ನಿಗದಿತ ಸಮಯ ಮೀರಿ ಪಟಾಕಿ ಸಿಡಿತ : ಸುಪ್ರೀಂ ಮಾರ್ಗಸೂಚಿ ಜಾರಿಗೆ ಕೈಗೊಂಡ ಕ್ರಮಗಳ ವರದಿ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು : ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾಜ್ಯದೆಲ್ಲೆಡೆ ನಿಗದಿತ ಸಮಯ ಮೀರಿ ತಡರಾತ್ರಿವರೆಗೂ ಪಟಾಕಿ ಸಿಡಿಸಲಾಗುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ಪಟಾಕಿಗಳ ಮಾರಾಟ ಮತ್ತು ಬಳಕೆ ನಿಯಂತ್ರಣಕ್ಕೆ ಸಂಬಂಧಿಸಿದ ಸುಪ್ರೀಂಕೋರ್ಟ್ ಮಾರ್ಗಸೂಚಿಗಳ ಜಾರಿಗೆ ಕೈಗೊಂಡಿರುವ ಕ್ರಮಗಳ ಕುರಿತು ಮೂರು ವಾರಗಳಲ್ಲಿ ವಿಸ್ತೃತ ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.
ಸುಪ್ರೀಂಕೋರ್ಟ್ ನಿಗದಿಪಡಿಸಿರುವ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಪಟಾಕಿ ಸಿಡಿಸಲಾಗುತ್ತಿದೆ ಎಂದು ಆಕ್ಷೇಪಿಸಿ ಬೆಂಗಳೂರಿನ ವಿನೋದ್ ಜಾಕೋಬ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನು ಶಿವರಾಮನ್ ಹಾಗೂ ನ್ಯಾಯಮೂರ್ತಿ ಕೆ.ಎಸ್. ಭರತ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿತು.
ವಿಚಾರಣೆ ವೇಳೆ ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠ, ಹಬ್ಬಗಳ ಸಂದರ್ಭದಲ್ಲಿ ಪಟಾಕಿ ಸಿಡಿಸಲು ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಅವಕಾಶವಿದ್ದರೂ ಈ ಸಮಯದ ಮಿತಿಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿಲ್ಲ. ರಾತ್ರಿ 9:30ರ ಬಳಿಕ ಪಟಾಕಿ ಸಿಡಿಸಲು ಆರಂಭಿಸಿ, ನಸುಕಿನವರೆಗೂ ಮುಂದುವರಿಸುವ ಪ್ರವೃತ್ತಿ ಕಂಡುಬರುತ್ತಿದೆ. ಪಟಾಕಿ ಸಿಡಿಸಲು ನಿಗದಿಪಡಿಸಿರುವ ಸಮಯದ ಮಿತಿಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಮೌಖಿಕವಾಗಿ ಅಭಿಪ್ರಾಯಪಟ್ಟಿತು.
ಪಟಾಕಿ ಬಳಕೆಯ ಮೇಲಿನ ಸಮಯದ ನಿರ್ಬಂಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಅಗತ್ಯವನ್ನು ಒತ್ತಿಹೇಳಿದ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಸರಕಾರ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ (ಕೆಎಸ್ಪಿಸಿಬಿ) ನೋಟಿಸ್ ಜಾರಿಗೊಳಿಸಿತು. ಜತೆಗೆ, ಸುಪ್ರೀಂಕೋರ್ಟ್ ಮಾರ್ಗಸೂಚಿಗಳ ಜಾರಿಗೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ವಿವರವಾದ ವರದಿ ಸಲ್ಲಿಸುವಂತೆ ಸೂಚಿಸಿ, ವಿಚಾರಣೆಯನ್ನು ಡಿಸೆಂಬರ್ 9ಕ್ಕೆ ಮುಂದೂಡಿತು.