ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವೇಳೆ ತಪ್ಪು ಮಾಹಿತಿ ನೀಡಿ ಅರ್ಜಿ ನಮೂನೆ 7 (ಫಾರ್ಮ್-7) ಸಲ್ಲಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ ಸೇರಿ ನಾಲ್ವರ ವಿರುದ್ಧದ ಪೊಲೀಸ್‌ ತನಿಖೆಗೆ ಮಧ್ಯಂತರ ತಡೆ ನೀಡಲು ಹೈಕೋರ್ಟ್‌ ನಿರಾಕರಿಸಿದೆ.

ಇದೇ ವೇಳೆ, ಅರ್ಜಿದಾರರು ತನಿಖೆಗೆ ಸಹಕರಿಸಬೇಕು ಹಾಗೂ ಅವರನ್ನು ಬಂಧಿಸಬಾರದು ಎಂದು ನ್ಯಾಯಾಲಯ ಪೊಲೀಸರಿಗೆ ಸೂಚಿಸಿದೆ.

ನಗರದ ಸುದ್ದಗುಂಟೆಪಾಳ್ಯ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಸಿ.ಕೆ. ರಾಮಮೂರ್ತಿ ಸೇರಿ ನಾಲ್ವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ರಾಜ್ಯ ಸರ್ಕಾರಿ ಅಭಿಯೋಜಕ ಅನೂಪ್‌ ಕುಮಾರ್‌ ಅವರು ತನಿಖೆಗೆ ತಡೆ ನೀಡದಂತೆ ಮನವಿ ಮಾಡಿದರಲ್ಲದೆ, ಶಾಸಕ ಸಿ.ಕೆ. ರಾಮಮೂರ್ತಿ ಮಾತನಾಡಿದ್ದಾರೆನ್ನಲಾದ ಆಡಿಯೊ ಕುರಿತ ನ್ಯಾಯಾಲಯಕ್ಕೆ ಮಾಹಿತಿಯನ್ನು ಒದಗಿಸಿದರು.

ಆನಂತರ, ನ್ಯಾಯಪೀಠ ತನಿಖೆ ತಡೆ ಹಿಡಿಯುವ ಮಧ್ಯಂತರ ಆದೇಶ ನೀಡಲು ನಿರಾಕರಿಸಿತಾದರೂ, ಅರ್ಜಿದಾರರನ್ನು ಬಂಧಿಸದಂತೆ ಪೊಲೀಸರಿಗೆ ನಿರ್ದೇಶಿಸಿತು.

ಪ್ರಕರಣವೇನು?

ಜಯನಗರ ಕ್ಷೇತ್ರದಲ್ಲಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲು ಫಾರ್ಮ್-7 ದುರ್ಬಳಕೆ ಮಾಡಲಾಗಿದೆ ಎಂಬ ಆರೋಪ ಈ ಹಿಂದೆಯೂ ಕೇಳಿಬಂದಿತ್ತು. ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ನೀಡಿದ್ದ ದೂರಿನಲ್ಲಿ, ಕ್ಷೇತ್ರದಾದ್ಯಂತ 5,698 ಫಾರ್ಮ್-7 ಸಲ್ಲಿಕೆಯಾಗಿದ್ದು, ಅವುಗಳಲ್ಲಿ 4,327 ಅರ್ಜಿಗಳು ಗುರಪ್ಪನಪಾಳ್ಯ ವಾರ್ಡ್‌ಗೆ ಸಂಬಂಧಿಸಿದ್ದವು ಎಂದು ಆರೋಪಿಸಲಾಗಿತ್ತು. ಪ್ರಕರಣದಲ್ಲಿ ರಾಮಕೃಷ್ಣ, ವಿ. ರವಿಕುಮಾರ್‌, ಡಿ.ಆರ್‌. ಯೋಗೇಶ್‌ ಮತ್ತು ಸಿ.ಕೆ.ರಾಮಮೂರ್ತಿ ಅವರನ್ನು ಆರೋಪಿಗಳನ್ನಾಗಿಸಲಾಗಿತ್ತು. ಈ ಪ್ರಕರಣ‌ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿರುವ ಅರ್ಜಿದಾರರು, ಅರ್ಜಿ ಇತ್ಯರ್ಥವಾಗುವವರೆಗೆ ಮುಂದಿನ ತನಿಖೆಗೆ ತಡೆ ನೀಡುವಂತೆ ಮಧ್ಯಂತರ ಮನವಿ ಮಾಡಿದ್ದಾರೆ.

ಇದೇ ವಿವಾದಕ್ಕೆ ಸಂಬಂಧಿಸಿದಂತೆ ಕೆಲ ಬೂತ್‌ಮಟ್ಟದ ಏಜೆಂಟ್‌ಗಳ (ಬಿಎಲ್‌ಎ) ವಿರುದ್ಧ ದಾಖಲಾಗಿರುವ ಪ್ರತ್ಯೇಕ ಪ್ರಕರಣಗಳಲ್ಲಿ ಹೈಕೋರ್ಟ್‌ ತನಿಖೆಗೆ ಮಧ್ಯಂತರ ತಡೆ ನೀಡಿರುವುದನ್ನು ಇಲ್ಲಿ ಸ್ಮರಿಸಬಹುದು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor