ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಯ ತಿದ್ದುಪಡಿ ಪ್ರಶ್ನಿಸಿ ಅರ್ಜಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Photo credit: PTI
ಬೆಂಗಳೂರು: ಸಹಕಾರಿ ಬ್ಯಾಂಕುಗಳು ತಮ್ಮ ಠೇವಣಿಯ ಶೇ. 20 ಮೊತ್ತವನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಅಪೆಕ್ಸ್ ಅಥವಾ ಡಿಸಿಸಿ ಬ್ಯಾಂಕುಗಳಲ್ಲಿ ಇರಿಸಬೇಕು, ಬ್ಯಾಂಕಿನ ಅಧ್ಯಕ್ಷರು, ಪದಾಧಿಕಾರಿಗಳು ಪ್ರತಿ ವರ್ಷ ತಮ್ಮ ಆಸ್ತಿ ವಿವರಗಳನ್ನು ಘೋಷಿಸಬೇಕು ಎಂಬುದೂ ಸೇರಿದಂತೆ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಗೆ 2025ರಲ್ಲಿ ತರಲಾಗಿರುವ ಹಲವು ತಿದ್ದುಪಡಿಗಳನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಕರ್ನಾಟಕ ರಾಜ್ಯ ಅಡಿಕೆ ಸಹಕಾರ ಮಹಾಮಂಡಳ ನಿಯಮಿತ, ದಿ ತೋಟಗಾರ್ಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಹಾಗೂ ಮಲೆನಾಡು ಅಡಿಕೆ ಮಾರಾಟದ ಸಹಕಾರ ಸಂಘ ನಿಯಮಿತ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಐ ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಕೆಲ ಅರ್ಜಿ ಆಲಿಸಿದ ನ್ಯಾಯಪೀಠ ಪ್ರತಿವಾದಿಗಳಾದ ರಾಜ್ಯ ಸರ್ಕಾರ, ಸಹಕಾರ ಇಲಾಖೆ, ಸಂಸದೀಯ ಮತ್ತು ಶಾಸನ ರಚನಾ ಇಲಾಖೆ, ಸಹಕಾರ ಸಂಘಗಳ ನಿಬಂಧಕರಿಗೆ ನೋಟಿಸ್ ಜಾರಿಗೊಳಿಸಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಆಗಸ್ಟ್ 18ಕ್ಕೆ ಮುಂದೂಡಿತು.
ಸಹಕಾರ ಸಂಘಗಳ ಕಾಯ್ದೆಗೆ ತರಲಾಗಿರುವ ತಿದ್ದುಪಡಿಗಳು ಸಹಕಾರ ಸಂಘಗಳ ಸ್ವಾಯತ್ತತೆಯನ್ನು ಕಸಿದುಕೊಳ್ಳಲಿದೆ. ಈ ತಿದ್ದುಪಡಿಗಳು ಸಂವಿಧಾನಬಾಹಿರವಾಗಿದ್ದು, ಅವುಗಳನ್ನು ರದ್ದುಪಡಿಸಬೇಕು ಎಂದು ಮನವಿ ಮಾಡಿರುವ ಅರ್ಜಿದಾರರು, ಅರ್ಜಿ ಇತ್ಯರ್ಥ ಆಗುವವರೆಗೆ ಕಾಯ್ದೆಯ ತಿದ್ದುಪಡಿಗಳ ಜಾರಿಗೆ ತಡೆ ನೀಡಬೇಕು ಎಂದು ಮಧ್ಯಂತರ ಮನವಿ ಮಾಡಿದ್ದಾರೆ.