ಎಸ್‌ಐಆರ್ ವೇಳೆ ಮುಸ್ಲಿಂ ಮತದಾರರ ಹೆಸರು ಅಳಿಸಲು ಯತ್ನಿಸಿದ ಆರೋಪ; ರವಿ ಪಾಟೀಲ್ ವಿರುದ್ಧ ಬಲವಂತದ ಕ್ರಮ ಬೇಡವೆಂದ ಹೈಕೋರ್ಟ್
ಬೆಂಗಳೂರು : ಬೆಳಗಾವಿಯಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ 198 ಮುಸ್ಲಿಂ ಮತದಾರರ ಹೆಸರುಗಳನ್ನು ಅಳಿಸಲು ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್‌ಐಆರ್ ಸಂಬಂಧಿತ ಪ್ರಕರಣದಲ್ಲಿ ಬಿಜೆಪಿ ನಾಯಕ ರವಿ ಪಾಟೀಲ್ ಮತ್ತವರ ಇಬ್ಬರು ಬೆಂಬಲಿಗರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಹೈಕೋರ್ಟ್ ನಿರ್ದೇಶಿಸಿದೆ.
ಬೆಳಗಾವಿಯ ಮಾರ್ಕೆಟ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಮತ್ತು ಆನಂತರ ಕಾನೂನು ಪ್ರಕ್ರಿಯೆ ರದ್ದು ಕೋರಿ ಬಿಜೆಪಿ ನಾಯಕ ರವಿ ಬಸಲಿಂಗಪ್ಪಗೌಡ ಪಾಟೀಲ್, ಅವರ ಬೆಂಬಲಿಗರಾದ ಶಂಕರ ಬೀರಪ್ಪ ನಾಯಕ್ ಮತ್ತು ಪ್ರಶಾಂತ್ ಮುಂಡಿಮಾನಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ವೆಂಕಟೇಶ್ ನಾಯ್ಕ್ ಅವರಿದ್ದ ಏಕಸದಸ್ಯ ನ್ಯಾಯಪೀಠ (ಧಾರವಾಡ) ಗುರುವಾರ ವಿಚಾರಣೆ ನಡೆಸಿತು.
ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಕಾರ್ಯಕರ್ತ ಮತ್ತು ದೂರುದಾರ ಮೀರಾಸಾಬ್ ಸನದಿ ಅವರಿಗೆ ನೋಟಿಸ್ ಜಾರಿಗೊಳಿಸಿತಲ್ಲದೆ, ಇತ್ತೀಚಿನ ತನಿಖಾ ವರದಿಯೊಂದಿಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಕಾಲಾವಕಾಶ ನೀಡಿತು. ಅಲ್ಲಿಯವರೆಗೆ ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಪ್ರತಿವಾದಿ ಪೊಲೀಸರು/ತನಿಖಾಧಿಕಾರಿಗೆ ನಿರ್ದೇಶಿಸಿದ ನ್ಯಾಯಪೀಠ, ವಿಚಾರಣೆಯನ್ನು ಅಕ್ಟೋಬರ್ 13ಕ್ಕೆ ಮುಂದೂಡಿತು.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರವಿ ಬಸಲಿಂಗಪ್ಪಗೌಡ ಪಾಟೀಲ್‌ಗ ಬೆಳಗಾವಿ ಸತ್ರ ನ್ಯಾಯಾಲಯವು ಅಕ್ಟೋಬರ್ 3ರಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
ಅರ್ಜಿದಾರರ ವಿರುದ್ಧದ ಆರೋಪವೇನು?
ಅರ್ಜಿದಾರರೂ ಸೇರಿದಂತೆ ಸುಮಾರು 20-25 ಮಂದಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಮತದಾರರನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದರು ಹಾಗೂ ಎಸ್‌ಐಆರ್ ಪ್ರಕ್ರಿಯೆಯಲ್ಲಿ 198 ಮುಸ್ಲಿಂ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಪ್ರಯತ್ನಿಸಿದ್ದರು ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.
ಅರ್ಜಿದಾರರ ವಿರುದ್ಧ ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.