ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮದ ಆರೋಪ; ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ ಇಂಗಿತ

Update: 2026-07-29 21:52 IST

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿರುವ ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಭಾರಿ ಅಕ್ರಮ ಮತ್ತು ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಹೈಕೋರ್ಟ್ ಇಂಗಿತ ವ್ಯಕ್ತಪಡಿಸಿದೆ.

ಜತೆಗೆ, ಪ್ರಕರಣವನ್ನು ಸಿಬಿಐ ತನಿಖೆಗೆ ಏಕೆ ವಹಿಸಬಾರದು ಎಂಬ ಬಗ್ಗೆ ವಿವರಣೆ ನೀಡುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶಿಸಿರುವ ಹೈಕೋರ್ಟ್, ಈವರೆಗೆ ನಡೆಸಿರುವ ಮತ್ತು ಮುಂದೆ ನಡೆಸಲಿರುವ ತನಿಖೆಗೆ ಸಂಬಂಧಿಸಿದ ಸಮಗ್ರ ದಾಖಲೆಗಳನ್ನು ಆಗಸ್ಟ್ 7ರಂದು ಸಲ್ಲಿಸುವಂತೆ ಸರಕಾರಕ್ಕೆ ನಿರ್ದೇಶಿಸಿದೆ.

ಕೆಪಿಎಸ್‌ಸಿ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಮೂರು ಪ್ರತ್ಯೇಕ ಅರ್ಜಿಗಳನ್ನು ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸರಕಾರಕ್ಕೆ ಈ ನಿರ್ದೇಶನ ನೀಡಿದೆ.

ಇದೇ ವೇಳೆ, ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಅಭ್ಯರ್ಥಿಗಳು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿರುವ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿರುವ ನ್ಯಾಯಪೀಠ, ಅರ್ಜಿಯ ಮುಂದಿನ ವಿಚಾರಣೆವರೆಗೆ ಅರ್ಜಿದಾರ ಅಭ್ಯರ್ಥಿಗಳ ವಿರುದ್ಧ ಬಲವಂತದ ಕ್ರಮ ಜರುಗಿಸಬಾರದು. ಅವರನ್ನು ಬಂಧನ ಮಾಡಬಾರದು ಎಂದು ಸಿಐಡಿ ಪೊಲೀಸರಿಗೆ (ಸರಕಾರ) ಸೂಚಿಸಿ ವಿಚಾರಣೆಯನ್ನು ಆಗಸ್ಟ್ 7ಕ್ಕೆ ಮುಂದೂಡಿತು.

ಹೈಕೋರ್ಟ್ ಹೇಳಿದ್ದೇನು?

ಅರ್ಜಿಯಲ್ಲಿ ಪಶು ವೈದ್ಯಾಧಿಕಾರಿ ನೇಮಕಾತಿಯಲ್ಲಿ ದೊಡ್ಡ ಪ್ರಮಾಣದಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಕುರಿತು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರನ್ನು ಸಿಬಿಐ ತನಿಖೆಗೆ ವಹಿಸಲು ಅರ್ಜಿದಾರರು ಕೋರಿದ್ದಾರೆ. ದೂರಿನಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿನ ಭ್ರಷ್ಟಾಚಾರ, ಆಯ್ಕೆಯಾಗಿರುವ ಅಭ್ಯರ್ಥಿಗಳು ಮತ್ತು ಅವರು ಆಯ್ಕೆಯಾಗಿರುವ ವಿಧಾನದ ಕುರಿತಂತೆ ದೂರಿನಲ್ಲಿ ವಿವರಿಸಲಾಗಿದೆ. ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರಕಾರ ಆದೇಶಿಸಿದೆ. ಕೆಲ ಪ್ರಕರಣಗಳಲ್ಲಿ ಮಾತ್ರ ಸಿಐಡಿಯು ದೋಷಿಗಳ ಕೃತ್ಯ ಸಾಬೀತುಪಡಿಸಿದೆ ಎಂಬುದಾಗಿ ಆತಂಕ ವ್ಯಕ್ತಪಡಿಸಿ ಅರ್ಜಿದಾರರು ಈ ಅರ್ಜಿ ಸಲ್ಲಿಸಿದ ನಂತರ ಸರಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದೆ. ಇದರಿಂದ, ಸಿಐಡಿ ತನಿಖೆ ಮುಂದುವರಿಸಿದರೆ, ದೊಡ್ಡ ಪ್ರಮಾಣದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಬೆಳಕಿಗೆ ಬರದೆ ಹೋಗಬಹುದು. ಆದ್ದರಿಂದ, ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿದ್ದು, ಅರ್ಜಿಯಲ್ಲಿ ಸಿಬಿಐ ಅನ್ನು ಪ್ರತಿವಾದಿ ಮಾಡಲಾಗಿದೆ. ಆದ್ದರಿಂದ, ಪ್ರಕರಣವನ್ನು ಸಿಬಿಐ ತನಿಖೆಗೆ ಏಕೆ ವಹಿಸಬಾರದು? ಎಂಬ ಬಗ್ಗೆ ಆಕ್ಷೇಪಣೆ ಅಥವಾ ವಾದಾಂಶಗಳನ್ನು ಮುಂದಿನ ಶುಕ್ರವಾರದಂದು ರಾಜ್ಯ ಸರಕಾರ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.

ಇದಕ್ಕೂ ಮುನ್ನ ವಿಚಾರಣೆ ವೇಳೆ ರಾಜ್ಯ ಪ್ರಾಸಿಕ್ಯೂಟರ್‌ ಬಿ.ಎನ್. ಜಗದೀಶ್ ಅವರು, ಈಗಾಗಲೇ ಸಿಐಡಿ ತನಿಖೆ ಕೈಗೆತ್ತಿಕೊಂಡಿದ್ದು, ಸಿಸಿ ಕ್ಯಾಮರಾ ದೃಶ್ಯಗಳನ್ನು ಸಂಗ್ರಹಿಸಲಾಗಿದೆ. ಇದೇ 25ರಂದು ಎಫ್ಐಆರ್ ದಾಖಲಾಗಿದೆ. ಆದರೆ, ಇಷ್ಟರಲ್ಲಾಗಲೇ ಕೋರ್ಟಿಗೆ ಈ ಅರ್ಜಿ ಸಲ್ಲಿಸಲಾಗಿದೆ ಎಂದು ಆಕ್ಷೇಪಿಸಿದರಲ್ಲದೆ, ನ್ಯಾಯಪೀಠ ಸಿಐಡಿ ತನಿಖೆಯ ಮೇಲೆ ಯಾವುದೇ ಅಭಿಪ್ರಾಯ ವ್ಯಕ್ತಪಡಿಸಬಾರದು. ಸಿಐಡಿ ತನಿಖೆ ನಿರ್ಬಂಧಿಸಬಾರದು, ಮುಂದುವರಿಯಲು ಬಿಡಬೇಕು ಎಂದು ಕೋರಿದರು.

ಮುಂದುವರಿದು, ನ್ಯಾಯಾಲಯದ ಮೇಲ್ವಿಚಾರಣೆಯಲ್ಲೇ ತನಿಖೆ ನಡೆಸಬಹುದು. ಈ ಹಿಂದೆ ಸಿಐಡಿ ಉನ್ನತ ಶ್ರೇಣಿಯ ಅಧಿಕಾರಿಗಳು ತನಿಖೆ ನಡೆಸಿದ್ದು ಯಶಸ್ವಿಯಾಗಿದ್ದಾರೆ. ತನಿಖೆಯ ಯಾವುದೇ ದಾಖಲೆ ಕೇಳಿದರೂ ಕೊಡಲು ಸರಕಾರ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದರು.

ಇದಕ್ಕೆ ನ್ಯಾಯಮೂರ್ತಿಗಳು ಅರ್ಜಿದಾರರ ಆರೋಪದಲ್ಲಿ ತಪ್ಪೇನೂ ಕಾಣುತ್ತಿಲ್ಲ. ಇದು ಹಾಡಹಗಲಿನ ವಂಚನೆ. ಸಿಐಡಿ ತನಿಖೆಯನ್ನು ಮುಂದುವರಿಸಲು ಬಿಟ್ಟರೆ ನಡೆದಿದೆ ಎನ್ನಲಾಗಿರುವ ದೊಡ್ಡ ಪ್ರಮಾಣದ ಭ್ರಷ್ಟಾಚಾರ ಬೆಳಕಿಗೆ ಬಾರದೆ ಹೋಗಬಹುದು. ನನ್ನ ಆದೇಶ ಸರಿ ಇಲ್ಲ ಎನ್ನುವುದಾದರೆ ಮೇಲ್ಮನವಿ ಸಲ್ಲಿಸಿಕೊಳ್ಳಿ. ಅದಕ್ಕಾಗಿ ಒಂದು ವಾರ ಕಾಲಾವಕಾಶ ನೀಡುತ್ತಿದ್ದೇನೆ ಎಂದು ಅಸಮಾಧಾನ ವ್ಯಕ್ತಪಡಿಸಿತು.

ಸಿಐಡಿ ತನಿಖೆಯಲ್ಲಿ ಏನೂ ಆಗುವುದಿಲ್ಲ. ಪ್ರಕರಣವನ್ನು ಸಿಐಡಿ ತನಿಖೆ ನಡೆಸಬೇಕೇ? ಅಥವಾ ಸಿಬಿಐ ತನಿಖೆ ನಡೆಸಬೇಕೇ? ಎಂಬ ಬಗ್ಗೆ ನ್ಯಾಯಪೀಠ ನಿರ್ಧರಿಸುವವವರೆಗೆ ಸಿಐಡಿ ತನಿಖೆ ಮುಂದುವರಿಯಬಾರದು. ಈ ಕುರಿತು ಸೂಕ್ತ ಆದೇಶ ಹೊರಡಿಸಲಾಗುವುದು ಎಂದು ಹೇಳಿತು.

ಮೂರು ಅರ್ಜಿಗಳು:

ಕೆಪಿಎಸ್‌ಸಿ ಅಧ್ಯಕ್ಷ ಹುದ್ದೆಯಿಂದ ಅಮಾನತುಗೊಂಡಿರುವ ಶಿವಶಂಕರಪ್ಪ ಸಾಹುಕಾರ್ ಅವರ ಪುತ್ರಿ ಸುಮಾ ಎಸ್. ಸಾಹುಕಾರ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ವಿಜಯಪುರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತು ‘ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘ’ದ ಅಧ್ಯಕ್ಷ ಆರ್.‌ ಶ್ರೀಕಾಂತ್ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

ಪಶು ವೈದ್ಯಾಧಿಕಾರಿ ನೇಮಕದ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಆಯ್ಕೆಯಾಗಲು ವಿಫಲವಾಗಿರುವ ಚನ್ನರಾಯಪಟ್ಟಣದ ಅಭ್ಯರ್ಥಿ ಡಾ.ಮಂಜುನಾಥ್‌ ಅರ್ಜಿ ಸಲ್ಲಿಸಿದ್ದಾರೆ.

ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ನೇಮಕಾತಿ ಅಕ್ರಮದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಆಯ್ಕೆಯಾಗಿರುವ ಕೆಲ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News