ರಾಜ್ಯದ ಪ್ರತಿ ವ್ಯಕ್ತಿಗೂ ಶುದ್ಧ ಕುಡಿಯುವ ನೀರು ಪೂರೈಸುವುದು ರಾಜ್ಯ ಸರ್ಕಾರದ ಹೊಣೆ; ಹೈಕೋರ್ಟ್
ಬೆಂಗಳೂರು : ರಾಜ್ಯದ ಪ್ರತಿಯೊಬ್ಬ ನಾಗರಿಕನಿಗೂ ಶುದ್ಧ ಮತ್ತು ಸಮರ್ಪಕ ಕುಡಿಯುವ ನೀರು ಪೂರೈಸುವುದು ಸರ್ಕಾರದ ಜವಾಬ್ದಾರಿ ಎಂದು ಒತ್ತಿ ಹೇಳಿರುವ ಹೈಕೋರ್ಟ್, ರಾಜ್ಯದ ಎಲ್ಲ ಜಿಲ್ಲೆ ಹಾಗೂ ಗ್ರಾಮಗಳಲ್ಲಿ ನಾಗರಿಕರಿಗೆ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ನ್ಯಾಯಾಲಯದ ಆದೇಶ ಪಾಲಿಸಿ ಕೈಗೊಂಡ ಕ್ರಮಗಳ ಪರಿಶೀಲನೆಗೆ 'ಅಮೈಸ್ ಕ್ಯೂರಿ' (ಕೋರ್ಟ್ ನೆರವುಗಾರರು) ನೇಮಿಸಲಾಗುವುದು ಎಂದು ಹೇಳಿದೆ.
ಶುದ್ಧ ಕುಡಿಯುವ ನೀರು ಪೂರೈಕೆ ವಿಚಾರವಾಗಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಹೈಕೋರ್ಟ್ 2025ರ ಮೇ 28ರಂದು ನೀಡಿರುವ ಆದೇಶವನ್ನು ರಾಜ್ಯ ಸರ್ಕಾರ ಪಾಲಿಸಿಲ್ಲ ಎಂದು ಆಕ್ಷೇಪಿಸಿ ವಕೀಲ ರಮೇಶ್ ನಾಯಕ್ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ನ್ಯಾಯಮೂರ್ತಿ ಜಯಂತ್ ಬ್ಯಾನರ್ಜಿ ಹಾಗೂ ನ್ಯಾಯಮೂರ್ತಿ ಎನ್.ವಿ. ಭವಾನಿ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ಈ ವೇಳೆ ಸರ್ಕಾರದ ಪರ ವಕೀಲರು, ನ್ಯಾಯಾಲಯದ ಆದೇಶದ ಈವರೆಗಿನ ಅನುಪಾಲನಾ ವರದಿಯನ್ನು ಸಲ್ಲಿಸಿ ನ್ಯಾಯಾಲಯದ ಆದೇಶ ಪಾಲನೆಗೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಗರಾಭಿವೃದ್ದಿ ಇಲಾಖೆಗೆ ಸಂಬಂಧಿಸಿದಂತೆ ಎಲ್ಲ 31 ಜಿಲ್ಲೆಗಳಿಂದ ಮಾಹಿತಿ ಬಂದಿದ್ದು, ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು. ಗ್ರಾಮೀಣಾಭಿವೃದ್ದಿ ಇಲಾಖೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ 25 ಸಾವಿರಕ್ಕೂ ಅಧಿಕ ಗ್ರಾಮಗಳಿದ್ದು, ಹಲವು ಗ್ರಾಮಗಳಿಂದ ಇನ್ನೂ ಮಾಹಿತಿ ತರಿಸಿಕೊಳ್ಳಬೇಕಾಗಿದೆ ಇದಕ್ಕಾಗಿ 3 ವಾರ ಕಾಲಾವಕಾಶ ನೀಡುವಂತೆ ಕೋರಿದರು.
ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ಸರ್ಕಾರದಿಂದ ಸಂಪೂರ್ಣ ಮಾಹಿತಿ ಸಲ್ಲಿಕೆಯಾಗಲಿ. ಪ್ರತಿಯೊಬ್ಬ ವ್ಯಕ್ತಿಗೆ ಶುದ್ಧ ಕುಡಿಯುವ ನೀರು ಪೂರೈಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಆದ್ದರಿಂದ, ನ್ಯಾಯಾಲಯದಿಂದ ಒಬ್ಬ ವಕೀಲರನ್ನು ಅಮೈಕಸ್ ಕ್ಯೂರಿಯನ್ನಾಗಿ ನೇಮಕ ಮಾಡಲಾಗುವುದು. ಅವರು ಸ್ಥಳಗಳಿಗೆ ಭೇಟಿ ಕೊಟ್ಟು ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿ ವಾಸ್ತವ ಸಂಗತಿಗಳನ್ನು ನ್ಯಾಯಾಲಯದ ಗಮನಕ್ಕೆ ತರಲಿ. ಅವರ ಜತೆ ಸಂಬಂಧಪಟ್ಟ ಪರಿಣಿತರ ತಂಡ ಸಹ ಇರಲಿದೆ ಎಂದು ತಿಳಿಸಿ ಅರ್ಜಿ ವಿಚಾರಣೆ ಮುಂದೂಡಿತು.