯನ್ನು ಪಿಎಂಎಲ್‌ ಕಾಯ್ದೆ ಅಡಿ ಸ್ಥಾಪಿತವಾಗಿರುವ ವಿಶೇಷ ನ್ಯಾಯಾಲಯ ನಡೆಸಬೇಕೇ ಹೊರತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವಲ್ಲ ಎಂದು ಆಕ್ಷೇಪಿಸಿ ದಿನೇಶ್ ಕುಮಾರ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ದಿನೇಶ್‌ ಕುಮಾರ್‌ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿ, ಜಾರಿ ನಿರ್ದೇಶನಾಲಯ (ಈಡಿ) ಯಾವುದೇ ಜನಪ್ರತಿನಿಧಿಯ ವಿರುದ್ಧ ಪ್ರಕರಣ ದಾಖಲಿಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ನಾಲ್ವರ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಪ್ರಕರಣದಲ್ಲಿ ಬಿ ವರದಿ ಸಲ್ಲಿಕೆಯಾಗಿದ್ದು, ಅದನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಒಪ್ಪಿಕೊಂಡಿದೆ. ಇಲ್ಲಿ ಪ್ರಕರಣದ ವಿಚಾರಣೆ ನಡೆಸುವ ವ್ಯಾಪ್ತಿಯ ವಿಚಾರವಿದೆ. ಆದ್ದರಿಂದ, ವಾದಿಸಲು ಒತ್ತಾಯಿಸದಂತೆ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶಿಸಬೇಕು ಎಂದು ಕೋರಿದರು.

ಮುಂದುವರಿದು, ದೂರು ದಾಖಲಿಸಿದಾಗಿನಿಂದಲೂ ಈ ಪ್ರಕರಣದ ವಿಚಾರಣೆ ನಡೆಸುವ ಅಧಿಕಾರ ವ್ಯಾಪ್ತಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಇಲ್ಲ. ಯಾವುದೇ ಜನಪ್ರತಿನಿಧಿಯ ವಿರುದ್ಧ ಪ್ರಕರಣ ದಾಖಲಿಸಿಲ್ಲ. ಆದ್ದರಿಂದ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈವರೆಗೆ ಹೊರಡಿಸಿರುವ ಆದೇಶಗಳಿಗೆ ವ್ಯಾಪ್ತಿ ಇಲ್ಲ ಎಂದು ವಿವರಿಸಿದರು.

ಈಡಿ ಪರ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಕೆ. ಅರವಿಂದ್‌ ಕಾಮತ್‌ ಅವರು, ಈ ಹಿಂದೆ ಸುಪ್ರೀಂಕೋರ್ಟ್‌ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಪ್ರಕರಣ ಮುಂದುವರಿಯಲು ಕೆಲವು ಸಂದರ್ಭದಲ್ಲಿ ಅವಕಾಶ ಕಲ್ಪಿಸಿದೆ. ಈ ಸಂಬಂಧಿತ ತೀರ್ಪುಗಳನ್ನು ಇಟ್ಟು ವಾದಿಸಲು ಕಾಲಾವಕಾಶ ನೀಡಬೇಕು. ಅಲ್ಲಿಯವರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ಮುಂದೂಡುವಂತೆ ನಿರ್ದೇಶಿಸಬಹುದು. ಇಲ್ಲಿ ಪ್ರಮುಖ ಕಾನೂನಿನ ಪ್ರಶ್ನೆ ಇದೆ ಎಂದರು.

ಇದನ್ನು ಆಲಿಸಿದ ನ್ಯಾಯಪೀಠ, ಜಿ.ಟಿ. ದಿನೇಶ್‌ ಕುಮಾರ್‌ ವಿರುದ್ಧ ಈಡಿ ದಾಖಲಿಸಿರುವ ಪ್ರಕರಣದ ವಿಚಾರಣೆ ನಡೆಸದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವನ್ನು ಮುಂದಿನ ವಿಚಾರಣೆವರೆಗೆ ನಿರ್ಬಂಧಿಸಿತಲ್ಲದೆ, ಅರ್ಜಿ ವಿಚಾರಣೆಯನ್ನು ಮಾರ್ಚ್‌ 26ಕ್ಕೆ ಮುಂದೂಡಿತು‌.

ಪ್ರಕರಣವೇನು?

ಮುಡಾ ಆಯುಕ್ತರಾಗಿದ್ದ ಅವಧಿಯಲ್ಲಿ ಜಿ.ಟಿ. ದಿನೇಶ್‌ ಕುಮಾರ್‌ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಅಕ್ರಮವಾಗಿ ಅನರ್ಹರಿಗೆ ನಿವೇಶನಗಳನ್ನು ಹಂಚಿಕೆ ಮಾಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ. ಈ ಸಂಬಂಧ ಪಿಎಂಎಲ್‌ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಜಾರಿ ನಿರ್ದೇಶನಾಲಯ 2025ರ ಸೆಪ್ಟೆಂಬರ್‌ 17ರಂದು ದಿನೇಶ್‌ ಅವರನ್ನು ಬಂಧಿಸಿತ್ತು.

ಆನಂತರ, ಅಕ್ಟೋಬರ್‌ 5ರಂದು ದಿನೇಶ್‌ ಕುಮಾರ್‌ಗೆ ಸೇರಿದ ಸುಮಾರು 40 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು. ಬಳಿಕ ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ವಿರುದ್ಧ 2025ರ ನವೆಂಬರ್‌ 19ರಂದು ಆರೋಪಪಟ್ಟಿ ಸಹ ಸಲ್ಲಿಸಲಾಗಿತ್ತು. ಆಯುಕ್ತರಾಗಿದ್ದ ಸಮಯದಲ್ಲಿ ಅನರ್ಹರಿಗೆ ಒಟ್ಟು 450 ಕೋಟಿಗೂ ಅಧಿಕ ಬೆಲೆ ಬಾಳುವ 283 ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದ್ದಾರೆ ಎಂದು ಆರೋಪಪಟ್ಟಿಯಲ್ಲಿ ಹೇಳಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News